ಕನ್ನಡಪ್ರಭ ವಾರ್ತೆ ಬೆಳಗಾವಿ 31 ಕೃಷ್ಣಮೃಗಗಳ ಸಾವಿನ ನಂತರ ಮೊದಲ ಬಾರಿಗೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೋಮವಾರ ಭೇಟಿ ನೀಡಿ ವೀಕ್ಷಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
31 ಕೃಷ್ಣಮೃಗಗಳ ಸಾವಿನ ನಂತರ ಮೊದಲ ಬಾರಿಗೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೋಮವಾರ ಭೇಟಿ ನೀಡಿ ವೀಕ್ಷಿಸಿದರು.ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬಂದಿರುವ ಸಚಿವ ಈಶ್ವರ ಖಂಡ್ರೆ ಅವರು ಮೃಗಾಲಯಕ್ಕೆ ಆಗಮಿಸಿ ಕೃಷ್ಣಮೃಗ ವಿಭಾಗವನ್ನು ಪರಿಶೀಲಿಸಿದರು. ಸದ್ಯ ಬದುಕುಳಿದಿರುವ 7 ಕೃಷ್ಣಮೃಗಗಳ ಆರೋಗ್ಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ, 31 ಕೃಷ್ಣಮೃಗಗಳ ಸಾವಿನ ಕುರಿತು ಚರ್ಚಿಸಿದರು. ಇನ್ಮುಂದೆ ಈ ರೀತಿಯ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇನ್ನುಳಿದ ಪ್ರಾಣಿಗಳ ಆರೋಗ್ಯದ ಮೇಲೂ ತೀವ್ರ ನಿಗಾ ವಹಿಸುವಂತೆ ಮೃಗಾಲಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಕೃಷ್ಣಮೃಗಗಳ ಆರೈಕೆ, ಆರೋಗ್ಯ ಸ್ಥಿತಿ, ಆಹಾರ ವ್ಯವಸ್ಥೆ ಮತ್ತು ಸಂರಕ್ಷಣೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಸ್ವಯಂ ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದೇನೆ. ವನ್ಯಜೀವಿ ಸಂರಕ್ಷಣೆ ಬಲಪಡಿಸುವ ದಿಸೆಯಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೃಗಾಲಯಗಳ ಮೂಲಸೌಕರ್ಯವನ್ನು ಮತ್ತಷ್ಟು ಸದೃಢಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.ಈ ವೇಳೆ ಅರಣ್ಯ ಪಡೆ ಮುಖ್ಯಸ್ಥೆ ಡಾ.ಮೀನಾಕ್ಷಿ ನೇಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ) ಪ್ರಭಾಶಚಂದ್ರ ರೇ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ, ಮೃಗಾಲಯದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಸುನೀಲ ಪನ್ವಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ.ಕ್ರಾಂತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೇಹೊಸೂರ ಇದ್ದರು.