ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ ನಡೆಯಿತು.ಪ್ರತಿಭಟನಾ ಸಭೆ ಮುಕ್ತಾಯವಾಗುತ್ತಿದ್ದಂತೆ ಕೆಲವರು ಖಾಸಗಿ ಬಸ್ಸಿಗೆ ಕಲ್ಲು ತೂರಾಟ ನಡೆಸಿ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ನೂರಾರು ಮಂದಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಲೇಡಿಹಿಲ್‌ನಲ್ಲಿರುವ ನಾರಾಯಣ ಗುರು ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿಯವರೆಗೆ ಬೃಹತ್ ಪಾದಯಾತ್ರೆ ನಡೆಸಿದರು. ಬಳಿಕ ಮಹಾನಗರ ಪಾಲಿಕೆ ಎದುರು ಪ್ರತಿಭಟನಾ ಸಭೆ ಜರಗಿತು. ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.ಪ್ರತಿಭಟನಾ ಸಭೆಯಲ್ಲಿ ನಾಯಕರ ಭಾಷಣ ಮುಗಿಯುತ್ತಿದ್ದಂತೆ ಕೆಲವು ಕಾರ್ಯಕರ್ತರು ರಸ್ತೆ ನಡುವೆ ಟಯರ್‌ಗಳನ್ನಿಟ್ಟು ಬೆಂಕಿ ಹಚ್ಚಿದರು, ರಸ್ತೆ ತಡೆ ನಡೆಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಕಿ ನಂದಿಸಿದರು. ಈ ಸಂದರ್ಭ ಕೆಲವರು ಸ್ಟೇಟ್‌ಬ್ಯಾಂಕ್‌ನಿಂದ ಜೋಕಟ್ಟೆ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಕಲ್ಲು ಎಸೆದಿದ್ದರಿಂದ ಬಸ್ಸಿನ ಮುಂಭಾಗದ ಗಾಜು ಪುಡಿಯಾಗಿತ್ತು. ಆದರೆ ಯಾರಿಗೂ ಗಾಯವಾಗಿಲ್ಲ.
ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಯಿತು. ಕೆಲವು ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದು ನಂತರ ಬಿಡುಗಡೆಗೊಳಿಸಿದರು. ಬಸ್ ಸಿಬ್ಬಂದಿ ಕಲ್ಲೆಸೆದ ಕುರಿತು ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರ ಅಸ್ಥಿರ ಯತ್ನ:
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ, ದ.ಕ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪ್ರಕಾಶ್ ರಾಥೋಡ್, ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯಪಾಲರ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಅದರ ಭಾಗವಾಗಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆರೋಪಿಸಿದರು.ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ಅವರ ವರ್ಚಸ್ಸು ಕುಗ್ಗಿಸಲು ಮುಂದಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ವಾಪಸ್ ಪಡೆಯುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ರಾಥೋಡ್ ಎಚ್ಚರಿಕೆ ನೀಡಿದರು.
ರಾಜ್ಯಪಾಲರ ಕಚೇರಿಗೆ ಮುತ್ತಿಗೆ:ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೇರುವ ಬಿಜೆಪಿ ಕನಸು ಈಡೇರದು. ಒಂದು ವೇಳೆ ರಾಜ್ಯಪಾಲರನ್ನು ರಾಷ್ಟ್ರಪತಿಯವರು ಹಿಂದಕ್ಕೆ ಕರೆಯಿಸಿಕೊಳ್ಳದಿದ್ದರೆ ಬಾಂಗ್ಲಾ ದೇಶದ ಪ್ರಧಾನ ಮಂತ್ರಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ. ಅವರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಂಥ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ ಎಂದು ಆರೋಪಿಸಿದರು.
ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಶಾಸಕ ಎನ್.ಎಂ.ಅಡ್ಯಂತಾಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಇನಾಯತ್ ಆಲಿ, ಶಶಿಧರ ಹೆಗ್ಡೆ, ಪದ್ಮರಾಜ್ ಪೂಜಾರಿ, ಪ್ರತಿಭಾ ಕುಳಾಯಿ, ಸುರೇಶ್ ಬಳ್ಳಾಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಕೋಡಿಜಾಲ್ ಇಬ್ರಾಹಿಂ, ಜಿ.ಎ.ಬಾವ, ವಿಶ್ವಾಸ್ ಕುಮಾರ್ ದಾಸ್ ಮತ್ತಿತರರಿದ್ದರು.ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ್ ಗೋಯಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಬಿ.ಪಿ. ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.