ಸಾರಾಂಶ
ರಾಜಿಯಾಗಬಲ್ಲ ಸಿವಿಲ್ ಹಾಗೂ ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನೂ ಇತ್ಯರ್ಥ ಪಡಿಸಲಾಗುವುದು. ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಸೂಕ್ತ ಕಾನೂನು ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು. ಸದ್ಯ ಜಿಲ್ಲೆಯಲ್ಲಿ 2025 ರ ಫೆಬ್ರವರಿ ವರೆಗೆ ಒಟ್ಟು 43,385 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿವಿಧ ಹಂತದ ಪ್ರಕರಣಗಳು ಬಾಕಿ ಇದ್ದು, ರಾಜಿಯಾಗಬಲ್ಲ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಕ್ಷಿದಾರರ ಸಮ್ಮುಖದಲ್ಲಿ ಮಾ. 8 ರಂದು ಮೊದಲ ಲೋಕ ಅದಾಲತ್ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಈ ಅದಾಲತ್ ನ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ ಮನವಿ ಮಾಡಿದರು. ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನಿರಂತರವಾಗಿ ರಾಜಿ ಪಂಚಾಯಿತಿ ಮೂಲಕ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು.ರಾಜಿ ಮೂಲಕ ಇತ್ಯರ್ಥ
ಈ ಬಾರಿ ಅದಾಲತ್ ನಲ್ಲಿ ಜಿಲ್ಲಾ ನ್ಯಾಯಾಲಯವೂ ಸೇರಿದಂತೆ ತಾಲ್ಲೂಕು ಹಂತದ ನ್ಯಾಯಾಲಯಗಳಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಪ್ರಕರಣಗಳು, ವಿಚ್ಛೇಧನವನ್ನು ಹೊರತುಪಡಿಸಿ ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು ಕಕ್ಷಿದಾರರು ಹಾಗೂ ವಕೀಲರ ಸಹಕಾರದೊಂದಿಗೆ ಇತ್ಯರ್ಥಪಡಿಸಲಾಗುವುದು ಎಂದರು.ಅಲ್ಲದೇ, ಚೆಕ್ ಅಮಾನ್ಯ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕರ ವಿವಾದಗಳು, ಭೂಸ್ವಾಧೀನ ಪ್ರಕರಣಗಳು ಹಾಗೂ ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಸಿವಿಲ್ ಪಿಂಚಣಿ ಪ್ರಕರಣಗಳನ್ನು ರಾಜಿ ಮೂಲಕ ಇಬ್ಬರೂ ಕಕ್ಷಿದಾರರ ಮನವೊಲಿಸಿ ಇತ್ಯರ್ಥ ಪಡಿಸಲಾಗುವುದು ಎಂದರು.ಕಾನೂನು ಮಾರ್ಗದರ್ಶನ
ಜೊತೆಗೆ ರಾಜಿಯಾಗಬಲ್ಲ ಸಿವಿಲ್ ಹಾಗೂ ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನೂ ಇತ್ಯರ್ಥ ಪಡಿಸಲಾಗುವುದು. ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಸೂಕ್ತ ಕಾನೂನು ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು ಎಂದರು. ಸದ್ಯ ಜಿಲ್ಲೆಯಲ್ಲಿ 2025 ರ ಫೆಭ್ರವರಿ ವರೆಗೆ ಒಟ್ಟು 43,385 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಈ ಪೈಕಿ ರಾಜಿಯಾಬಲ್ಲ 4020 ಪ್ರಕರಣಗಳನ್ನು ಈ ಮೊದಲ ಅದಾಲತ್ ನಲ್ಲಿ ಇತ್ಯರ್ಥ ಪಡಿಸಲು ಕ್ರಮ ವಹಿಸಲಾಗುವುದು. ಮಾರ್ಚ್ 08 ರವರೆಗೂ ಪ್ರಕರಣಗಳ ಸಂಖ್ಯೆ ಮತ್ತಷ್ಟು ಲಭ್ಯವಾಗುವ ಸಾಧ್ಯತೆ ಇದ್ದು, ಕಳೆದ ಬಾರಿಗಿಂತ ಹೆಚ್ಚಿನ ಪ್ರಕರಣಗಳನ್ನು ಅದಾಲತ್ ನಲ್ಲಿ ವಿಲೇವಾರಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು.ನ್ಯಾಯಾಲಯಕ್ಕೆ ಅಲೆದಾಟ ಬೇಡ
ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಪದೇ ಪದೇ ನ್ಯಾಯಾಲಯಕ್ಕೆ ಅಲೆಯುವುದು ತಪ್ಪುತ್ತದೆ. ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗಿ ಇಬ್ಬರಿಗೂ ನ್ಯಾಯ ದೊರೆತಂತಾಗಿ ನೆಮ್ಮದಿಯೂ ದೊರೆಯುತ್ತದೆ. ಅಲ್ಲದೇ ನ್ಯಾಯಾಲಯದ ಅಮೂಲ್ಯ ಸಮಯವೂ ಉಳಿತಾಯವಾಗಿ ಆ ಸಮಯವನ್ನು ಬಾಕಿ ಇರುವ ಇತರೆ ಪ್ರಕರಣಗಳ ವಿಚಾರಣೆ ಮತ್ತು ಇತ್ಯರ್ಥಕ್ಕೆ ನೀಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.ಕಾನೂನು ಮಾಹಿತಿ ಪಡೆಯಿರಿ
ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳುವುದರಿಂದ ಕಕ್ಷಿದಾರರ ನಡುವಿನ ವೈಮನ್ಯಸ್ಸು,ಭಿನ್ನಾಭಿಪ್ರಾಯ, ದ್ವೇಷ ಕಡಿಮೆಯಾಗಿ ಇಬ್ಬರ ನಡುವೆ ಸಾಮರಸ್ಯ, ಸೌಹಾರ್ದತೆಯ ವಾತಾವರಣ ನಿರ್ಮಾಣವಾಗುತ್ತದೆ. ಮಾರ್ಚ್ 8ರ ಅದಾಲತ್ ನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಸಾರ್ವಜನಿಕರು ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕುಗಳ ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದರು.ಈ ವೇಳೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ ಇದ್ದರು.