ಸಾರಾಂಶ
ಕನ್ನಡಪ್ರಭ ವಾರ್ತೆ ನಂಜನಗೂಡು
ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಿಂದ ನಮ್ಮೆಲ್ಲರ ಬದುಕು ಹಸನವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.ತಾಲೂಕಿನ ಹುಲ್ಲಹಳ್ಳಿಯಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವೆಲ್ಲರೂ ಸಂವಿಧಾನವನ್ನು ರಕ್ಷಣೆ ಮಾಡಬೇಕು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ತಪ್ಪದೆ ಸಂವಿಧಾನದ ಪೀಠಿಕೆಯನ್ನು ಓದಬೇಕೆಂಬ ಸೂಚನೆ ನೀಡಲಾಯಿತು. ಇದರಿಂದ ಮೂರು ವರ್ಷದ ಮಕ್ಕಳು ಸಹಾ ಮಗ್ಗಿ ಪಾಠ ಹೇಳುವ ರೀತಿ ಸಂವಿಧಾನವನ್ನು ಹೇಳುತ್ತಿದ್ದಾರೆ ಎಂದರು.ಇನ್ನು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವ ಮೂಲಕ ಪೋಷಕರು ತಮ್ಮ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು. ಸದೃಢ ದೇಶ ನಿರ್ಮಿಸಲು ಎಲ್ಲರೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಸಾಗಬೇಕು. ಆ ಮೂಲಕ ಸಮೃದ್ಧ ಭಾರತ ನಿರ್ಮಾಣವಾಗಲಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕು ಎಂದು ಹೇಳಿದರು.
ಇದಕ್ಕೂ ಮುನ್ನಾ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಆಕರ್ಷಕ ಮೆರವಣಿಗೆಗೆ ಚಾಲನೆ ನೀಡಿದರು. ಇನ್ನು ಅಂಬೇಡ್ಕರ್ ಜಯಂತಿ ಪ್ರಯುಕ್ತ ನಡೆಸಿದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.ಶಾಸಕ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕರಾದ ಬಿ. ಹರ್ಷವರ್ಧನ್, ಕಳಲೆ ಕೇಶವಮೂರ್ತಿ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ಮಾಜಿ ಮೇಯರ್ ಪುರುಷೋತ್ತಮ್, ಗ್ರಾಪಂ ಅಧ್ಯಕ್ಷೆ ದೇವಮ್ಮ ಹುಚ್ಚಯ್ಯ, ಉಪಾಧ್ಯಕ್ಷ ಎಚ್.ಪಿ. ಲೋಕೇಶ್, ಸದಸ್ಯರಾದ ಎಚ್.ಜೆ. ಮಲ್ಲಿಕಾರ್ಜುನ, ಕುಮಾರ್ ಚೌಡಯ್ಯ, ಅನ್ಸರ್ ಅಹಮದ್, ಪ್ರತಾಪ್, ಸೋಮಶೇಖರ್, ನಾಗೇಂದ್ರ, ಮಾಜಿ ಸದಸ್ಯ ನದೀಮ್ ಅಹಮದ್, ಮರಿಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜು, ಜಿಪಂ ಮಾಜಿ ಸದಸ್ಯ ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ ಸೇರಿದಂತೆ ಭೀಮ ಬಳಗ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.