ಬಾಲ್ಯ ವಿವಾಹ ಹೆಚ್ಚಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಳವಳ

| Published : Sep 04 2024, 01:55 AM IST / Updated: Sep 04 2024, 12:14 PM IST

ಬಾಲ್ಯ ವಿವಾಹ ಹೆಚ್ಚಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಳವಳ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.

 ಚಿತ್ರದುರ್ಗ : ಬಾಲ್ಯವಿವಾಹ ಹೆಚ್ಚಳ ಪ್ರಕರಣಗಳಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನದಲ್ಲಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಿಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜಾಗೃತಿ ಶಿಬಿರ ಆಯೋಜಿಸುವುದೂ ಸೇರಿದಂತೆ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಲ್ಲಿನ ಜಿಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದು, ಬಾಲ್ಯ ವಿವಾಹ ತಡೆಗೆ ಕೈಗೊಂಡ ಕ್ರಮಗಳೇನು? ಯಾವ ಕ್ರಮಗಳು ಕೈಗೊಂಡರೆ ಬಾಲ್ಯವಿವಾಹ ತಡೆಯಲು ಸಾಧ್ಯವಿದೆ? ಅಧಿಕಾರಿಗಳ ಕಾರ್ಯ ವೈಖರಿ ಏನು? ಎಷ್ಟು ತಪ್ಪಿತಸ್ಥ ಜನರಿಗೆ ಶಿಕ್ಷೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅಧಿಕಾರಿಗಳನ್ನು ಪ್ರಶ್ನಿಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್. ಬಣಕಾರ್ ಅವರು, ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 87 ದೂರುಗಳು ಬಂದಿದ್ದು, ಈಗಾಗಲೇ 42 ಪ್ರಕರಣಗಳನ್ನು ತಡೆಯಲಾಗಿದ್ದು, 41 ಬಾಲ್ಯ ವಿವಾಹ ನಡೆದಿದ್ದು ಎಫ್‍ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ತಾಯಂದಿರ ಮರಣ ಪ್ರಮಾಣ 1 ಲಕ್ಷ ಜೀವಂತ ಜನನಕ್ಕೆ 83.29 ಇರುವುದು ಕಳವಳಕಾರಿಯಾಗಿದೆ. ತಾಯಂದಿರ ಮರಣ ರಾಜ್ಯ ಪ್ರಮಾಣ ಸರಾಸರಿ ಶೆ.69 ರಷ್ಟಿದೆ. ಸಾಂಸ್ಥಿಕ ಹೆರಿಗೆಯ ನಂತರೂ ಬಾಣಂತಿಯರು ಸಾವನ್ನಪ್ಪುತ್ತಿರುವುದು ಏಕೆ? ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಹೆರಿಗೆ ನಂತರ ಬಾಣಂತಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲವೇ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಅಭಿನವ್ ಅವರನ್ನು ಪ್ರಶ್ನಿಸಿದರು.

ಸಚಿವರ ಪ್ರಶ್ನೆಗೆ ಉತ್ತರಿಸಿದ ಡಾ.ಅಭಿನವ್‌, ಜಿಲ್ಲೆಯಲ್ಲಿ ಜುಲೈವರೆಗೆ 5 ಬಾಣಂತಿಯರು ಸಾವನ್ನಪ್ಪಿದ್ದು, ಇವರೆಲ್ಲರೂ 21 ರಿಂದ 24 ವಯೋಮಾನದವರಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ 1 ಸಾವಿರ ಜೀವಂತ ಜನನಕ್ಕೆ 13 ಇದೆ. ರಾಜ್ಯದ ಶಿಶು ಪ್ರಮಾಣ ಸರಾಸರಿ ಶೆ.19 ರಷ್ಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯ ಶಿಶು ಪ್ರಮಾಣ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿ.ಟಿ.ವೆಂಕಟೇಶ್ ಸಚಿವರ ಗಮನಕ್ಕೆ ತಂದರು.

*ಅಂಗನವಾಡಿ ಕಟ್ಟಡಕ್ಕೆ ಸಿಎ ನಿವೇಶನ:

ಅಂಗನವಾಡಿ ಕಟ್ಟಡಕ್ಕೆ ಉಚಿತವಾಗಿ ಸಿಎ ನಿವೇಶನ ಹಂಚಿಕೆ ಮಾಡಲು ಸರ್ಕಾರದಿಂದ ತೀರ್ಮಾನಿಸಲಾಗಿದೆ. ಈ ಬಗ್ಗೆ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ ನೀಡಿದರು.

*ಅಧಿಕಾರಿಗಳ ಗೈರಿಗೆ ಆಕ್ರೋಶ

ಅಂಗನವಾಡಿ ಕಟ್ಟಡಗಳ ನಿರ್ಮಾಣ ಪ್ರಗತಿ ಪರಿಶೀಲನೆ ವೇಳೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸಭೆಗೆ ಗೈರಾಗಿ, ಅವರ ಬದಲು ಸಹಾಯಕ ಎಂಜಿನಿಯರ್ ಸಭೆಗೆ ಆಗಮಿಸಿದ್ದನ್ನು ಗಮನಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೀವ್ರ ಆಕ್ರೋಶ್‌ ವ್ಯಕ್ತಪಡಿಸಿದರು.

ಚಳ್ಳಕೆರೆ ಶಾಸಕ ರಘುಮೂರ್ತಿ ಮಾತನಾಡಿ, ವಿಧವೆಯರು ಹಾಗೂ ವಿಕಲಚೇತನ ಮಹಿಳೆಯರಿಗೆ ನೇಮಕದಲ್ಲಿ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಶಾಸಕ ಬಿ.ಜಿ.ಗೋವಿಂದಪ್ಪ, ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಶಾಸಕ ಎಂ.ಚಂದ್ರಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಬಿ.ಎನ್.ಮೈಲಾರಪ್ಪ, ಮಹಿಳಾ ಮತ್ತು ಮಕ್ಕಳ ಇಲಾಖೆ ನಿರ್ದೇಶಕ ಸಿದ್ದೇಶ್ವರ್, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶಕ ರಾಘವೇಂದ್ರ, ಡಿಸಿ ಟಿ.ವೆಂಕಟೇಶ್, ಎಸ್‌ಪಿ ರಂಜಿತ್ ಕುಮಾರ್ ಬಂಡಾರು ಸಭೆಯಲ್ಲಿ ಉಪಸ್ಥಿತರಿದ್ದರು.