ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ

| Published : Nov 25 2024, 01:00 AM IST

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ
Share this Article
  • FB
  • TW
  • Linkdin
  • Email

ಸಾರಾಂಶ

ಮಾನ್ವಿ ಪಟ್ಟಣದ ಕುಂಬಾರವಾಡಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ತಪಾಸಣಾ ಶಿಬಿರವನ್ನು ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಮಾನ್ವಿ

ಪಟ್ಟಣದ ಕುಂಬಾರವಾಡಿಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಮನ್ವಯ ಶಿಕ್ಷಣ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮತ್ತು ಅಲಿಂಕೋ ಬೆಂಗಳೂರು ಇವರ ಸಹಯೋಗದೊಂದಿಗೆ ಏರ್ಪಡಿಸಿದ್ದ ಶಿಬಿರಕ್ಕೆ ಬಿಇಒ ಚಂದ್ರಶೇಖರ ಡಿ. ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಗು ತಾಯಿ ಗರ್ಭದಲ್ಲಿರುವಾಗ ಉಂಟಾಗುವ ನ್ಯೂನತೆಯಿಂದ ಮಕ್ಕಳ ಅಂಗಗಳಲ್ಲಿ ನ್ಯೂನತೆ ಉಂಟಾಗುತ್ತದೆ. ವಿಶೇಷ ಚೇತನ ಮಕ್ಕಳನ್ನು ಕೂಡ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ತಾಲೂಕಿನಲ್ಲಿ ವಿವಿಧ ಅಂಗಗಳ ನ್ಯೂನತೆ ಹೊಂದಿರುವ 400ಕ್ಕೂ ಹೆಚ್ಚು ವಿಶೇಷ ಚೇತನ ವಿದ್ಯಾರ್ಥಿಗಳನ್ನು ಗುರುತಿಸಿ, ಈ ಶಿಬಿರದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಅಗತ್ಯ ವಿರುವ ಬೈಸಿಕಲ್, ಗಾಲಿ ಕುರ್ಚಿ ಸೇರಿದಂತೆ ಎಲ್ಲಾ ಸಾಧನ ಸಲಕರಣೆಗಳನ್ನು ಒದಗಿಸಿಕೊಡಲಾಗುತ್ತಿದೆ ಎಂದರು.

ಮಕ್ಕಳು ಕಲಿಕೆಯಿಂದ ಹಿಂದುಳಿಯದಂತೆ ಸರ್ಕಾರ ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ಜಾರಿಗೆ ತಂದಿದ್ದು, 6 ರಿಂದ 18 ವರ್ಷಗಳವರೆಗಿನ ಎಲ್ಲಾ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯ ಶಿಕ್ಷಣ ವ್ಯವಸ್ಥೆ ಮಾಡಲಾಗಿದ್ದು, ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡದೆ ಸಮೀಪದ ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಕ್ಷೇತ್ರ ಸಮನ್ವಯ ಅಧಿಕಾರಿ ಕುಬೇರಪ್ಪ, ತಜ್ಞ ವೈದ್ಯರು, ಅಲಿಂಕೋ ಸಂಸ್ಥೆಯವರು, ವಿಕಲಚೇತನರ ವಿವಿಧ ಸಂಘಟನೆಗಳ ಜಾಫರ್, ವಿಶೇಷ ಅಗತ್ಯವುಳ್ಳ ಮಕ್ಕಳು ಹಾಗೂ ಪೋಷಕರು ಇದ್ದರು.