ಸಾರಾಂಶ
-ಹತ್ತಿಗೂಡೂರು ಅಂಬೇಡ್ಕರ್ ನಗರದ ಸರ್ಕಾರಿ ಶಾಲೆಯಲ್ಲಿ ಬಾಲ ಮೇಳ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಶಹಾಪುರಅಂಗನವಾಡಿ ಕೇಂದ್ರಗಳು ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಮತ್ತು ಮಕ್ಕಳ ಮಾನಸಿಕ ಬೌದ್ಧಿಕ ಬೆಳವಣಿಗೆಗೆ ಭದ್ರ ಬುನಾದಿ ಆಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರಣ್ಣಗೌಡ ಹೇಳಿದರು.
ಹತ್ತಿಗೂಡೂರು ಗ್ರಾಮದ ಡಾ. ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಜೀಂ ಪ್ರೇಮಜೀ ಫೌಂಡೇಶನ್ ಜಿಲ್ಲಾ ಸಂಸ್ಥೆ ಯಾದಗಿರಿ ಅವರ ಸಂಯುಕ್ತಾಶ್ರಯದಲ್ಲಿ ಬಾಲಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಅಂಗನವಾಡಿ ಕೇಂದ್ರಗಳು ಪುಟ್ಟಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತೆ ಸಿಬ್ಬಂದಿ ಕಾರ್ಯ ನಿರ್ವಹಿಸಬೇಕು. 3-6ರಿಂದ ವರ್ಷದ ಮಕ್ಕಳಲ್ಲಿ ಗ್ರಹಿಸಿಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದ ಹಂತದಲ್ಲಿ ಮಕ್ಕಳಿಗೆ ಅನೇಕ ಅವಕಾಶಗಳು ಸಿಗುವಂತಾಗಬೇಕು. ಆ ನಿಟ್ಟಿನಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದರು.
ಮಕ್ಕಳ ಭವಿಷ್ಯ ಭಾರತದ ಭವಿಷ್ಯ ಎಂಬ ದೂರ ದೃಷ್ಟಿ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಶಿಶು ಅಭಿವೃದ್ಧಿ ಯೋಜನೆಯು ಒಂದಾಗಿದ್ದು, ಪ್ರತಿ ಮಗುವಿನ ಕಲಿಕೆಯ ಭದ್ರಬುನಾದಿ ಮೊದಲ ಹೆಜ್ಜೆಯೇ ಈ ಅಂಗನವಾಡಿ ಕೇಂದ್ರಗಳು ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು ಎಂದರು.ಅಜೀಂ ಪ್ರೇಮ್ ಜಿ ಫೌಂಡೇಶನ್ ನ ಎಪಿಎಫ್ ಜಾನಕಿ ಮಾತನಾಡಿ, ಅಜೀಮ್ ಪ್ರೇಮ್ ಜಿ ಫೌಂಡೇಶನ್ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದೆ. ಶಾಲಾ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಸ್ರವಿಸುತ್ತಾ ಬಂದಿದೆ, ಅಂಗನವಾಡಿ ಕೇಂದ್ರಗಳು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪೂರಕ ವಾತಾವರಣ ಮತ್ತು ಮಕ್ಕಳಲ್ಲಿ ಕಲಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದರು.
ಜಿಲ್ಲಾ ನಿರೂಪಣಾಧಿಕಾರಿ ಪ್ರೇಮ ಮೂರ್ತಿ ಮಾತನಾಡಿ, ಮಕ್ಕಳಲ್ಲಿರುವಂತಹ ಪ್ರತಿಭೆ ಮತ್ತು ಕೌಶಲ್ಯ ಹೊರ ತರುವಂತಹ ಕಾರ್ಯಕ್ರಮ ಈ ಬಾಲ ಮೇಳವಾಗಿದೆ. ಅಂಗನವಾಡಿ ಕೇಂದ್ರಕ್ಕೆ ಬರುವ ಬಹುತೇಕ ಮಕ್ಕಳು ಬಡವರು ಮತ್ತು ಕೂಲಿ ಕಾರ್ಮಿಕರ ಮಕ್ಕಳಾಗಿರುತ್ತವೆ. ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇರದ ಹಾಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅಂಗನವಾಡಿ ಕಾರ್ಯಕರ್ತೆಯರ ಜವಾಬ್ದಾರಿಯಾಗಿದೆ ಎಂದರು.ಹತ್ತಿಗೂಡರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಷಣ್ಮುಖಪ್ಪ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯೋಗಿತಾಬಾಯಿ, ಪಿಡಿಒ ಬೂದೆಪ್ಪ, ಅಜೀಂ ಪ್ರೇಮ್ ಜಿ ಫೌಂಡೇಶನ್ ನ ಇಲಿಯಾಸ್, ಕೆ.ಕೆ.ಆರ್.ಡಿ.ಬಿ.ಯ ಶಾಂತಮ್ಮ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷ ಬಸಲಿಂಗಮ್ಮ ನಾಟೇಕಾರ್ ಸೇರಿದಂತೆ ಇತರರಿದ್ದರು. ಮೇಲ್ವಿಚಾರಕಿ ಮಾಲತಿ ಮಾತನಾಡಿ, ನಿರೂಪಿಸಿ, ಸ್ವಾಗತಿಸಿದರು.
------ಶಹಾಪುರ ತಾಲೂಕಿನ ಹತ್ತಿಗೂಡೂರು ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಾಲ ಮೇಳ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರಣ್ಣಗೌಡ ಮಾತನಾಡಿದರು.
26ವೈಡಿಆರ್3: