ದೇಶ-ವಿದೇಶಗಳಿಂದ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು 24 ಗಂಟೆಗಳ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಅಗತ್ಯವಿದೆ. ದೇವಸ್ಥಾನಕ್ಕೆ ಭಕ್ತರು ನೀಡುವ ಕಾಣಿಕೆ ಹಣ ಬಳಸಿ ಈ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.
ಸುಬ್ರಹ್ಮಣ್ಯ: ದೇಶ-ವಿದೇಶಗಳಿಂದ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು 24 ಗಂಟೆಗಳ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಅಗತ್ಯವಿದೆ. ದೇವಸ್ಥಾನಕ್ಕೆ ಭಕ್ತರು ನೀಡುವ ಕಾಣಿಕೆ ಹಣ ಬಳಸಿ ಈ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯರು ಮುಂದಿಟ್ಟಿರುವ 24 ಗಂಟೆಗಳ ವೈದ್ಯಕೀಯ ಸೇವೆಯ ಬೇಡಿಕೆ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಏನೇ ಇರಲಿ, ಭಕ್ತರು ನೀಡುವ ಹಣವನ್ನು ಅವರ ಅನುಕೂಲಕ್ಕಾಗಿಯೇ ಬಳಸಿಕೊಳ್ಳಬೇಕು. ಇದಕ್ಕಾಗಿ ಸರ್ಕಾರ ಪ್ರತ್ಯೇಕವಾಗಿ ಹಣ ಹಂಚಿಕೆ ಮಾಡುವ ಅಗತ್ಯವಿಲ್ಲ ಎಂದು ಸಲಹೆ ನೀಡಿದರು.ಚಿನ್ನದ ರಥ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ರಥ ನಿರ್ಮಾಣವಾಗಬೇಕೆಂಬುದು ಹಲವಾರು ವರ್ಷಗಳಿಂದ ಭಕ್ತರ ಆಸೆ ಹಾಗೂ ನಿರೀಕ್ಷೆಯಾಗಿದೆ. ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಿನ್ನದ ರಥ ನಿರ್ಮಿಸಲು ನಿರ್ಧರಿಸಿದ್ದೆ. ಆದರೆ ಕಳೆದ ಏಳೆಂಟು ವರ್ಷಗಳಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಈ ವಿಚಾರದಲ್ಲಿ ಗಮನ ಹರಿಸಿಲ್ಲ ಎಂದು ಹೇಳಿದರು.
ಭಕ್ತರ ಬಹುದಿನಗಳ ಬೇಡಿಕೆಯಾಗಿರುವ ಚಿನ್ನದ ರಥ ನಿರ್ಮಾಣದ ಆಶಯ ಈಡೇರಿಸುವುದಾಗಿ ಭರವಸೆ ನೀಡಿದರು.ಮೈತ್ರಿ ಕುರಿತು ಶೀಘ್ರ ನಿರ್ಧಾರ:
ಮುಂಬರುವ ಜಿ. ಪಂ. ಹಾಗೂ ತಾ. ಪಂ. ಚುನಾವಣೆಗಳಿಗೆ ಜೆಡಿಎಸ್ ಸಿದ್ಧತೆ ಮತ್ತು ಬಿಜೆಪಿ ಜೊತೆಗಿನ ಮೈತ್ರಿ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಈಗಾಗಲೇ ಪಕ್ಷದ ಪ್ರಮುಖರೊಂದಿಗೆ ಮೂರ್ನಾಲ್ಕು ಸಭೆಗಳನ್ನು ನಡೆಸಲಾಗಿದೆ. ಸಭೆಗಳಲ್ಲಿ ಪಕ್ಷದ ಮುಖಂಡರು ಹಲವು ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.ಮೈತ್ರಿ ಪಕ್ಷವಾದ ಬಿಜೆಪಿಯ ನಾಯಕರು ತಮ್ಮ ಕೋರ್ ಕಮಿಟಿಯಲ್ಲಿ ಕೈಗೊಳ್ಳುವ ತೀರ್ಮಾನ ಹಾಗೂ ಮುಂದಿನ ಚರ್ಚೆಗಳ ಆಧಾರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ರಾಜ್ಯ ರಾಜಕೀಯ ಪರಿಸ್ಥಿತಿ ಮತ್ತು ಕಾಂಗ್ರೆಸ್ ಪಕ್ಷದ ಆಡಳಿತವನ್ನು ಎದುರಿಸುವ ನಿಟ್ಟಿನಲ್ಲಿ ಉಭಯ ಪಕ್ಷಗಳ ಮುಂದಿನ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದರು.ರಾಜ್ಯದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಕಂದಕ ಸೃಷ್ಟಿಯಾಗಿದ್ದು, ಪರಸ್ಪರ ವಿಶ್ವಾಸದ ಕೊರತೆ ಕಂಡುಬರುತ್ತಿದೆ. ಆಡಳಿತದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದರು.ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ನ ಪತ್ರಕರ್ತರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸಬೇಕೆಂಬ ಬೇಡಿಕೆಗೆ ಸ್ಪಂದಿಸಿ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರ ಅನುದಾನದ ಮೂಲಕ ಸೌಲಭ್ಯಗಳನ್ನು ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.ವಿಧಾನ ಪರಿಷತ್ ಸದಸ್ಯ ಭೋಜೆ ಗೌಡ, ಸುಳ್ಯ ವಿಧಾನ ಸಭಾ ಸದಸ್ಯೆ ಭಾಗೀರಥಿ ಮುರುಳ್ಯ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಜೆಡಿಎಸ್ ಮುಖಂಡರಾದ ಎಂ.ಬಿ ಸದಾಶಿವ, ಜಾಕೆ ಮಾದವ ಗೌಡ, ದಯಾಕರ ಆಳ್ವ, ಮೀರಾ ಸಾಹೇಬ್, ಸೋಮಸುಂದರ ಕೂಜುಗೋಡು, ಸುಕುಮಾರ್ ಕೋಡ್ತಗುಳಿ, ರಾಕೇಶ್ ಕುಂಟಿಕಾನ, ಡಾ. ತಿಲಕ್ ಎ.ಎ, ಉದಯಕುಮಾರ್ ಡಿ.ಎಸ್, ಶಿವರಾಮ ಚಿಲ್ತಡ್ಕ, ಸತ್ಯನಾರಾಯಣ ಚಿಮ್ಟಿಕಲ್ಲು, ಜಯಂತ ಪಂಬೆತ್ತಾಡಿ, ನಿಹಾಲ್ ಕೋಡ್ತುಗಳಿ, ಬಿಜೆಪಿ ಮುಖಂಡರಾದ ವೆಂಕಟ್ ದಂಬೆಕೋಡಿ, ಸಂತೋಪ್ ಜಾಕೆ, ಗಿರಿಧರ ಸ್ಕಂದ, ದಿನೇಶ್ ಬಿ.ಎನ್, ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಲೋಲಾಕ್ಷಾ ಕೈಕಂಬ, ಕಡಬ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಮತ್ತಿತರರಿದ್ದರು.