ಸಾರಾಂಶ
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿರುವ ಕ್ರಮ ಖಂಡಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆ.29 ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ರಾಮಚಂದ್ರ ತಿಳಿಸಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಯಕ ಜನಾಂಗದವರು ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸಮಾವೇಶಗೊಂಡು ಅಲ್ಲಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ತಲುಪಿ ಅಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಸಹಕಾರ ಸಚಿವರಾಗಿದ್ದ ರಾಜಣ್ಣ ಅವರನ್ನು ಯಾವುದೇ ನಿರ್ಧಿಷ್ಟ ಕಾರಣ ಕೊಡದೇ ಏಕಾಏಕಿ ವಜಾ ಮಾಡಿರುವುದು ಖಂಡನೀಯ. ಇದೊಂದು ರಾಜಕೀಯ ಪ್ರೇರಿತವಾಗಿದ್ದು ರಾಜಣ್ಣ ಅವರ ಮೇಲೆ ಯಾವುದೇ ಭ್ರಷ್ಟಚಾರದ ಆರೋಪಗಳಿರಲಿಲ್ಲ. ಇದೊಂದು ನಾಯಕ ಜನಾಂಗಕ್ಕೆ ಮಾಡಿದ ಅನ್ಯಾಯವಾಗಿದೆ ಎಂದರು.ಆ. 29ರಂದು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸೆ.2 ರಂದು ಚಾಮರಾಜನಗರದಲ್ಲಿಯೂ ಪ್ರತಿಭಟನೆ ನಡೆಸಲಾಗುವುದು. ರಾಜಣ್ಣ ಅವರಿಗೆ ಮತ್ತೆ ಮಂತ್ರಿ ಸ್ಥಾನ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಜನಾಂಗದಿಂದ ಪ್ರತಿಭಟನೆ ನಡೆಸಲಾಗುವುದು ಎಂದರು.
ಪಕ್ಷತೀತವಾಗಿ ನಾಯಕ ಜನಾಂಗದಿಂದ ಹೋರಾಟ ಹಮ್ಮಿಕೊಳ್ಳಲಿದ್ದು, ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಮುಖಂಡ ಶ್ರೀನಿವಾಸ ನಾಯಕ ಮಾತನಾಡಿ, ರಾಜಣ್ಣ ಅವರಿಗೆ ಯಾವುದೇ ಶೋಕಾಸ್ ನೋಟಿಸ್ ನೀಡದೆ ಏಕಾಏಕಿ ಸಚಿವ ಸಂಪುಟದಿಂದ ವಜಾ ಮಾಡಿರುವುದು ಖಂಡನೀಯ. ಬಲಿಷ್ಟ ಜನಾಂಗಗಳಿಂದ ನಾಯಕ ಜನಾಂಗದ ಮೇಲೆ ದೌರ್ಜನ್ಯ ನಡೆಯುತ್ತಿದೆ. ನಾಯಕ ಜನಾಂಗದ ಸ್ವಾಭಿಮಾನ ಪ್ರಶ್ನೆಯಾಗಿದೆ ಎಂದರು.
ಸಂಘದ ಉಪಾಧ್ಯಕ್ಷ ಮಲ್ಲೇಶ್ ಮಾತನಾಡಿ, ಸಹಕಾರ ಸಚಿವರಾಗಿದ್ದ ರಾಜಣ್ಣ ಅವರು ದಿಟ್ಟ, ನೇರ ರಾಜಕಾರಣಿಯಾಗಿದ್ದು ಅವರನ್ನು ಏಕಾ ಏಕಿ ಸಚಿವ ಸಂಪುಟದಿಂದ ಕೈಬಿಡಲಾಗಿದೆ. ಅಲ್ಲದೇ ಎಸ್ಟಿ ಸಮಾಜದ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ನಾಗೇಂದ್ರ ಅವರನ್ನು ಬಲಿಪಶು ಮಾಡಲಾಗಿದೆ. ನಾಯಕ ಜನಾಂಗವನ್ನು ರಾಜಕೀಯವಾಗಿ ತುಳಿಯಲಾಗುತ್ತಿದೆ ಎಂದು ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಬಿಕಾಂ ಮಹದೇವನಾಯಕ, ಮಲ್ಲೇಶ್, ಸುರೇಶ್, ವೆಂಕಟರಮಣನಾಯಕ, ರಾಚಪ್ಪ ಇದ್ದರು.