ಮುಂಗಾರು ಮಳೆ ಆರಂಭವಾದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗುಣಮಟ್ಟದ ಬಿತ್ತನೆಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಆಗದಂತೆ ಸಕಾಲದಲ್ಲಿ ಪೂರೈಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- ಮುಂಗಾರು ಹಿನ್ನೆಲೆ ರೈತರಿಗೆ ಸಕಾಲದಲ್ಲಿ ಸ್ಪಂದನೆ ಮುಖ್ಯ: ಸಂಸದೆ ಡಾ.ಪ್ರಭಾ - - -

ಕನ್ನಡಪ್ರಭ ವಾರ್ತೆ ದಾವಣಗೆರೆ ಮುಂಗಾರು ಮಳೆ ಆರಂಭವಾದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗುಣಮಟ್ಟದ ಬಿತ್ತನೆಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಆಗದಂತೆ ಸಕಾಲದಲ್ಲಿ ಪೂರೈಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಜಿಯಾವುಲ್ಲಾ ಅವರೊಂದಿಗೆ ಸಭೆ ನಡೆಸಿದ ಅವರು, ಮುಂಗಾರು ಆರಂಭ‍ವಾದ ಹಿನ್ನೆಲೆ ರೈತರು ಕೃಷಿ ಚಟುವಟಿಕೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ತಮ್ಮ ಕ್ಷೇತ್ರದಲ್ಲಿ ಯಾವುದೇ ರೀತಿ ಬಿತ್ತನೆಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂದರು.

ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಸವಾಲುಗಳ ಬಗ್ಗೆ ಕೃಷಿ ಇಲಾಖೆ ಅರಿತು, ಅವುಗಳಿಗೆ ಪರಿಹಾರ ಕಲ್ಪಿಸಬೇಕು. ಮುಂಗಾರು ಹಂಗಾಮು ಆರಂಭ ಆಗಿರುವುದರಿಂದ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದು, ಬಿತ್ತನೆಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ, ದಾಸ್ತಾನು ಸ್ಥಿತಿ ಮತ್ತು ವಿತರಣಾ ವ್ಯವಸ್ಥೆಯ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.

ಬೀಜ-ರಸಗೊಬ್ಬರಗಳ ಪೂರೈಕೆ ಸಂಬಂಧ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಸರ್ಕಾರದ ವಿವಿಧ ಕೃಷಿ ಯೋಜನೆಗಳ ಸೌಲಭ್ಯಗಳು ರೈತರಿಗೆ ಸಮರ್ಪಕವಾಗಿ ಹಾಗೂ ಸಕಾಲದಲ್ಲಿ ತಲುಪುವಂತೆ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಂಸದೆ ನಿರ್ದೇಶನ ನೀಡಿದರು.

ಕೃಷಿ ಉತ್ಪಾದಕತೆ ಹೆಚ್ಚಿಸುವುದು, ಕೃಷಿ ವೆಚ್ಚ ಕಡಿಮೆ ಮಾಡುವುದು ಹಾಗೂ ರೈತರ ಆದಾಯ ವೃದ್ಧಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಮತ್ತು ಸುಧಾರಿತ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಕುರಿತಂತೆ ವಿಸ್ತೃತವಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕೃಷಿ ಅಧಿಕಾರಿ ಜೊತೆಗೆ ಚರ್ಚಿಸಿ, ರೈತರ ಹಿತಾಸಕ್ತಿಗೆ ಆದ್ಯತೆ ನೀಡುವ ಮೂಲಕ ಕೃಷಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

- - -

-30ಕೆಡಿವಿಜಿ1, 2: ದಾವಣಗೆರೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರೊಂದಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಭೆ ನಡೆಸಿದರು.