ಸಾರಾಂಶ
ಕೇವಲ ಓದಿನಲ್ಲಿ ಮುಂದೆ ಬರುವುದಷ್ಟೇ ಸಾಧನೆಯಲ್ಲ, ಕ್ರೀಡೆಗಳಲ್ಲಿ ಪಾಲ್ಗೊಂಡು ಉತ್ತಮ ಆಟವಾಡುವ ಮೂಲಕ ಅತ್ಯುತ್ತಮ ಸಾಧನೆ ಮಾಡಬಹುದು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು.
ಕುಷ್ಟಗಿ:
ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಮಿಂಚಬೇಕು ಎಂದು ತುಂಗಭದ್ರಾ ಕಾಡಾ ನಿಗಮ ಅಧ್ಯಕ್ಷ ಹಸನಸಾಬ್ ದೋಟಿಹಾಳ ಹೇಳಿದರು.ತಾಲೂಕಿನ ದೋಟಿಹಾಳದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ದೋಟಿಹಾಳ ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕೇವಲ ಓದಿನಲ್ಲಿ ಮುಂದೆ ಬರುವುದಷ್ಟೇ ಸಾಧನೆಯಲ್ಲ, ಕ್ರೀಡೆಗಳಲ್ಲಿ ಪಾಲ್ಗೊಂಡು ಉತ್ತಮ ಆಟವಾಡುವ ಮೂಲಕ ಅತ್ಯುತ್ತಮ ಸಾಧನೆ ಮಾಡಬಹುದು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದ ಅವರು, ಮಕ್ಕಳ ಆಸಕ್ತಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.ಎಪಿಎಂಸಿ ಮಾಜಿ ನಿರ್ದೇಶಕ ಹನುಮಂತರಾವ ದೇಸಾಯಿ ಮಾತನಾಡಿ, ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಾಯಕವಾಗಿವೆ. ಶೈಕ್ಷಣಿಕ ಮತ್ತು ಸಾಮಾಜಿಕ ಜೀವನದ ಅವಿಭಾಜ್ಯ ಅಂಗವಾದ ಕ್ರೀಡೆಗೆ ಮಹತ್ವ ಕೊಟ್ಟು ಹೆಚ್ಚು ಮಕ್ಕಳು ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದರು.ಗ್ರಾಪಂ ಅಧ್ಯಕ್ಷ ಮಹೇಶ ಕಾಳಗಿ ಮಾತನಾಡಿ, ವಲಯ ಮಟ್ಟದಲ್ಲಿ ಆಟ ಆಡುವ ಮಕ್ಕಳು ಉತ್ತಮ ಆಟ ಪ್ರದರ್ಶಿಸುವ ಮೂಲಕ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕೀರ್ತಿ ತರಬೇಕೆಂದು ಕರೆ ನೀಡಿದರು.
ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷ ಬಂದೆನವಾಜ ಬಿಜಕತ್ತಿ, ಶುಖಮುನಿ ಈಳಗೇರ, ಶ್ರೀನಿವಾಸ ಕಂಟ್ಲಿ, ಗುರಪ್ಪ ಕುರಿ, ಪರಸಪ್ಪ ಸರೂರು, ಬಾಳಪ್ಪ ಅರಳಿಕಟ್ಟಿ, ಶೇಖಪ್ಪ ದೊಡ್ಡಮನಿ, ಮಲ್ಲಿಕಾರ್ಜುನ ಕಿರಗಿ, ಹನೀಫ್ ಬಿಳೇಕುದರಿ, ಜಗದೀಶ ಸೂಡಿ, ವಸಂತ ಮಾಳಗಿ, ರಾಮನಗೌಡ ಬಿಜ್ಜಲ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.