ಕನ್ನಡಪ್ರಭ ವಾರ್ತೆ ಕಾಗವಾಡಪಟ್ಟಣದ ಮೂಲಕ ಹಾದುಹೋಗುವ ಜೇವರ್ಗಿ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಬೃಹತ್ ಗಾತ್ರದ ತಗ್ಗು ಗುಂಡಿಗಳು ನಿರ್ಮಾಣವಾಗಿ ಹಲವು ವರ್ಷಗಳು ಕಳೆದರೂ ದುರಸ್ತಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಸೃಷ್ಟಿ ಪಾರ್ಕ್ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಸಂಘದ ಸದಸ್ಯರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಕಾಗವಾಡ

ಪಟ್ಟಣದ ಮೂಲಕ ಹಾದುಹೋಗುವ ಜೇವರ್ಗಿ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಬೃಹತ್ ಗಾತ್ರದ ತಗ್ಗು ಗುಂಡಿಗಳು ನಿರ್ಮಾಣವಾಗಿ ಹಲವು ವರ್ಷಗಳು ಕಳೆದರೂ ದುರಸ್ತಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಸೃಷ್ಟಿ ಪಾರ್ಕ್ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಸಂಘದ ಸದಸ್ಯರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, 2018ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಚಾಲನೆಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ರಸ್ತೆಯುದ್ದಕ್ಕೂ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ಧೂಳು ಹಾಗೂ ಹದಗೆಟ್ಟ ರಸ್ತೆಯಿಂದ ವಾಹನ ಸವಾರರು ಮತ್ತು ಪಾದಚಾರಿಗಳು ನಿತ್ಯ ತೊಂದರೆ ಅನುಭವಿಸುವಂತಾಗಿದೆ. ಅಪಘಾತಗಳೂ ಸಂಭವಿಸುತ್ತಿವೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರವೇ, ಜೈ ಕರ್ನಾಟಕ ಸೇನೆ, ಕಿತ್ತೂರು ಕರ್ನಾಟಕ ಸೇನೆ ಹಾಗೂ ಸೃಷ್ಟಿ ಪಾರ್ಕ್ ಸಂಘದ ಕಾರ್ಯಕರ್ತರು ಕಾಗವಾಡ-ಮಿರಜ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಗವಾಡ ಪಿಎಸ್‌ಐ ರಾಘವೇಂದ್ರ ಖೋತ್ ಹಾಗೂ ಪೊಲೀಸ್ ಸಿಬ್ಬಂದಿ, ಪ್ರತಿಭಟನಾಕಾರರ ಬೇಡಿಕೆಗಳು ನ್ಯಾಯಯುತವಾಗಿವೆ. ಆದರೆ ರಸ್ತೆ ತಡೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಲಾಗಿದೆ ಎಂದು ಮನವೊಲಿಸಲು ಪ್ರಯತ್ನಿಸಿದರು. ಆದರೆ, ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದ ಹೋರಾಟಗಾರರು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಯಿತು.

ಅಧಿಕಾರಿಗಳ ಭರವಸೆ; ಪ್ರತಿಭಟನೆ ಹಿಂಪಡೆದ ಹೋರಾಟಗಾರರು:

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಜಯಪುರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ವಿವೇಕ ಮಠ ಹಾಗೂ ವಿಜಯ ಪಾಟೀಲ ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಹೋರಾಟಗಾರರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಎಇಇ ವಿವೇಕ ಮಠ, ಕಾಗವಾಡ ಪಟ್ಟಣದ ರಸ್ತೆ ಅಭಿವೃದ್ಧಿಗಾಗಿ ಹೊಸದಾಗಿ ಟೆಂಡರ್ ಕರೆಯಲಾಗಿದೆ. ಮೂರು ತಿಂಗಳೊಳಗೆ ಕಾಮಗಾರಿ ಆರಂಭಿಸಲಾಗುವುದು. ಅಲ್ಲಿಯವರೆಗೆ ಇಂದಿನಿಂದಲೇ ತಾತ್ಕಾಲಿಕ ದುರಸ್ತಿ ಕಾರ್ಯ ಆರಂಭಿಸಿ, ಒಂದು ವಾರದೊಳಗೆ ರಸ್ತೆ ಗುಂಡಿಗಳಿಗೆ ಡಾಂಬರು ಹಾಕಿ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರರು, ವಾರದೊಳಗೆ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಳಿಸದಿದ್ದರೆ ಮತ್ತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯಲ್ಲಿ ಗ್ರೇಡ್-2 ತಹಶೀಲ್ದಾರ್ ರಶ್ಮಿ ಜಕಾತಿ, ಪಿಎಸ್‌ಐ ರಾಘವೇಂದ್ರ ಖೋತ್, ಸೃಷ್ಟಿ ಪಾರ್ಕ್ ಸಂಘದ ಅಧ್ಯಕ್ಷೆ ದೇವಿಕಾ ನಗರಕರ, ಕರವೇ ಅಧ್ಯಕ್ಷ ಸಿದ್ದು ವಡೆಯರ, ಮುಖಂಡರಾದ ಜ್ಯೋತಿಕುಮಾರ ಪಾಟೀಲ, ರಮೇಶ ಚೌಗುಲೆ, ವಿನಾಯಕ ಚೌಗಲಾ, ಪ್ರವೀಣ ಪಾಟೀಲ, ರವೀಂದ್ರ ಪಾಟೀಲ, ಶಿವಾನಂದ ನವಿನಾಳೆ, ಗಣೇಶ ಕೋಳೆಕರ, ಫಾರುಕ್ ಅಲಾಸ್ಕರ್, ವಿನೋದ ಕಾಂಬಳೆ, ರಾಮು ವಡ್ಡರ, ನ್ಯಾಯವಾದಿ ರಾಹುಲ ಕಟಗೇರಿ, ವಿನಾಯಕ ಕಾಂಬಳೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ, ಮಹಿಳಾ ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಅಧಿಕಾರಿಗಳ ಉದ್ಧಟತನಕ್ಕೆ ಆಕ್ರೋಶ:

ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಅಧಿಕಾರಿಗಳನ್ನು ಪ್ರಶ್ನಿಸಿದಾಗ, "ಇಂತಹ ಪ್ರತಿಭಟನೆಗಳನ್ನು ನಾವು ಅದೆಷ್ಟು ನೋಡಿಲ್ಲ? ಇವು ನಡೆಯುತ್ತಲೇ ಇರುತ್ತವೆ. ಪತ್ರಿಕೆಗಳಲ್ಲಿ ದೊಡ್ಡದಾಗಿ ಪ್ರಕಟಿಸಿ " ಎಂದು ದರ್ಪದ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ.

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಬೇಕಾದ ಅಧಿಕಾರಿಗಳ ಇಂತಹ ವರ್ತನೆಗೆ ಸಾರ್ವಜನಿಕರು ಹಾಗೂ ಹೋರಾಟಗಾರರು ತೀವ್ರ ಆಕ್ರೋಶ ಮತ್ತು ಖಂಡನೆ ವ್ಯಕ್ತಪಡಿಸಿದ್ದಾರೆ.