ಅರ್ಥಪೂರ್ಣ ಅಂಬೇಡ್ಕರ್ ಜಯಂತಿ

| Published : Apr 03 2025, 12:32 AM IST

ಸಾರಾಂಶ

ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಡಿಸಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ತಪ್ಪದೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಜಯಂತಿ ಅಂಗವಾಗಿ ಕನಕ ವೃತ್ತದಿಂದ ತರಾಸು ರಂಗಮಂದಿರದವರೆಗೆ ಸ್ತಬ್ಧಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆ ಆಯೋಜಿಸಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಾರ್ಮಿಕ, ಕೃಷಿ, ತೋಟಗಾರಿಕೆ, ಶಿಕ್ಷಣ, ಅರಣ್ಯ, ಆರೋಗ್ಯ ಇಲಾಖೆ ಸೇರಿದಂತೆ 10 ಹೆಚ್ಚು ಇಲಾಖೆಗಳು ಸರ್ಕಾರದ ಯೋಜನೆಗಳ ಮಹತ್ವ ಸಾರುವ ಆಕರ್ಷಕ ಸ್ತಬ್ದಚಿತ್ರಗಳನ್ನು ರಚಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎಲ್ಲಾ ತಾಲೂಕುಗಳಿಂದಲೂ ವೈವಿದ್ಯಮಯವಾದ ಕಲಾತಂಡಗಳನ್ನು ಕರೆತಂದು ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಅಂಬೇಡ್ಕರ್ ಜಯಂತಿಯಂದು ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಿಗೆ ನಗರ ಸಭೆಯಿಂದ ಅಲಂಕಾರ ಮಾಡಬೇಕು. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಟ್ರಾಕ್ಟರ್ ಸಿದ್ಧಪಡಿಸಬೇಕು. ತರಾಸು ರಂಗಮಂದಿರದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿಯೂ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು.

ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಪ್ರತಿ ತಾಲೂಕಿನಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಅಭ್ಯುದ್ಯಯಕ್ಕೆ ಶ್ರಮಿಸಿದ 2 ಸಂಘ ಸಂಸ್ಥೆಗಳನ್ನು ಗುರುತಿಸಿ ಸನ್ಮಾಸಿಸಲು ಕ್ರಮ ಕೈಗೊಳ್ಳಬೇಕು. ಇದರೊಂದಿಗೆ ಎಸ್ ಎಸ್ಎಲ್ ಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೂ ಸನ್ಮಾನಿಸಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳಿಗೆ ವಿತರಿಸಿ ಜಯಂತಿಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಬೇಕು ಎಂದರು.

ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.