ಸಾರಾಂಶ
ಹಾವೇರಿ:ಮನುಷ್ಯನಿಗೆ ದೇಹದ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಜೀವನದಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.ನಗರದ ಸಿಂದಗಿ ಶಾಂತವೀರೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜರುಗಿದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹಾಗೂ ವಿಶ್ವ ದೃಷ್ಟಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರಮುಖವಾಗಿ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಗೆ ದೈನಂದಿನ ಕೆಲಸಕಾರ್ಯಗಳ ಒತ್ತಡದ ಮಧ್ಯೆಯೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ಜೊತೆಗೆ ಕಾನೂನು ಅರಿವು ಹೊಂದಬೇಕು ಎಂದು ಹೇಳಿದರು.ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯ ಡಾ. ವಿಜಯಕುಮಾರ ಬಿ. ಅವರು ಆರೋಗ್ಯದ ಕುರಿತು, ನೇತ್ರ ವೈದ್ಯರಾದ ಡಾ. ಅಕ್ಷತಾ ಹಾಗೂ ಡಾ. ರಾಘವೇಂದ್ರಸ್ವಾಮಿ ಅವರು ದೃಷ್ಟಿ ಆರೋಗ್ಯದ ಕುರಿತು ಉಪನ್ಯಾಸ ನೀಡಿದರು.ಸಿಂದಗಿ ಶಾಂತವೀರೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಪ್ರಾಂಶುಪಾಲ ಡಾ. ಚಂದ್ರಶೇಖರ ಎನ್.ಗೌಡರ ಅಧ್ಯಕ್ಷತೆ ವಹಿಸಿದ್ದರು.ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಬಾಲಮುಕುಂದ ರಮೇಶರಾವ್ ಮುತಾಲಿಕದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ, ಸಿಂದಗಿ ಶಾಂತವೀರೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಸ್ಥಾನಿಕ ಆಡಳಿತಾಧಿಕಾರಿ ವಿ.ಎಚ್.ಹಿರೇಮಠ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಚನ್ನಬಸಯ್ಯ ವಿರಕ್ತಮಠ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಇತರರು ಉಪಸ್ಥಿತರಿದ್ದರು.