ಸಾರಾಂಶ
ಕನ್ನಡಪ್ರಭ ವಾರ್ತೆ ಲಿಂಗಸುಗೂರು
ಮಹತ್ವದ ಸಭೆಯ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಉಸ್ತುವಾರಿ ಸಚಿವರ ಎದುರು ಕೆಡಿಪಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದಂತಹ ಘಟನೆ ಭಾನುವಾರ ನಡೆಯಿತು.ಇಲ್ಲಿನ ತಾಪಂ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿತ್ತು. ಸಭೆ ಆರಂಭದಲ್ಲಿ ಕೆಡಿಪಿ ಸದಸ್ಯರಾದ ಪರಮೇಶ್, ರಾಘವೇಂದ್ರ, ಶರಣಪ್ಪ ಹಾಗೂ ಶ್ವೇತಾ ಅವರು ವೇದಿಕೆ ಮುಂದೆ ಬಂದು ಸಭೆ ಇರುವುದರ ಕುರಿತು ಅಧಿಕಾರಿಗಳು ಮಾಹಿತಿ ನೀಡಿಲ್ಲವೆಂದು ಉಸ್ತುವಾರಿ ಸಚಿವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ ಆದರೆ ಅಧಿಕಾರಿಗಳು ಸದಸ್ಯರನ್ನೇ ಕಡೆಗಣಿಸಿರುವುದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸದಸ್ಯರ ದೂರನ್ನು ಆಲಿಸಿದ ಉಸ್ತುವಾರಿ ಮಂತ್ರಿಗಳು ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸುವುದಾಗಿ ತಿಳಿಸಿ ಸದಸ್ಯರನ್ನು ಸಮಾಧಾನಪಡಿಸಿದರು.
ನಂತರ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಹಾಗೂ ಲಿಂಗಸುಗೂರು ತಾಲೂಕಿನಲ್ಲಿ ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಲಿಂಗಸುಗೂರಿನಲ್ಲಿ ಶೇ.90 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದ್ದು, ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಸಬೇಕು. ರೈತರಿಗೆ ಹಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದರು.ಲಿಂಗಸುಗೂರು ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಒಂದು ವೇಳೆ ಹಾಜರಾಗದಿದ್ದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಎನ್ಎಂಎಚ್ ಕಾರ್ಯಕ್ರಮದಲ್ಲಿ ನೇಮಕಾತಿ ಮಾಡಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೌಲಭ್ಯಗಳು ಒದಗಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಳಿಸುವುದು, ಎಲ್ಲ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು, ರೈತರು ಹೆಚ್ಚಿನ ಮಟ್ಟದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಜಾಗೃತಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು.ಸಭೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿ ವರ್ಗದವರು ಇದ್ದರು.
ಸಚಿವರಿಂದ ಅಕ್ಕ ಕೆಫೆ ಉದ್ಘಾಟನೆಲಿಂಗಸುಗೂರು ಪಟ್ಟಣದ ತಾಪಂ ಆವರಣದಲ್ಲಿ ಸಂಜೀವಿನಿ -ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಯಚೂರು ಜಿಪಂ ರಾಯಚೂರು, ಲಿಂಗಸುಗೂರು ತಾಪಂ ಇವರ ಸಂಯುಕ್ತಾಶ್ರಯದಲ್ಲಿ ಅಕ್ಕ ಕೆಫೆಯನ್ನು ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಉದ್ಘಾಟಿಸಿದರು.