ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿಕಲ ಚೇತನರ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ವಿಕಲ ಚೇತನರ ಕಲ್ಯಾಣ ಅಧಿಕಾರಿ ವೈಶಾಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನವ ಜಿಲ್ಲಾಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ, ನವೆಂಬರ್ 24ರಂದು ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರಿಗಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ವಿಕಲಚೇತನರ ವಯೋಮಿತಿ ಮತ್ತು ಅಂಗವೈಕಲ್ಯದ ಸ್ವರೂಪಕ್ಕೆ ಅನುಗುಣವಾಗಿ ಮಡಿಕೆ ಒಡೆಯುವುದು, ಕೇನ್ ರೇಸ್, 100 ಮೀಟರ್ ಓಟ, ಬಕೆಟ್ಗೆ ರಿಂಗ್ ಎಸೆಯುವುದು, ಗುಂಡು ಎಸೆತ ಹಾಗೂ ಜಾವೆಲಿನ್ ಥ್ರೋ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಗಮಿಸುವ ವಿಕಲಚೇತನ ಮಕ್ಕಳನ್ನು ಸುರಕ್ಷಿತವಾಗಿ ಕರೆತಂದು, ಮರಳಿ ತಲುಪಿಸುವ ಜವಾಬ್ದಾರಿ ಆಯಾ ಶಾಲಾ ಮುಖ್ಯಸ್ಥರದ್ದಾಗಿರುತ್ತದೆ.ವಿಶ್ವ ವಿಕಲಚೇತನರ ದಿನಾಚರಣೆಯ ಜಿಲ್ಲಾಮಟ್ಟದ ವೇದಿಕೆ ಕಾರ್ಯಕ್ರಮವನ್ನು ಡಿಸೆಂಬರ್ 3ರಂದು ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ವೈದ್ಯಕೀಯ ತಂಡ, ಆಂಬುಲೆನ್ಸ್, ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಮತ್ತು ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಕಲಚೇತನರನ್ನು ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಾಲೂಕಿಗೊಬ್ಬ ವಿಕಲಚೇತನ ವಿದ್ಯಾರ್ಥಿಯನ್ನು ಗುರುತಿಸಿ ಸನ್ಮಾನಿಸಲಾಗುವುದು. ಪ್ಯಾರಾ ಒಲಂಪಿಕ್ಸ್ ಪದಕ ವಿಜೇತರಾದ ಜಿಲ್ಲೆಯ ಪಲ್ಲವಿ ಮತ್ತು ರಾಧಾ ವೆಂಕಟೇಶ್ ಅವರನ್ನೂ ಗೌರವಿಸಲು ಕ್ರಮ ಕೈಗೊಳ್ಳಲಾಗುವುದು. ಸಾಧಕರ ಮಾಹಿತಿಯನ್ನು ಸಂಘ-ಸಂಸ್ಥೆಗಳು ಇಲಾಖೆಗೆ ಒದಗಿಸಬೇಕು ಎಂದು ಮನವಿ ಮಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ವಿ.ವೀಣಾ, ವಿವಿಧ ವಿಕಲಚೇತನರ ಸಂಘಟನೆಗಳ ಪದಾಧಿಕಾರಿಗಳು, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.