ಕೊಪ್ಪಳ: ಜಿಲ್ಲೆಯ ಐತಿಹಾಸಿಕ ಪುಣ್ಯ ಕ್ಷೇತ್ರವಾದ ಕನಕಗಿರಿಯಲ್ಲಿ ಮೇ 16ರಿಂದ ಎರಡು ದಿನಗಳ ಕಾಲ ನಿಗದಿಯಾದ ಕನಕಗಿರಿ ಉತ್ಸವ-2026 ವಿವಿಧ ಸಮಿತಿಗಳಲ್ಲಿನ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ನಿರ್ದೇಶನ ನೀಡಿದರು.
ಕನಕಗಿರಿ ಉತ್ಸವ-2026ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮತ್ತೊಂದು ಸುತ್ತಿನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉತ್ಸವಕ್ಕೆ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿಯಿದೆ. ಎಲ್ಲ ಸಮಿತಿಗಳು ತಮ್ಮ ಕಾರ್ಯ ಕಾಲಮಿತಿಯೊಳಗೆ ಪೂರ್ಣಗೊಳಿಸಲು ವಿಶೇಷ ಒತ್ತು ಕೊಡಬೇಕು. ಮೇಲಿಂದ ಮೇಲೆ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.ಉತ್ಸವ ಸಂದರ್ಭದಲ್ಲಿ ಕನಕಗಿರಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ಮೆರವಣಿಗೆ ಮಾರ್ಗ ಸೇರಿದಂತೆ ಎಲ್ಲ ಕಡೆಗೆ ವಿದ್ಯುದೀಪಾಲಂಕಾರಕ್ಕೆ ವ್ಯವಸ್ಥೆಯಾಗಬೇಕು. ಉತ್ಸವದ ಅಂಗವಾಗಿ ನಡೆಯುವ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಜಾನಪದ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆ ಬೇಗನೆ ಪೂರ್ಣವಾಗಬೇಕು. ಉತ್ಸವದಲ್ಲಿ ಕಾರ್ಯಕ್ರಮ ನೀಡುವ ಕಲಾವಿದರ ಆಯ್ಕೆ ಪ್ರಕ್ರಿಯೆ ಕೂಡ ಪಾರದರ್ಶಕವಾಗಿ ನಡೆಯಬೇಕು ಎಂದು ಮೆರವಣಿಗೆ ಮತ್ತು ಸಾಂಸ್ಕೃತಿಕ ಸಮಿತಿಗೆ ಸೂಚನೆ ನೀಡಿದರು.
ಉತ್ಸವದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಮಾಡಬೇಕು. ಮೇ 16 ಮತ್ತು 17ರಂದು ಎರಡು ದಿನಗಳ ಕಾಲ ನಡೆಯುವ ಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೇರೆ ಬೇರೆ ಸಮಿತಿಗಳು ಮತ್ತು ಪ್ರಚಾರ ಹಾಗೂ ಮಾಧ್ಯಮ ಸಮಿತಿ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, ಗಣ್ಯರು, ಕಲಾವಿದರು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸೂಕ್ತ ಭದ್ರತಾ ವ್ಯವಸ್ಥೆಗೆ ಈಗಿನಿಂದಲೇ ಕ್ರಮ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಕನಕಗಿರಿ ತಾಲೂಕಿನಲ್ಲಿನ ಐತಿಹಾಸಿಕ ಸ್ಥಳಗಳೆಲ್ಲವೂ ಅಲಂಕಾರವಾಗಬೇಕು. ಎಲ್ಲ ಪ್ರಮುಖ ರಸ್ತೆಗಳು ಸುಗಮ ಸಂಚಾರಕ್ಕೆ ಸಿದ್ಧವಾಗಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣೇಗೌಡ ಪಾಟೀಲ್, ಕನಕಗಿರಿ ತಾಲೂಕು ಕಸಾಪ ಅಧ್ಯಕ್ಷ ಮಹೇಬೂಬ್, ಮುಖ್ಯ ಲೆಕ್ಕಾಧಿಕಾರಿ ಅಮೀನ ಅತ್ತಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಂಜುನಾಥ ಗುಂಡೂರು, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಉಪಸ್ಥಿತರಿದ್ದರು.