ಸಾರಾಂಶ
ಪ್ರಸಕ್ತ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆದರೂ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದರೆ, ಅದನ್ನು ನಿಭಾಯಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಇದಕ್ಕೆ ಅನುಗುಣವಾಗಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರುಬೇಸಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕುಡಿಯುವ ನೀರು ಸರಬರಾಜು ಕುರಿತು ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.ಪ್ರಸಕ್ತ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆದರೂ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದರೆ, ಅದನ್ನು ನಿಭಾಯಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಇದಕ್ಕೆ ಅನುಗುಣವಾಗಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.ಡ್ಯಾಂಗಳಲ್ಲಿ ನೀರಿದೆ: ಜಿಲ್ಲೆಯಲ್ಲಿರುವ ವಿವಿಧ ಕಿರು ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ತೃಪ್ತಿದಾಯಕವಾಗಿದೆ. ಕುಡಿಯುವ ನೀರಿನ ಸರಬರಾಜಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಗತ್ಯ ಬಿದ್ದರೆ ನೇತ್ರಾವತಿ ನದಿಯ ಎ.ಎಂ.ಆರ್. ಡ್ಯಾಂನಿಂದಲೂ ನೀರು ಪಡೆಯಬೇಕು. ಈ ನಿಟ್ಟಿನಲ್ಲಿ ಎಂ.ಆರ್.ಪಿ.ಎಲ್. ಮತ್ತು ಎಸ್‍ಇಝಡ್ ನಂತಹ ಜಿಲ್ಲೆಯ ಬೃಹತ್ ಕೈಗಾರಿಕೆಗಳು ಸಹಕರಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದರು.ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು ಎಂದರು.ದಕ್ಷಿಣ ಕನ್ನಡ ಜಿಲ್ಲಾಡಳಿತ ಬರಪರಿಹಾರ ನಿಧಿಯಲ್ಲಿ 3 ಕೋಟಿ ರು. ಅನುದಾನ ಇದೆ. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಆನಂದ್ ಮತ್ತಿತರರು ಇದ್ದರು.