ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಈಜುಕೊಳ, ಪೆವಿಲಿಯನ್ ಹಾಗೂ ವಿವಿಧ ಆಟದ ಅಂಕಣಗಳನ್ನು ₹೧೫ ಕೋಟಿ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿಗೆ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.ನಂತರ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು, ಜಿಲ್ಲಾ ಕೇಂದ್ರದಲ್ಲಿ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿ ಆಗಲಿದೆ. ಈ ಹಿಂದೆಯೇ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಬೇಕಿತ್ತು. ಕಾರಣಾಂತರದಿಂದ ನೆರವೇರಿರಲಿಲ್ಲ. ಪ್ರಸ್ತುತ ₹೧೫ ಕೋಟಿ ವೆಚ್ಚದ ಕಾಮಗಾರಿಗೆ ಟೆಂಡರ್ ಆಗಿದ್ದು ಗುದ್ದಲಿಪೂಜೆ ನೆರವೇರಿಸಲಾಗಿದೆ ಎಂದರು.
ಈಜುಕೊಳ, ಪೆವಿಲಿಯನ್ ಹಾಗೂ ವಿವಿಧ ಆಟಗಳ ಅಂಕಣಗಳ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ತ್ವರಿತವಾಗಿ ಕಾಮಗಾರಿ ಮುಗಿಸಿ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲಾಗುವುದು. ಈಗಾಗಲೇ ಬಾಲಕರು ಹಾಗೂ ಬಾಲಕಿಯರಿಗೆ ಪ್ರತ್ಯೇಕ ಕ್ರೀಡಾ ಹಾಸ್ಟೇಲ್ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ಶಾಸಕರು ತಿಳಿಸಿದರು.ಜಿಲ್ಲಾ ಕೇಂದ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ನಗರಕ್ಕೆ ಕುಡಿಯುವ ನೀರು ಪೂರೈಸಲು ಮಾಲಂಗಿಯಿಂದ ನೀರು ಸರಬರಾಜು ಮಾಡುವ ಕಾಮಗಾರಿಯನ್ನು ₹೧೧೦ ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುತ್ತಿದ್ದು, ಇದರ ಟೆಂಡರ್ ಕೂಡ ಆಗಿದೆ. ಅಲ್ಲದೇ ₹೧೩೦ ಕೋಟಿ ವೆಚ್ಚದಲ್ಲಿ ಪಟ್ಟಣಕ್ಕೆ ಒಳಚರಂಡಿ ಕಾಮಗಾರಿಗೂ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಿದ ಅಧ್ಯಕ್ಷರಾದ ಎಚ್.ವಿ. ಚಂದ್ರು, ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಎಚ್.ಎಸ್. ಬಿಂದ್ಯಾ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಯಪ್ರಕಾಶ್, ಹಿರಿಯ ಕ್ರೀಡಾಪಟು ಶ್ರೀನಿವಾಸ ಪ್ರಸಾದ್, ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ರಾಜಪ್ಪ, ಸ್ವಾಮಿ, ಸುರೇಶ್ ನಾಯಕ್, ಪದ್ಮಾ ಪುರುಷೋತ್ತಮ್, ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.