ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ೩೫ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಆಗಿರುವ ಸುಸಜ್ಜಿಯ ಆಟೋ ನಿಲ್ದಾಣವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟನೆ ಮಾಡಿದರು.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವರ ಸಂಸತ್ ಪ್ರದೇಶಾಭಿವೃದ್ಧಿ ನಿಧಿಯಿಂದ ಈ ಆಟೋ ನಿಲ್ದಾಣ ನಿರ್ಮಾಣ ಮಾಡಿದ್ದೇವೆ. ಇದು ಸುಸಜ್ಜಿತ, ವಿಶಾಲ ಆಟೋ ನಿಲ್ದಾಣ ಆಗಿದ್ದು, ಆಟೋ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಇಲ್ಲಿ ಸುಸಜ್ಜಿತ ಆಟೋ ನಿಲ್ದಾಣ ಬೇಕು ಎನ್ನುವುದು ಬಹಳ ದಿನಗಳ ಬೇಡಿಕೆ ಆಗಿತ್ತು. ಆ ಬೇಡಿಕೆ ಈಡೇರಿಸುವ ಕೆಲಸ ಆಗಿದೆ. ಅಲ್ಪ ಕಾಲದಲ್ಲಿಯೇ ನಿಲ್ದಾಣ ನಿರ್ಮಾಣ ಆಗಿದೆ ಎಂದು ಸಚಿವರು ಹೇಳಿದರು.
ನಗರದಲ್ಲಿ ಆಟೋ ವ್ಯವಸ್ಥೆ ಜನತೆಯ ಸಂಚಾರಕ್ಕೆ ಬಹಳ ಅನುಕೂಲವಾಗಿದೆ. ಆದರೆ, ಆಟೋ ಚಾಲಕರು ಮಳೆ, ಬಿಸಿಲಿನಲ್ಲಿ ಕಷ್ಟ ಅನುಭವಿಸುತ್ತಿದ್ದರು. ನಮಗೊಂದು ಸುಸಜ್ಜಿತ ನಿಲ್ದಾಣ ಮಾಡಿಕೊಡಿ ಎಂದು ಕೇಳಿದ್ದರು. ತಕ್ಷಣವೇ ಅದಕ್ಕೆ ಕ್ರಮ ವಹಿಸಿದ್ದೇವೆ. ದೇವೇಗೌಡರ ಸಂಸತ್ ನಿಧಿ ಹಾಗೂ ನನ್ನ ಪಾಲಿನ ಸಂಸತ್ ನಿಧಿಯ ಅನುದಾನದಿಂದ ಕಾಮಗಾರಿ ಕೈಗೆತ್ತಿಗೊಂಡಿದ್ದೆವು. ಈ ಸಂದರ್ಭದಲ್ಲಿ ಅನುದಾನ ನೀಡಿದ ದೇವೇಗೌಡರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಸಚಿವರು ಹೇಳಿದರು.ಮಾಜಿ ಮಂತ್ರಿ ಸಿ.ಎಸ್.ಪುಟ್ಟರಾಜು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮುಖಂಡರಾದ ಬಿ.ಆರ್.ರಾಮಚಂದ್ರ, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ ಮೊದಲಾದವರು ಇದ್ದರು.
ಮೈಷುಗರ್ ಶಾಲೆ ಅಭಿವೃದ್ಧಿಗೆ ೧೦ ಕೋಟಿ ರು. ಶೀಘ್ರ ಬಿಡುಗಡೆಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯ ಹೆಗ್ಗುರುತುಗಳಲ್ಲಿ ಒಂದಾಗಿರುವ ಮೈಷುಗರ್ ಶಾಲೆಯನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರವೇ ೧೦ ಕೋಟಿ ರು. ಒದಗಿಸಲಾಗುವುದು ಎಂದು ಭರವಸೆ ನೀಡಿದರು.ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಈ ಶಾಲೆಯನ್ನು ಕೊಡುವುದು ಬೇಡ. ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ ನೀಡಿದ್ದೆ. ಅದರ ವಿಚಾರದಲ್ಲಿ ನಮ್ಮ ತಂಡವೊಂದು ಮಂಡ್ಯದಲ್ಲಿ ಕೆಲಸ ಮಾಡುತ್ತಿದೆ. ಯಾರು ಅದರ ಬಗ್ಗೆ ಲಘುವಾಗಿ ಮಾತನಾಡುವ ಅವಶ್ಯಕತೆ ಇಲ್ಲ. ಮೈಷುಗರ್ ಶಾಲೆಯಿಂದ ಈಗಾಗಲೇ ೧೦ ಕೋಟಿ ರು. ಅನುದಾನಕ್ಕೆ ಅರ್ಜಿ ಕೊಟ್ಟಿದ್ದಾರೆ. ಸದ್ಯದಲ್ಲೆ ಆ ಹಣ ಬಿಡುಗಡೆಯಾಗಲಿದೆ. ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.