ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ. ಪಕ್ಷ ಇಲ್ಲಿ ಇನ್ನೂ ಶಕ್ತಿಯುತವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ನಾವು ಬೆಂಬಲವಾಗಿದ್ದೇವೆ. ಜೆಡಿಎಸ್ ಪಕ್ಷ ಕಾರ್ಯಕರ್ತರ ಪಕ್ಷ. ಅದನ್ನು ಯಾರಿಂದಲೂ ಅಲುಗಾಡಿಸಲಾಗದು. ಮುಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಘೋಷಣೆ.
ಕನ್ನಡಪ್ರಭ ವಾರ್ತೆ ಮಂಡ್ಯ
ನಿಖಿಲ್ ಕುಮಾರಸ್ವಾಮಿ ಭವಿಷ್ಯದ ಯುವ ರಾಜಕಾರಣಿಯಾಗಿದ್ದು ರಾಜಕೀಯವಾಗಿ ಅವರಿಗೆ ಯಶಸ್ಸು ಸಿಗಲಿ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಹಾಗೂ ಮನ್‌ಮುಲ್ ನಿರ್ದೇಶಕ ಬಿ.ಆರ್.ರಾಮಚಂದ್ರ ತಿಳಿಸಿದರು.ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ಮಂಡ್ಯ ನಗರದಲ್ಲಿರುವ ಶ್ರೀಲಕ್ಷ್ಮಿ ಜನಾರ್ದನ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪೇಟೆ ಬೀದಿಯಲ್ಲಿ ಸಾರ್ವಜನಿಕರಿಗೆ ಮತ್ತು ವರ್ತಕರಿಗೆ ಸಿಹಿ ವಿತರಣಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ. ಪಕ್ಷ ಇಲ್ಲಿ ಇನ್ನೂ ಶಕ್ತಿಯುತವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ನಾವು ಬೆಂಬಲವಾಗಿದ್ದೇವೆ. ಜೆಡಿಎಸ್ ಪಕ್ಷ ಕಾರ್ಯಕರ್ತರ ಪಕ್ಷ. ಅದನ್ನು ಯಾರಿಂದಲೂ ಅಲುಗಾಡಿಸಲಾಗದು. ಮುಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಘೋಷಣೆ ಕೂಗಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸಿದರು.ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನಿಖಿಲ್ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ಮುಖಂಡರು ಶಕ್ತಿ ಪ್ರದರ್ಶನ ಮಾಡಿದರು. ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಯುವ ನಾಯಕರಾಗಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಅವರ ಕನಸು, ಆಕಾಂಕ್ಷೆಗಳೆಲ್ಲವೂ ಈಡೇರುವಂತೆ ಶ್ರಮಿಸುತ್ತೇವೆ. ಯುವ ನಾಯಕರಾಗಿ ನೊಂದವರಿಗೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡುವ ಅವಕಾಶ ದೊರೆಯಲಿ. ದೇವರು ಅವರಿಗೆ ರಾಜಕೀಯವಾಗಿ ಯಶಸ್ಸು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿ ಹುಟ್ಟುಹಬ್ಬದ ಶುಭ ಕೋರಿದರು.
ಪೂಜೆ ಬಳಿಕ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಬಳಿಕ ಲಕ್ಷ್ಮಿ ಜನಾರ್ಧನ ದೇವಸ್ಥಾನದಿಂದ ಹೊಳಲು ವೃತ್ತ, ಶ್ರೀ ಕಾಳಿಕಾಂಬ ದೇವಸ್ಥಾನದವರೆಗೆ ಮೆರವಣಿಗೆ ಮಾಡಿದರು.ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾಧ್ಯಕ್ಷ ಡಿ.ರಮೇಶ್, ನಗರಸಭೆ ಮಾಜಿ ಅಧ್ಯಕ್ಷ ನಾಗೇಶ್, ಮನ್‌ಮುಲ್ ನಿರ್ದೇಶಕ ರಘುನಂದನ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಪುಟ್ಟಸ್ವಾಮಿ, ಸೇರಿದಂತೆ ಹಲವರು ಭಾಗಿಯಾಗಿದ್ದರು.