ಕೈಗಾರಿಕೆ ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡಲು ಕ್ರಮ : ಗೋವಿಂದ ಕಾರಜೋಳ

| Published : Jun 20 2024, 01:15 AM IST / Updated: Jun 20 2024, 12:07 PM IST

ಸಾರಾಂಶ

ತಾಲೂಕು ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿರುವ 5300 ಕೋಟಿ ರು. ಶೀಘ್ರದಲ್ಲಿ ಬಿಡುಗಡೆ ಮಾಡಿಸುತ್ತೇನೆ.

  ಶಿರಾ :  ತಾಲೂಕು ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿರುವ 5300 ಕೋಟಿ ರು. ಶೀಘ್ರದಲ್ಲಿ ಬಿಡುಗಡೆ ಮಾಡಿಸುತ್ತೇನೆ. ಕಾಡುಗೊಲ್ಲರನ್ನು ಎಸ್ಟಿ ಮೀಸಲಾತಿಗೆ ಸೇರಿಸಲು, ಕುಂಚಿಟಿಗ ಸಮುದಾಯವನ್ನು ಕೇಂದ್ರ ಓಬಿಸಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವತಿಯಿಂದ ಏರ್ಪಡಿಸಿದ್ದ ಕೃತಜ್ಞತಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ನಂಬಿಕೆ ಇಟ್ಟು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿದ್ದೀರಿ. ನಿಮ್ಮ ನಂಬಿಕೆಗೆ ಧಕ್ಕೆ ಬಾರದಂತೆ ಸೇವೆ ಸಲ್ಲಿಸುತ್ತೇನೆ. ಚಿತ್ರದುರ್ಗ ಲೋಕಸಭಾ ವ್ಯಾಪ್ತಿಯಲ್ಲಿ ಸರ್ವೇ ಮಾಡಿಸಿ ಇಲ್ಲಿನ ಅನುಕೂಲಕ್ಕೆ ತಕ್ಕಂತೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡುತ್ತೇನೆ ಎಂದರು.

ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡೋಣ. ಅಭಿವೃದ್ಧಿಯಲ್ಲಿ ರಾಜಕೀಯ ಮಾಡೋದು ಬೇಡ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದರು. ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಮಾತನಾಡಿ, ಚುನಾವಣೆಯಲ್ಲಿ ಗೋವಿಂದ ಕಾರಜೋಳ ಅವರ ಗೆಲುವಿಗೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸೈನಿಕರಂತೆ ದುಡಿದಿದ್ದಾರೆ. ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆಗಳು. ತುಮಕೂರು ಜಿಲ್ಲೆಗೆ 3 ಸಂಸದರು ಸಿಕ್ಕಿದ್ದಾರೆ. ನಮ್ಮ ತಾಲೂಕಿನ ಹಲವು ವರ್ಷಗಳ ಬೇಡಿಕೆಯಾದ ತುಮಕೂರು ಚಿತ್ರದುರ್ಗ ರೈಲ್ವೆ ಯೋಜನೆ ಪ್ರಾರಂಭವಾಗಬೇಕು ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ಬಿಡುಗಡೆ ಮಾಡಿಸಬೇಕು. ಎತ್ತಿನಹೊಳೆ ಜಾರಿ, ವಸತಿ ರಹಿತರಿಗೆ ವಸತಿ ಸೌಕರ್ಯ ಕಲ್ಪಿಸಬೇಕು. ಕಾಡುಗೊಲ್ಲ ಸಮುದಾಯದವರನ್ನು ಎಸ್ಟಿ ಮೀಸಲಾತಿಗೆ ಸೇರಿಸಬೇಕು. ಕುಂಚಿಟಿಗರಿಗೆ ಓಬಿಸಿ ಮೀಸಲಾತಿ ಕಲ್ಪಿಸಿ, ಶಿರಾಕ್ಕೆ ನವೋದಯ ಶಾಲೆ ಮಂಜೂರು ಮಾಡಿಸಬೇಕು. ಗೌಡಗೆರೆ ಹಾಗೂ ಹುಲಿಕುಂಟೆ ಹೋಬಳಿಗೆ ನೀರು ಹರಿಸಬೇಕು. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ನೀಡಬೇಕು ಎಂದು ಮನವಿ ಮಾಡಿದರು. ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಮಾಡಿ ಜನರ ಮನೆ ಮಾತಗಿರುವ ಗೋವಿಂದ ಕಾರಜೋಳ ಬಯಲು ಸೀಮೆ ಪ್ರದೇಶವನ್ನು ಅಭಿವೃದ್ಧಿ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

ರಾಜ್ಯ ಜೆಡಿಎಸ್ ಪರಿಷತ್ ಸದಸ್ಯ ಆರ್. ಉಗ್ರೇಶ್ , ಮಧುಗಿರಿ ವಿಭಾಗದ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಆರ್.ಕೆ.ಶ್ರೀನಿವಾಸ್, ಯಂಜಲಗೆರೆ ಮೂರ್ತಿ, ಹಿಂದುಳಿದ ವರ್ಗದ ಅಧ್ಯಕ್ಷ ಮಾಗೋಡು ಪ್ರತಾಪ್, ತಾಲೂಕು ಜೆಡಿಎಸ್ ಅಧ್ಯಕ್ಷ ಸತ್ಯಪ್ರಕಾಶ್, ತಾಲೂಕು ಬಿಜೆಪಿ ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ಡಿಪಿ ರಂಗನಾಥ್, ಮಾಜಿ ಅಧ್ಯಕ್ಷ ಮಾಲಿ ಮರಿಯಪ್ಪ, ನಗರ ಅಧ್ಯಕ್ಷ ಗಿರಿಧರ್, ಜಿಲ್ಲಾ ಕಾರ್ಯದರ್ಶಿ ಎಸ್.ಪಿ.ಕೃಷ್ಣಮೂರ್ತಿ, ಮಾಜಿ ಜಿಪಂ ಉಪಾಧ್ಯಕ್ಷ ಮುದಿಮಡು ರಂಗಸ್ವಾಮಯ್ಯ, ನಗರಸಭೆ ಸದಸ್ಯ ರಾಮು, ಅಂಬುಜಾ ನಟರಾಜ್, ಮಾಜಿ ಸದಸ್ಯ ಆರ್.ರಾಘವೇಂದ್ರ, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ ಹಾಜರಿದ್ದರು.