ಸಾರಾಂಶ
ಹುಬ್ಬಳ್ಳಿ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ. ಬಿ.ಆರ್. ಅಂಬೇಡ್ಕರ್‌ಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ, ಸಮತಾ ಸೈನಿಕ ದಳ ಹಾಗೂ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಇಲ್ಲಿನ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ವೃತ್ತದಿಂದ ರಾಣಿ ಚೆನ್ನಮ್ಮ ವೃತ್ತದ ವರೆಗೆ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾ ನಿರತರು ಅಮಿತ್ ಶಾ ಭಾವಚಿತ್ರಕ್ಕೆ ಕಾಲಿನಿಂದ ಒದ್ದು, ಬಾಯಿ ಬಡಿದುಕೊಳ್ಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ದೇಶಕ್ಕೆ ಸಂವಿಧಾನ ನೀಡಿದ ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರದ ಗೃಹ ಸಚಿವ ಅಮಿತ್ ಶಾ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ಅವರಿಗೆ ಅಪಮಾನ ಮಾಡಿದ್ದಾರೆ. ಈ ಕೂಡಲೇ ಅವರು ದೇಶದ ಜನತೆಯ ಮುಂದೆ ಬಹಿರಂಗ ಕ್ಷಮೆಯಾಚಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದೇ ಇದ್ದರೆ ಮುಂದಿನ ದಿನಗಳಲ್ಲಿ ದಲಿತ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೀದಿಗಳಿದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಈ ವೇಳೆ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಮಾರುತಿ ದೊಡ್ಡಮನಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪಿ. ಬಿಳಾರ, ಜಿಲ್ಲಾ ಚಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ರವೀಂದ್ರ ಕಲ್ಯಾಣಿ ಹಾಗೂ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಯಾತಗಿರಿ, ವಿರೂಪಾಕ್ಷ ಚಲವಾದಿ, ಶಂಕರ ಪಾತ್ರದ, ಉಡಚಪ್ಪ ಕಾಕಣ್ಣವರ, ಶ್ರೀಶೈಲ ಚಲವಾದಿ, ಲಕ್ಷ್ಮಣ ಚಲವಾದಿ, ಚಿರು ಬೆಂಗೇರಿ ಸೇರಿದಂತೆ ಹಲವರಿದ್ದರು.
ಜೈ ಭೀಮರಾವ್ ಯುವ ಸಂಘದಿಂದ ಪ್ರತಿಭಟನೆ:ಅಂಬೇಡ್ಕರ್‌ಗೆ ಅವಮಾನ ಮಾಡಿದ ಕೇಂದ್ರ ಸಚಿವ ಅಮಿತ್ ಶಾ ಅವರ ಮೇಲೆ ಕ್ರಮಕ್ಕೆ ಒತ್ತಾಯಿಸಿ ಜೈ ಭೀಮರಾವ್ ಯುವ ಸಂಘದಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.
ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಅಲ್ಲಿಂದ ರಾಣಿ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ನಂತರ ಅಲ್ಲಿಂದ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಜಿಲ್ಲಾಧ್ಯಕ್ಷ ವಿನೋದ ಕೊರವರ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.