ಸಾರಾಂಶ
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗಿರಲಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಡಿ. ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ ಆಚರಿಸುವ ಸಂಬಂಧ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೇ ಆಗಸ್ಟ್ 20ನೇ ತಾರೀಖಿನಂದು ಬೆಳಗ್ಗೆ 11ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ. ಕಲ್ಯಾಣ ಮಂಟಪದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜು ಅರಸು ಅವರ 110ನೇ ಜನ್ಮದಿನವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಧಿಕಾರಿಗಳು ಶಿಷ್ಟಾಚಾರದನ್ವಯ ಗಣ್ಯಮಾನ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಸೂಕ್ತ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ ಮಾತನಾಡಿ, ವೇದಿಕೆ ಕಾರ್ಯಕ್ರಮದಲ್ಲಿ ದೇವರಾಜ ಅರಸು ಅವರ ಜೀವನ ಮತ್ತು ಸಾಧನೆಗಳ ಕುರಿತು ಲೇಖಕ ಹೆಚ್.ಆನಂದ್ ಕುಮಾರ್ ಉಪನ್ಯಾಸ ನೀಡುವರು. ಹಿಂದುಳಿದ ವರ್ಗಗಳ ಇಲಾಖೆ ವಿದ್ಯಾರ್ಥಿನಿಲಯಗಳಲ್ಲಿದ್ದುಕೊಂಡು ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಲೆಮಾರಿ, ಅರೆಅಲೆಮಾರಿ ಒಕ್ಕೂಟ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಿಕಾಂತ್ ಯಾದವ್, ಗೌರವಾಧ್ಯಕ್ಷ ರಾಮು ಗೋಸಾಯಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ.ಎನ್.ಗಿರಿರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.