ಕನ್ನಡಪ್ರಭ ವಾರ್ತೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಯಾವುದೇ ಅಡೆತಡೆಗಳಿಲ್ಲದೆ ಸುಸೂತ್ರವಾಗಿ ಹಾಗೂ ಯಶಸ್ವಿಯಾಗಿ ನಡೆಯಬೇಕು. ಈ ಮೂಲಕ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಮಹತ್ವದ ನಿರ್ಧಾರಗಳು ಕೈಗೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆಶಯ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಯಾವುದೇ ಅಡೆತಡೆಗಳಿಲ್ಲದೆ ಸುಸೂತ್ರವಾಗಿ ಹಾಗೂ ಯಶಸ್ವಿಯಾಗಿ ನಡೆಯಬೇಕು. ಈ ಮೂಲಕ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಮಹತ್ವದ ನಿರ್ಧಾರಗಳು ಕೈಗೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆಶಯ ವ್ಯಕ್ತಪಡಿಸಿದರು.ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠಕ್ಕೆ ಭಾನುವಾರ ಭೇಟಿ ನೀಡಿ, ಮಠದ ಪೀಠಾಧಿಪತಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಅವರು ಮಾತನಾಡಿದರು. ಚಳಿಗಾಲದ ಅಧಿವೇಶನ ರಾಜ್ಯದ ಆಡಳಿತಾತ್ಮಕ ಹಾಗೂ ರಾಜಕೀಯ ದೃಷ್ಟಿಯಿಂದ ಮಹತ್ವದ್ದಾಗಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜನರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬೇಡಿಕೆಗಳ ಕುರಿತು ಸದನದಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ. ಅಧಿವೇಶನ ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನಡೆಯಲು ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಆಶೀರ್ವಾದ ಪಡೆಯಲು ಆಗಮಿಸಿದ್ದೇನೆ ಎಂದರು.
ಅಧಿವೇಶನದ ಮೂಲಕ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಬೇಕು. ಈ ಭಾಗದ ಜನರ ನಿರೀಕ್ಷೆಗಳಿಗೆ ಸ್ಪಂದಿಸುವಂತಹ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ ಮಹತ್ವದ ವೇದಿಕೆಯಾಗಲಿ ಎಂಬುದು ನಮ್ಮ ಆಶಯವಾಗಿದೆ ಎಂದರು.ಬಳಿಕ ಮಠದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿದರು. ಮಠದ ನಿರ್ಮಾಣ ಕಾರ್ಯಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಧಾರ್ಮಿಕ ಕೇಂದ್ರಗಳು ಪೂಜೆ-ಪುನಸ್ಕಾರಗಳಿಗೆ ಮಾತ್ರ ಸೀಮಿತವಾಗದೆ ಸಮಾಜದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸುವ ಮತ್ತು ಸಾಮಾಜಿಕ ಸಾಮರಸ್ಯ ಬೆಳೆಸುವ ಕೇಂದ್ರಗಳಾಗಬೇಕು. ಹುಕ್ಕೇರಿ ಹಿರೇಮಠದ ಕಾರ್ಯಚಟುವಟಿಕೆಗಳು ಇದಕ್ಕೆ ಸಾಕ್ಷಿಯಾಗಿವೆ ಎಂದರು.
ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕ್ರಿಯಾಶೀಲ, ಸರಳ ಸ್ವಭಾವದ ಹಾಗೂ ಜನಪರ ಕಾಳಜಿಯುಳ್ಳ ಅಧಿಕಾರಿಯಾಗಿದ್ದಾರೆ. ತಮ್ಮ ಬಳಿ ಬರುವ ಪ್ರತಿಯೊಬ್ಬರೊಂದಿಗೂ ಆತ್ಮೀಯವಾಗಿ ಮಾತನಾಡಿ, ಅವರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸುವ ಗುಣ ಹೊಂದಿದ್ದಾರೆ. ಅಧಿಕಾರದ ಸ್ಥಾನದಲ್ಲಿದ್ದರೂ ಜನಸಾಮಾನ್ಯರೊಂದಿಗೆ ಬೆರೆಯುವ ಅವರ ಮನೋಭಾವ ಶ್ಲಾಘನೀಯ ಎಂದರು.ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸಾಧ್ಯವಾದಷ್ಟು ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿರುವುದು ಅವರ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ. ಇಂತಹ ಅಧಿಕಾರಿಗಳು ಸಮಾಜಕ್ಕೆ ಅಗತ್ಯವಾಗಿದ್ದು, ಮೊಹಮ್ಮದ್ ರೋಷನ್ ಅವರಂತಹ ಕ್ರಿಯಾಶೀಲ ಅಧಿಕಾರಿ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸುವ ಪ್ರಮುಖ ಉದ್ದೇಶ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿದೆ. ಹೀಗಾಗಿ ನೀರಾವರಿ, ಕೃಷಿ, ಶಿಕ್ಷಣ, ಆರೋಗ್ಯ, ಉದ್ಯೋಗ, ಕೈಗಾರಿಕೆ, ರಸ್ತೆ ಹಾಗೂ ಕುಡಿಯುವ ನೀರು ಸೇರಿದಂತೆ ಈ ಭಾಗದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳು ಸದನದಲ್ಲಿ ಪ್ರಾಮಾಣಿಕವಾಗಿ ಚರ್ಚೆಯಾಗಬೇಕು. ಹಲವು ವರ್ಷಗಳಿಂದ ಬಾಕಿ ಉಳಿದಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.ಜಿಲ್ಲಾಧಿಕಾರಿಗಳ ಆಡಳಿತಾತ್ಮಕ ಜವಾಬ್ದಾರಿಗಳು ಯಶಸ್ವಿಯಾಗಿ ನೆರವೇರಲಿ. ಚಳಿಗಾಲದ ಅಧಿವೇಶನವನ್ನು ಯಶಸ್ವಿಯಾಗಿ ಸಂಘಟಿಸುವಲ್ಲಿ ಜಿಲ್ಲಾಡಳಿತಕ್ಕೆ ಶಕ್ತಿ ದೊರೆಯಲಿ ಹಾಗೂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಸಾಗಲಿ ಎಂದು ಶ್ರೀಗಳು ಹಾರೈಸಿದರು.
ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ವೇದಿಕೆಯ ರಾಷ್ಟ್ರೀಯ ಉಪಾಧ್ಯಕ್ಷ ಮಹಾಂತೇಶ ಹಿರೇಮಠ, ಜಂಗಮ ಸಮಾಜದ ಅಧ್ಯಕ್ಷ ವಿರುಪಾಕ್ಷಯ್ಯ ನಿರಲಗಿಮಠ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.