ಕನ್ನಡಪ್ರಭ ವಾರ್ತೆ ಬೆಳಗಾವಿ

ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಸಕಾಲದಲ್ಲಿ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಕಾಳಜಿಪೂರ್ವಕವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಕ್ಕಳ ನ್ಯಾಯ (ಮಕ್ಕಳ ರಕ್ಷಣೆ ಮತ್ತು ಪೋಷಣೆ ಕಾಯ್ದೆ), ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ಕಾಯ್ದೆ, ಹಾಗೂ ಮಕ್ಕಳ ರಕ್ಷಣಾ ನೀತಿ ಕುರಿತು ಪೊಲೀಸ್ ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಮಕ್ಕಳು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ, ಹಲ್ಲೆ, ಕಿರುಕುಳ, ತಾರತಮ್ಯ ಸೇರಿದಂತೆ ಯಾವುದೇ ದೂರುಗಳು ಬಂದಲ್ಲಿ ತಕ್ಷಣ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಬಾಕಿ ಇರುವ ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸುವಂತೆ ಸೂಚನೆ ನೀಡಿದರು.ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಮಾಹಿತಿ ತಿಳಿದಿರುವ ಯಾರೇ ವ್ಯಕ್ತಿ, ಪೋಷಕರು ಅಥವಾ ಶಾಲಾ ಸಿಬ್ಬಂದಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಕಡ್ಡಾಯ. ಪೋಕ್ಸೋ ಪ್ರಕರಣ ದಾಖಲಿಸುವಲ್ಲಿ ವಿಳಂಬ ತೋರಿದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದೆ ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಪೋಕ್ಸೋ ಪ್ರಕರಣಗಳು 120 ದಿನಗಳೊಳಗೆ ಪತ್ತೆಯಾಗದಿದ್ದರೆ ಅವುಗಳನ್ನು ಕಡ್ಡಾಯವಾಗಿ AH2ಗೆ ವರ್ಗಾಯಿಸಬೇಕು. ಜಿಲ್ಲೆಯ ಐದು ಪ್ರಕರಣಗಳಲ್ಲಿ ವಿಳಂಬ ಕಂಡುಬಂದ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ನಿರ್ದೇಶಿಸಿದರು.ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಪ್ರತಿಯೊಂದು ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳ ಸುರಕ್ಷತಾ ಸಮಿತಿ ರಚಿಸಿ ಕಡ್ಡಾಯವಾಗಿ ದೂರು ಪೆಟ್ಟಿಗೆ ಅಳವಡಿಸಬೇಕು. ಅವುಗಳನ್ನು ನಿಯಮಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ದೌರ್ಜನ್ಯಕ್ಕೊಳಗಾದ ಮಕ್ಕಳ ವೈಯಕ್ತಿಕ ಮಾಹಿತಿ ಗೌಪ್ಯವಾಗಿರಬೇಕು. ಮಕ್ಕಳ ರಕ್ಷಣಾ ನೀತಿ-2016 ಅನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಹಲವೆಡೆ ಮಕ್ಕಳು ಕಾಣೆಯಾದ ಪ್ರಕರಣಗಳು ದಾಖಲಾಗಿದ್ದು, ಪತ್ತೆಯಾಗದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಕಾಣೆಯಾದ ಮಕ್ಕಳ ಪಟ್ಟಿ ಸಿದ್ಧಪಡಿಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ತಿಳಿಸಿದರು. ಶಾಲಾ ವಾಹನಗಳಿಂದ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೋಟಾರ್ ಕಾಯ್ದೆ-1988ರ ಅನ್ವಯ ಶಾಲಾ ವಾಹನಗಳು ಮತ್ತು ಚಾಲಕರನ್ನು ಸಕಾಲಕ್ಕೆ ಪರಿಶೀಲಿಸಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ತಾಯಿ ಮರಣ, ಶಿಶು ಮರಣ ಹಾಗೂ ಅಪೌಷ್ಠಿಕತೆ ನಿರ್ಮೂಲನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಸೇರಿ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.