ಅಪೌಷ್ಠಿಕತೆ ಮುಕ್ತಗೊಳಿಸಲು ಮಾತೃವಂದನಾ ಸಹಕಾರಿ

| Published : Sep 25 2025, 01:00 AM IST

ಸಾರಾಂಶ

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಬುಧವಾರ ನಡೆದ ಪೋಷಣ್ ಮಾಸಾಚರಣೆ, ಮಾತೃವಂದನಾ ಸಪ್ತಾಹವು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗಮನಸೆಳೆಯಿತು

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಬುಧವಾರ ನಡೆದ ಪೋಷಣ್ ಮಾಸಾಚರಣೆ, ಮಾತೃವಂದನಾ ಸಪ್ತಾಹವು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗಮನಸೆಳೆಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಇನ್ನಿತರ ಗಣ್ಯರ ಸಮ್ಮುಖದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಕ್ಕಳಿಗೆ ಅಕ್ಷರಾಭ್ಯಾಸ, ಅನ್ನಪ್ರಾಶನ ನೆರವೇರಿಸಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರೊಂದಿಗೆ ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ ನೆರವೇರಿಸಿದರು. ಸಮಗ್ರ ಮಕ್ಕಳ ಅಭಿವೃದ್ದಿ ಸೇವೆಯ ಪಂಚಸೂತ್ರಗಳು (ಐಸಿಡಿಎಸ್), ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೆಲ್ಫಿ ಸ್ಟ್ಯಾಂಡ್ ನಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ನ್ಯಾಯಾಧೀಶರು ಛಾಯಾಚಿತ್ರ ತೆಗೆಸಿಕೊಂಡರು.

ಗರ್ಭಿಣಿಯರು ಹಾಗೂ ಬಾಣಂತಿಯರು ಸೇವನೆ ಮಾಡಬೇಕಿರುವ ಪೌಷ್ಠಿಕ ಆಹಾರ ತಿನಿಸುಗಳ ಜಾಗೃತಿ ಪ್ರಾತ್ಯಕ್ಷಿಕೆ ಸಹ ಏರ್ಪಾಡು ಮಾಡಲಾಗಿತ್ತು. ವಿವಿಧ ಭಾಗಗಳಿಂದ ಆಗಮಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕಾಳುಗಳು, ದವಸ ಧಾನ್ಯಗಳು, ಸೊಪ್ಪು, ತರಕಾರಿ, ಹಣ್ಣು, ಮೊಟ್ಟೆ ಸೇರಿದಂತೆ ಪೌಷ್ಠಿಕ ಪದಾರ್ಥಗಳಿಂದ ವಿವಿಧ ರಂಗೋಲಿ ಮಾದರಿಯಲ್ಲಿ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಗಣ್ಯರು ಈ ಎಲ್ಲವನ್ನೂ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಮಹಿಳೆಯರು ಮಕ್ಕಳ ಆರೋಗ್ಯ ಕಾಳಜಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ವಿಸೃತವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಮಹಿಳೆಯರೇ ಉತ್ಸಾಹದಿಂದ ಇಂದಿನ ಕಾರ್ಯಕ್ರಮವನ್ನು ವೈಶಿಷ್ಟ್ಯ ಪೂರ್ಣವಾಗಿಸಿದ್ದಾರೆ. ಇದಕ್ಕಾಗಿ ಅಭಿನಂದಿಸುವುದಾಗಿ ನುಡಿದರು.

ಜಿಲ್ಲೆಯ ಅಭಿವೃದ್ದಿಗೆ ಪೂರಕವಾದ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳು ಹಾಕಿಕೊಂಡಿವೆ. ಈ ನಿಟ್ಟಿನಲ್ಲಿ ಅಪೌಷ್ಠಿಕತೆಯಿಂದ ಮಹಿಳೆಯರು ಮಕ್ಕಳನ್ನು ಮುಕ್ತಗೊಳಿಸುವ ಸದುದ್ದೇಶದಿಂದ ಮಾತೃವಂದನಾ, ಪೋಷಣ್ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆರೋಗ್ಯವಂತ ಮಕ್ಕಳು ಸಹ ಇರಬೇಕು. ಮಹಿಳೆಯರ ಮತ್ತು ಮಕ್ಕಳ ಆರೋಗ್ಯವನ್ನು ಸಶಕ್ತಗೊಳಿಸಲು ಶಿಶು ಅಭಿವೃದ್ಧಿ ಯೋಜನೆಯಡಿ ಕಾರ್ಯಕ್ರಮ ಅನುಷ್ಠಾನವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ಮಾತನಾಡಿ, ಶಿಶುವಿಗೆ ಎದೆಹಾಲು ಅತ್ಯಂತ ಶ್ರೇಷ್ಠ ಆಹಾರವಾಗಿದೆ. ಕನಿಷ್ಠ ೧೦ ತಿಂಗಳವರೆಗಾದರೂ ಹಾಲುಣಿಸಬೇಕು. ಗರ್ಭಿಣಿಯರು, ಬಾಣಂತಿಯರು ಪೌಷ್ಠಿಕ ಆಹಾರ ಸೇವನೆ ಮಾಡುವ ಮೂಲಕ ಮಕ್ಕಳ ಆರೋಗ್ಯದ ಹೆಚ್ಚಿನ ಕಾಳಜಿವಹಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ, ಕುಟುಂಬದಲ್ಲಿ ಎಲ್ಲರ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಮಹತ್ತರ ಹೊಣೆಗಾರಿಕೆ ನಿಭಾಯಿಸುವ ಮಹಿಳೆಯರು ಒತ್ತಡದಲ್ಲಿ ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಬಾರದು. ಉತ್ತಮ ಆಹಾರ, ಜೀವನ ಶೈಲಿಯಿಂದ ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳಲು ಗಮನ ನೀಡಬೇಕು ಎಂದು ಕಿವಿಮಾತು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಎಚ್.ಆರ್. ಸುರೇಶ್, ನಿರೂಪಣಾಧಿಕಾರಿ ಮಂಜುಳಾ, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಸುಂದರೇಶ್, ಜಿಲ್ಲಾ ಮಲೇರಿಯಾ ನಿರ್ಮೂಲನಾಧಿಕಾರಿ ಡಾ. ರಾಜೇಶ್, ಆಹಾರ ಇಲಾಖೆಯ ಉಪನಿರ್ದೆಶಕರಾದ ವಸುಂಧರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಚಲುವರಾಜು, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಶಿವಸ್ವಾಮಿ, ಪೋಷಣ್ ಅಭಿಯಾನದ ಸಂಯೋಜಕರಾದ ಚೇತನ್, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಜಯಶೀಲ, ನಾಗೇಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.