ದಾವಣಗೆರೆ ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ವಿಜಯ ನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಧಾರ್ಮಿಕ ಮುಖಂಡರ ಭೇಟಿ, ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ದೀಪಾವಳಿ ಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.

- ದಾವಣಗೆರೆಯಲ್ಲಿ ಸಚಿವರ ನಿವಾಸಕ್ಕೆ ಆತ್ಮೀಯ ಭೇಟಿಯಿತ್ತ ವಿರಕ್ತ ಮಠ ಸ್ವಾಮೀಜಿ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ವಿಜಯ ನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಧಾರ್ಮಿಕ ಮುಖಂಡರ ಭೇಟಿ, ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ದೀಪಾವಳಿ ಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ದಾವಣಗೆರೆಯಲ್ಲಿರುವ ಸಚಿವರ ನಿವಾಸಕ್ಕೆ ವಿರಕ್ತ ಮಠದ ಡಾ. ಬಸವಪ್ರಭು ಸ್ವಾಮೀಜಿಗಳು ಆಗಮಿಸಿ ಆತ್ಮೀಯವಾಗಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರು ಸ್ವಾಮೀಜಿಗಳನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡು ಆಶೀರ್ವಾದ ಪಡೆದರು. ಬಳಿಕ ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿ, ವಿವಿಧ ವಿಷಯಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ ಸಚಿವರು, ಜನರ ಅಹವಾಲು ಹಾಗೂ ಸಮಸ್ಯೆಗಳನ್ನು ಆಲಿಸಿ ಮನವಿಗಳನ್ನು ಸ್ವೀಕರಿಸಿದರು. ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸ್ಥಳೀಯ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಸಮಸ್ಯೆಗಳಿಗೆ ಸ್ಪಂದಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಅರ್ಹ ಮನವಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇನ್ನು ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಆತ್ಮೀಯರ ಅಂಗಡಿಯಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದಲ್ಲಿಯೂ ಸಚಿವರು ಭಾಗವಹಿಸಿದರು. ಈ ಸಂದರ್ಭ ಶ್ರದ್ಧಾಭಕ್ತಿಯಿಂದ ಮಹಾಲಕ್ಷ್ಮೀಗೆ ಪೂಜೆ ಸಲ್ಲಿಸಿ, ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಸೌಭಾಗ್ಯ ಕರುಣಿಸುವಂತೆ ಪ್ರಾರ್ಥಿಸಿದರು.

ಒಟ್ಟಾರೆ, ಧಾರ್ಮಿಕ ಮುಖಂಡರೊಂದಿಗೆ ಸೌಹಾರ್ದಯುತ ಭೇಟಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಹಬ್ಬದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸಚಿವ ಕೆ.ಎಸ್. ಬಸವಂತಪ್ಪ ಅವರು ದೀಪಾವಳಿ ಸಂಭ್ರಮದಲ್ಲಿ ಜನರೊಂದಿಗೆ ಬೆರೆತರು.

- - -

-9ಕೆಡಿವಿಜಿ31: ದಾವಣಗೆರೆಯಲ್ಲಿ ಸಚಿವ ಕೆ.ಎಸ್.ಬಸವಂತಪ್ಪ ಅವರ ನಿವಾಸಕ್ಕೆ ವಿರಕ್ತ ಮಠದ ಡಾ. ಬಸವಪ್ರಭು ಸ್ವಾಮೀಜಿ ಆತ್ಮೀಯ ಭೇಟಿ ನೀಡಿದರು.