ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ, ಪ್ರತಿಭಾ ಪುರಸ್ಕಾರ, ಸನ್ಮಾನಕ್ಕೆ ನಿರ್ಧಾರ

| Published : Aug 01 2025, 12:00 AM IST

ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ, ಪ್ರತಿಭಾ ಪುರಸ್ಕಾರ, ಸನ್ಮಾನಕ್ಕೆ ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

ಆ.15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ವತಿಯಿಂದ ಅರ್ಥಪೂರ್ಣವಾಗಿ ನಡೆಸುವ ಸಲುವಾಗಿ ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಎನ್.ಜೆ.ನಾಗರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

- ತಹಸೀಲ್ದಾರ್ ಎನ್.ಜೆ.ನಾಗರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ಆ.15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ವತಿಯಿಂದ ಅರ್ಥಪೂರ್ಣವಾಗಿ ನಡೆಸುವ ಸಲುವಾಗಿ ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಎನ್.ಜೆ.ನಾಗರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ತಹಸೀಲ್ದಾರ್ ನೆರವೇರಿಸುವರು. ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಬಸವರಾಜು ವಿ.ಶಿವಗಂಗಾ ವಹಿಸಲಿದ್ದಾರೆ. ಶಿಷ್ಟಾಚಾರ ಪ್ರಕಾರ ಅತಿಥಿ ಗಣ್ಯರನ್ನು ವೇದಿಕೆಗೆ ಆಹ್ವಾನಿಸಲಾಗುವುದು ಎಂಬ ವಿಚಾರವನ್ನು ತಹಸೀಲ್ದಾರ್ ನಾಗರಾಜ್ ಸಭೆ ಗಮನಕ್ಕೆ ತಂದರು. ಆಗ ಸಭೆ ಒಪ್ಪಿಗೆ ಸೂಚಿಸಿತು.

ಕನ್ನಡ ಅಭಿಮಾನಿ ಬಳಗ ವತಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 120ರಿಂದ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಳಗ ವತಿಯಿಂದ ಸನ್ಮಾನಿಸಲು ಅವಕಾಶ ನೀಡಬೇಕೆಂಬ ವಿಚಾರದಲ್ಲಿ ಚರ್ಚೆ ನಡೆದು, ಇದಕ್ಕೆ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು.

ವರ್ಲ್ಡ್‌ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಬರೆದ ಕಲಾವಿದ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗಾ ಅವರಿಂದ ಗಾಯನ ಮಾಡಿಸಬೇಕೆಂಬ ಸಲಹೆಗೆ ಸಭೆಯಲ್ಲಿದ್ದ ಎಲ್ಲರೂ ಒಪ್ಪಿಗೆ ಸೂಚಿಸಿದರು.

ಪ್ರತಿ ವರ್ಷದ ಪದ್ಧತಿಯಂತೆ ಸ್ವಾತಂತ್ರ್ಯ ಹೋರಾಟಗಾರರು, ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿ, ಎಲೆಮರೆ ಕಾಯಿಯಂತೆ ಇರುವವರನ್ನು ಗುರುತಿಸುವ ವಿಚಾರ ತಹಸೀಲ್ದಾರರು ಸಭೆ ಗಮನಕ್ಕೆ ತಂದರು. ರಾಜ್ಯಮಟ್ಟದ ಪ್ರಶಸ್ತಿ ಪಡೆದ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಲು ಸದಸ್ಯರು ಸಲಹೆ ನೀಡಿದರು. ಆಗ ಪಂಚ ಗ್ಯಾರೆಂಟಿಗಳ ಸಮಿತಿ ತಾಲೂಕು ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಈ ಸಲಹೆಯನ್ನು ಸ್ವಾಗತಿಸಿದರು. ಆಗ ಸಭೆಯಲ್ಲಿದ್ದ ಸಿಡಿಪಿಒ ನಿರ್ಮಲಾ ಅವರಿಗೆ 2008-9ರಿಂದ ಎಷ್ಟು ಜನ ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ ಎಂಬ ಮಾಹಿತಿ ನೀಡುವಂತೆ ತಹಸೀಲ್ದಾರರು ಸೂಚಿಸಿದರು.

ಪೂರ್ವಭಾವಿ ಸಭೆಗೆ ಬಾರದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ತಹಸೀಲ್ದಾರರು ತಿಳಿಸಿದರು.

ಸಭೆಯಲ್ಲಿ ತಾಲೂಕುಮಟ್ಟದ ಅಧಿಕಾರಿಗಳಾದ ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ಬಿಇಒ ಜಯಪ್ಪ, ಬಿಸಿಎಂ ಇಲಾಖೆಯ ಅಧಿಕಾರಿ ರವೀಂದ್ರಕುಮಾರ್ ಅಥರ್ಗಾ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್, ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಜಿಪಂ ಅಭಿಯಂತರ ಶಿವಕುಮಾರ್ ನಾಯ್ಕ್, ತಾಲೂಕು ಕಸಾಪ ಅಧ್ಯಕ್ಷ ಎಲ್.ಜಿ.ಮಧುಕುಮಾರ್, ಜಿ.ಚಿನ್ನಸ್ವಾಮಿ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

- - -

-31ಕೆಸಿಎನ್ಜಿ3.ಜೆಪಿಜಿ:

ಚನ್ನಗಿರಿ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಎನ್.ಜೆ.ನಾಗರಾಜ್ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.