ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡ ಬಾಗಲಕೋಟೆ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಾಶಪ್ಪನವರ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಅರ್ಜಿಗಳ ವಿಲೇವಾರಿಯಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ನಿಗದಿತ ಅವಧಿಯೊಳಗೆ ಪರಿಹಾರ ಕಲ್ಪಿಸುವುದು ಅಧಿಕಾರಿಗಳ ಆದ್ಯತೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾಶಪ್ಪನವರ ಸೂಚಿಸಿದರು.ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡ ಬಾಗಲಕೋಟೆ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ, ವಿವಿಧ ಪಿಂಚಣಿ ಸೌಲಭ್ಯಗಳ ಆದೇಶ ಪ್ರತಿಗಳನ್ನು ವಿತರಿಸಿದ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ಈ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ 265 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 52 ಫಲಾನುಭವಿಗಳಿಗೆ ಸ್ಥಳದಲ್ಲಿಯೇ ವಿವಿಧ ಪಿಂಚಣಿ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಲಾಗಿದೆ. ಪಿಂಚಣಿ ಸೌಲಭ್ಯದಲ್ಲಿ ಅಂಗವಿಕಲರ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಹಾಗೂ ರಾಷ್ಟ್ರೀಯ ವೃದ್ಧಾಪ್ಯ ವೇತನ ಸೇರಿವೆ. ಉಳಿದ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಿ, ಅರ್ಜಿದಾರರಿಗೆ ನ್ಯಾಯಯುತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಇಲ್ಲಿಯವರೆಗೆ ಜಿಲ್ಲೆಯಲ್ಲಿ ನಡೆದ ಪ್ರಜಾಸೇವಾ ಆಂದೋಲನಗಳಲ್ಲಿ 6,068 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 5,907 ಅರ್ಜಿಗಳಿಗೆ ನ್ಯಾಯಯುತ ನಿರ್ಣಯ ಕೈಗೊಳ್ಳಲಾಗಿದೆ. ಉಳಿದ ಅರ್ಜಿಗಳಿಗೂ ಶೀಘ್ರವಾಗಿ ನ್ಯಾಯಯುತ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಚಿವರು ಸೂಚಿಸಿದರು. ಅರ್ಜಿ ನಮೂನೆಗಳು ಕೇವಲ ಕಚೇರಿಗಳಲ್ಲಿ ಲಭ್ಯವಿರುವುದಕ್ಕಿಂತ ಜನರ ಮನೆ ಬಾಗಿಲಿಗೆ ತಲುಪುವಂತಾಗಬೇಕು. ಕಚೇರಿಗಳಿಗೆ ಬರಲು ಸಾಧ್ಯವಾಗದ ಸಾಕಷ್ಟು ಜನರಿದ್ದು, ಅವರ ಸಮಸ್ಯೆಗಳನ್ನು ಗುರುತಿಸಿ ಸರ್ಕಾರದ ಸೇವೆಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಹಾಗೂ ಅಹವಾಲು ತಂದಿದ್ದರು. ಅವರ ಅಹವಾಲುಗಳಿಗೆ ಸಚಿವರು ಸ್ಪಂದಿಸುವ ಕೆಲಸ ಮಾಡಿದರು. ಮುಳುಗಡೆ ಸಂತ್ರಸ್ತೆ ರೇಣುಕಾ ಯಲ್ಲಪ್ಪ ಮಲ್ಲರ ಅವರು ಕಳೆದ ಏಳು ವರ್ಷಗಳ ಹಿಂದೆ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಹಕ್ಕುಪತ್ರ ದೊರೆತಿಲ್ಲ ಎಂದು ಸಚಿವರ ಗಮನಕ್ಕೆ ತಂದರು. 2022ರಲ್ಲಿ ತಿಳಿವಳಿಕೆ ಪತ್ರ ನೀಡಿದ್ದರೂ ಹಕ್ಕುಪತ್ರ ನೀಡದಿರುವುದನ್ನು ಗಮನಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಕರೆದು ವಿಳಂಬಕ್ಕೆ ಕಾರಣ ಕೇಳಿ, ಹಕ್ಕುಪತ್ರ ನೀಡುವ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಗಲಕೋಟೆ ಶಾಸಕ ಉಮೇಶ ಮೇಟಿ ಮಾತನಾಡಿ, ಜನರ ಬಳಿಗೆ ಸರ್ಕಾರವನ್ನು ಕೊಂಡೊಯ್ಯುವ ಮಹತ್ವದ ಕಾರ್ಯಕ್ರಮ ಪ್ರಜಾಸೇವಾ ಆಂದೋಲನವಾಗಿದೆ. ಸರ್ಕಾದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಆಂದೋಲನದಲ್ಲಿ ಸಲ್ಲಿಕೆಯಾಗುವ ಪ್ರತಿಯೊಂದು ಅರ್ಜಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಜನಸೇವೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷ ಅನೀಲ ದಡ್ಡಿ, ಬುಡಾದ ಅಧ್ಯಕ್ಷ ಅಬ್ದುಲ್ ರಜಾಕ ಬೇನೂರ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಎಸ್.ಎಂ. ರಾಂಪೂರ, ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಪ್ನಿಲ್ ಅಹಿರೇ, ಅಪರ ಜಿಲ್ಲಾಧಿಕಾರಿ ಮಂಜುನಾಥ ಡೋಂಬರ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಾಲಗಿತ್ತಿ ಸೇರಿ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ವಿವಿಧ ಇಲಾಖೆಯ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ವೀಕ್ಷಣೆ ಮಾಡಲಾಯಿತು.