ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ: ಡಿಸಿ

| Published : Oct 08 2024, 01:05 AM IST

ಸಾರಾಂಶ

ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ನಿತೀಶ್‌ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ವಹಿಸಿದ್ದು, ಸಮಾಜದ ಬಾಂಧವರು ಸೇರಿದಂತೆ ನಾನಾ ಸಂಘ-ಸಂಸ್ಥೆಗಳ ಮುಖಂಡರು ಪಾಲ್ಗೊಂಡು ಜಯಂತಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದ ಅವರು, ಇದೇ 17ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸುತ್ತಿದ್ದು, ಅಂದು ಬೆಳಗ್ಗೆ 8 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹತ್ತಿರವಿರುವ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ವಾಲ್ಮೀಕಿ ಭವನದವರೆಗೂ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮೆರವಣಿಗೆಯಲ್ಲಿ ಸಮಾಜದ ಮಹಿಳೆಯರಿಂದ ಕಳಸ ಕುಂಬಗಳ ಹೊತ್ತು ಸಾಗಲಿದ್ದಾರೆ. ಮೆರವಣಿಗೆಯಲ್ಲಿ ಡೊಳ್ಳು, ವೀರಗಾಸೆ, ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಲಿವೆ, ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸಮುದಾಯದಲ್ಲಿ ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಗುವುದು. ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳಿಗೆ, ಮುಖಂಡರಿಗೆ ಜಯಂತಿಗೆ ಆಹ್ವಾನಿಸಲಾಗುವುದು, ಶಾಲಾ ಕಾಲೇಜುಗಳಲ್ಲಿ, ವಿವಿಧ ತಾಲೂಕುಗಳಲ್ಲಿ ಹಾಗೂ ಎಲ್ಲಾ ಇಲಾಖೆಗಳಲ್ಲಿ ಜಯಂತಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಪಾಂಡ್ವೆ ರಾಹುಲ್‌ ತುಕಾರಾಮ, ಎಸಿ ಗಜಾನನ ಬಾಳೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಶೈಲಾ ಕಾಚಪುರ, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ, ಸಮಾಜದ ಮುಖಂಡರು ಇದ್ದರು.