ಕೈಯಲ್ಲಿ ನೀಲಿ ಬಾವುಟ ಹಿಡಿದು, ಕೊರಳಲ್ಲಿ ನೀಲಿ ಶಾಲು ಧರಿಸಿದ್ದ ಕಾರ್ಯಕರ್ತರು ಜೈ ಭೀಮ್ ಹಾಗೂ ದಲಿತ ವಿರೋಧಿ ನೀತಿಗಳಿಗೆ ಧಿಕಾರ ಎಂಬ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ಕನ್ನಡಪ್ರಭ ವಾರ್ತೆ ಚೇಳೂರು ತಾಲೂಕಿನ ದಲಿತ ಸಮುದಾಯದ ದಶಕಗಳ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಮತ್ತು ತಾಲೂಕು ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿಯ (ದಸಂಸ) ಚೇಳೂರು ಶಾಖೆ ವತಿಯಿಂದ ಬೃಹತ್ ತಮಟೆ ಚಳವಳಿ ಹಾಗೂ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಅಲ್ಲಿಂದ ತಹಸೀಲ್ದಾರ್ ಕಚೇರಿಯವರೆಗೆ ಬೃಹತ್ ಪಾದಯಾತ್ರೆ ನಡೆಸಿದರು. ಕೈಯಲ್ಲಿ ನೀಲಿ ಬಾವುಟ ಹಿಡಿದು, ಕೊರಳಲ್ಲಿ ನೀಲಿ ಶಾಲು ಧರಿಸಿದ್ದ ಕಾರ್ಯಕರ್ತರು ಜೈ ಭೀಮ್ ಹಾಗೂ ದಲಿತ ವಿರೋಧಿ ನೀತಿಗಳಿಗೆ ಧಿಕಾರ ಎಂಬ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಒಂದು ವರ್ಷದ ಸುಳ್ಳು ಭರವಸೆ:ತಹಸೀಲ್ದಾರ್ ಕಚೇರಿ ಮುಂಭಾಗ ನಡೆದ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ಮುಖಂಡರು, ಕಳೆದ ಬಾರಿ ಹನ್ನೊಂದು ದಿನಗಳ ಕಾಲ ಧರಣಿ ನಡೆಸಿದಾಗ ಭರವಸೆ ನೀಡಿದ್ದ ಅಧಿಕಾರಿಗಳು ಈವರೆಗೂ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕರಾದ ಕೆ.ಸಿ. ರಾಜಾಕಾಂತ್ ಅವರು ಮಾತನಾಡಿ, ದಲಿತರ ಭೂಮಿ ಹಕ್ಕು, ವಸತಿ ಸೌಲಭ್ಯ ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ, ಶೀಘ್ರವೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. ತಾಲೂಕು ಸಂಚಾಲಕ ಜಿ. ನರಸಿಂಹಪ್ಪ ಮಾತನಾಡಿ, ಸ್ಥಳೀಯ ಮಟ್ಟದ ಸಮಸ್ಯೆಗಳ ಬಗ್ಗೆ ಪಟ್ಟಿ ನೀಡಿದರೂ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ದೂರಿದರು.ತಹಸೀಲ್ದಾರ್ ಭರವಸೆ:
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಶ್ವೇತಾ ಬಿ.ಕೆ. ಅವರು ಪ್ರತಿಭಟನಾಕಾರರಿಂದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿ, ಸಮಿತಿಯ ಬೇಡಿಕೆಗಳು ನನ್ನ ಗಮನಕ್ಕೆ ಬಂದಿವೆ. ನಿಯಮಾನುಸಾರ ಯಾವೆಲ್ಲಾ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಸಾಧ್ಯವಿದೆಯೋ ಅವುಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಸರ್ಕಾರದ ಮಟ್ಟದಲ್ಲಿ ಬಗೆಹರಿಯಬೇಕಾದ ವಿಷಯಗಳನ್ನು ಶೀಘ್ರವೇ ಮೇಲಧಿಕಾರಿಗಳಿಗೆ ವರದಿ ಮಾಡಲಾಗುವುದು ಎಂದು ಭರವಸೆ ನೀಡಿದರು.ಈ ಹೋರಾಟದಲ್ಲಿ ಮುಖಂಡರಾದ ರಾಜ್ಯ ಮುಖಂಡರು ಎನ್ ವೆಂಕಟೇಶ್,ಸಿಜಿ ಗಂಗಪ್ಪ, ಎನ್ ಎ ವೆಂಕಟೇಶ್,ಪರಮೇಶ್, ಪೈಪಾಳ್ಯ ರವಿ,ಚೆಂಡೂರು ರಮಣ,ಶ್ರೀರಂಗಪ್ಪ, ಡಿ.ವಿ. ವೆಂಕಟೇಶ್, ಈಶ್ವರ್, ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.