ಕ್ಷೇತ್ರಗಳಿಗೆ ತೆರಳಿ ಬೆಳೆ ಹಾನಿಯ ವಾಸ್ತವ ಪರಿಸ್ಥಿತಿ ಪರಿಶೀಲಿಸುವಂತೆ ಕಟ್ಟುನಿಟ್ಟಿನ ಸೂಚನೆ
ಕುಷ್ಟಗಿ: ತಾಲೂಕಿನ ಮೆಣೇದಾಳ ಸಮೀಪದ ಚಿಕ್ಕತೆಮ್ಮಿನಾಳ ಸೀಮಾದ ರೈತ ಬಸವರಾಜ ಸಾರಥಿ ಜಮೀನಿಗೆ ಭೇಟಿ ನೀಡಿದ ಸಚಿವ ಶಿವರಾಜ ತಂಗಡಗಿ, ಬರ ಪರಿಸ್ಥಿತಿಯ ಹಿನ್ನೆಲೆ ಜಿಟಿಜಿಟಿ ಮಳೆಯ ನಡುವೆಯೇ ವಿವಿಧ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೆಳೆ ವಿಮೆ ಮಾಡಿಸಿರುವ ರೈತರಿಗೆ ಪರಿಹಾರ ದೊರೆಯುವಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಬೆಳೆ ಹಾನಿ ಹಾಗೂ ವಿಮಾ ಪರಿಹಾರಕ್ಕೆ ಸಂಬಂಧಿಸಿದ ಮಾರ್ಗಸೂಚಿ ಪರಿಶೀಲಿಸಿ, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಎಲ್ಲ ಜಿಲ್ಲೆಗಳಿಗೂ ಸಚಿವರನ್ನು ನಿಯೋಜಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸುವುದರ ಜತೆಗೆ ಕ್ಷೇತ್ರಗಳಿಗೆ ತೆರಳಿ ಬೆಳೆ ಹಾನಿಯ ವಾಸ್ತವ ಪರಿಸ್ಥಿತಿ ಪರಿಶೀಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅದರಂತೆ ಕ್ಷೇತ್ರಕ್ಕೆ ಭೇಟಿ ನೀಡಿ ರೈತರ ಬೆಳೆಗಳ ಪರಿಸ್ಥಿತಿ ಪರಿಶೀಲಿಸಲಾಗುತ್ತಿದೆ ಎಂದರು.
ಇದು ಕೇವಲ ಒಂದು ದಿನದ ಪ್ರವಾಸವಲ್ಲ. ಮುಂದಿನ ದಿನವೂ ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಂಚರಿಸಿ ಬೆಳೆ ಹಾನಿ ಹಾಗೂ ರೈತರ ಸಮಸ್ಯೆ ಖುದ್ದಾಗಿ ಪರಿಶೀಲಿಸಲಾಗುವುದು. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಶಾಸಕರು, ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಬೆಳೆ ಹಾನಿಯ ಕುರಿತು ಸಮಗ್ರವಾಗಿ ಚರ್ಚಿಸಲಾಗುವುದು ಎಂದು ಹೇಳಿದರು.ಕಳೆದ ಹಲವು ವರ್ಷಗಳಿಂದ ಬೆಳೆ ವಿಮೆ ಹಾಗೂ ಕ್ಲೇಮ್‌ಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರೈತರಿಂದ ಅಹವಾಲು ಬರುತ್ತಿವೆ. ಈ ಬಾರಿ ಅಂತಹ ಸಮಸ್ಯೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು. ರೈತರಿಗೆ ಯಾವುದೇ ಅನ್ಯಾಯವಾಗದ ರೀತಿಯಲ್ಲಿ ಬೆಳೆ ಹಾನಿ ಹಾಗೂ ವಿಮಾ ಪರಿಹಾರಕ್ಕೆ ಸಂಬಂಧಿಸಿದ ಮಾರ್ಗಸೂಚಿ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರೈತರ ಹೊಲಗಳಿಗೆ ತೆರಳಿ ವಾಸ್ತವ ಪರಿಸ್ಥಿತಿ ಅರಿತುಕೊಳ್ಳುವುದು ಹಾಗೂ ಬೆಳೆ ಹಾನಿಯ ನೈಜ ಚಿತ್ರಣ ಸರ್ಕಾರದ ಗಮನಕ್ಕೆ ತರುವುದು ಕ್ಷೇತ್ರ ಪ್ರವಾಸದ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.ಈ ಸಂದರ್ಭದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ, ತಹಸೀಲ್ದಾರ್ ಅಶೋಕ ಶಿಗ್ಗಾಂವಿ, ತೋಟಗಾರಿಕೆ ಇಲಾಖೆ ಜಿಲ್ಲಾ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ ಕಾತರಕಿ, ಆಶಾ ರಾಠೋಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.