ಸಿದ್ದಾಪುರ ತಾಲೂಕಿನ ಹಲಗೇರಿ ಹೋಬಳಿಯಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಜಾಸೇವೆ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಿದರು.
ಸಿದ್ದಾಪುರ: ಸರ್ಕಾರದ ಜನಪರ ಯೋಜನೆಗಳು ಕೇವಲ ಪಟ್ಟಿಯಲ್ಲಿ ಉಳಿಯದೆ ಬಡವರು ಹಾಗೂ ಸಾಮಾನ್ಯ ಜನರ ಬದುಕಿನಲ್ಲಿ ಬದಲಾವಣೆ ತರುವ ಜತೆಗೆ ಅವರ ಜೀವನಕ್ಕೆ ಬೆಳಕು ನೀಡುವಂತಾಗಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ತಾಲೂಕಿನ ಹಲಗೇರಿ ಹೋಬಳಿಯಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಜಾಸೇವೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳು ಹಾಗೂ ಸೇವೆಗಳು ಜನರ ಬದುಕಿನಲ್ಲಿ ಬೆಳಕು ಮೂಡಿಸಬೇಕು ಎಂಬ ಉದ್ದೇಶದಿಂದ ಪ್ರಜಾಸೇವೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ರಸ್ತೆ, ಚರಂಡಿ, ಕುಡಿಯುವ ನೀರು, ಶಾಲಾ-ಕಾಲೇಜು ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಪ್ರಜಾಸೇವೆ ಆಂದೋಲನ ಸಭೆಗಳು ಸಹಕಾರಿಯಾಗಿವೆ ಎಂದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಲಾಗುವುದು. ಸ್ವೀಕರಿಸಿದ ಅರ್ಜಿಗಳಿಗೆ 20 ದಿನಗಳೊಳಗೆ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು. ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಇದನ್ನು ಎದುರಿಸಲು ಸರ್ಕಾರ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ಮಂಜೂರು ಮಾಡಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದರು.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಪ್ರಜಾಸೇವೆ ಕೇವಲ ಸಮಸ್ಯೆಗಳನ್ನು ಹೇಳಿಕೊಳ್ಳುವ ವೇದಿಕೆಯಲ್ಲ, ಪಂಚಾಯಿತಿ ಹಾಗೂ ಹೋಬಳಿ ಮಟ್ಟದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳು ಮತ್ತು ಸಾರ್ವಜನಿಕರ ಸಲಹೆಗಳನ್ನೂ ಅಧಿಕಾರಿಗಳ ಗಮನಕ್ಕೆ ತರಬಹುದು. ಇಂತಹ ಸಲಹೆಗಳು ಮುಂದಿನ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ಉದ್ದೇಶದಿಂದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿರಿಯ ನಾಗರಿಕರ ಅನುಕೂಲಕ್ಕಾಗಿ ಆಸರೆ ಕಾರ್ಯಕ್ರಮ ರೂಪಿಸಲಾಗಿದೆ ಎಂದರುಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಎಚ್. ಸೂರ್ಯವಂಶಿ, ಉಪವಿಭಾಗಾಧಿಕಾರಿ ಚಂದ್ರಶೇಖರ್ ಆರ್.ಜಿ., ತಾಪಂ ಕಾರ್ಯನಿರ್ವಹಣಾಧಿಕಾರಿ ದೇವರಾಜ ಎಂ. ಹಿತ್ತಲಕೊಪ್ಪ, ತಹಸೀಲ್ದಾರ್ ಮಂಜುಳಾ ನಾಯಕ ಭಾಗವಹಿಸಿದ್ದರು.
ಕಾರ್ಮಿಕ, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ, ಪಶುಪಾಲನೆ ಇಲಾಖೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ಮತ್ತು ವಿಜಿ ಜಿ ರಾಮ್ ಯೋಜನೆಯಡಿ ಜಾಬ್‌ಕಾರ್ಡ್ ವಿತರಿಸಲಾಯಿತು.ಮೂಲಸೌಕರ್ಯಕ್ಕೆ ಬೇಡಿಕೆ: ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ವಸತಿ ಯೋಜನೆ ಮತ್ತು ರಸ್ತೆ ಮತ್ತಿತರ ಮೂಲ ಸೌಕರ್ಯಗಳ ಕುರಿತಂತೆ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗಿವೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಭೂ ಗ್ಯಾರಂಟಿ ಯೋಜನೆಯ ಮೂಲಕ 5 ಲಕ್ಷ ನಿವೇಶನ ನೀಡುವ ಕಾರ್ಯಕ್ರಮ ಜಾರಿಗೆ ತಂದಿದ್ದು, ಇದರಿಂದ ನಮ್ಮ ವಿಧಾನಸಭಾ ಕ್ಷೇತ್ರಕ್ಕೆ 7000-8000 ನಿವೇಶನ ದೊರೆಯುವ ನಿರೀಕ್ಷೆಯಿದೆ. ರಸ್ತೆ, ಸೇತುವೆ ಇತರ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಲಾಗುವುದು ಎಂದ ಹೇಳಿದರು.
ಜಾಗೃತಿ ಮೂಡಿಸಿ: ಭೂ ಗ್ಯಾರಂಟಿ ಯೋಜನೆಯಲ್ಲಿ ನಿವೇಶನ ನೀಡಲು ಜಿಲ್ಲೆಯಲ್ಲಿ ಜಾಗ ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಈ ಹೋಬಳಿಯಲ್ಲಿ 63 ಎಕರೆ ಗುರುತಿಸಲಾಗಿದೆ. ನಿವೇಶನರಹಿತರು ಅರ್ಜಿಗಳನ್ನು ಸಲ್ಲಿಸುವ ಕುರಿತಂತೆ ಅಧಿಕಾರಿಗಳು ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು.