ಸಾರಾಂಶ
ಕನ್ನಡಪ್ರಭ ವಾರ್ತೆ ಬಳ್ಳಾರಿ
ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಶೇ. 33ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಸಿದ್ದಾರೆ.ನಗರದ ಜಿಲ್ಲಾಡಳಿತದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬರ ಪರಿಹಾರದ ಹಣ ರೈತರಿಗೆ ಆನ್‍ಲೈನ್ ಮೂಲಕವೇ ತಲುಪಲಿದೆ. ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಜಮೀನಿನ ಒಟ್ಟು ವಿಸ್ತೀರ್ಣ ನಮೂದಿಸಿದರೆ ಮಾತ್ರ ಅವರಿಗೆ ನ್ಯಾಯಯುತ ಪರಿಹಾರ ತಲುಪಲಿದೆ ಎಂದರು.
ಗ್ರಾಮ ಆಡಳಿತ ಅಧಿಕಾರಿಗೆ ಆತನ ಅಧಿಕಾರದ ವ್ಯಾಪ್ತಿಯಲ್ಲಿ ಯಾವ ರೈತನಿಗೆ ಎಲ್ಲಿ, ಎಷ್ಟು ಎಕರೆ ಜಮೀನಿದೆ? ಎಂಬ ಕನಿಷ್ಠ ಮಾಹಿತಿ ಇದ್ದೇ ಇರುತ್ತದೆ. ಅದನ್ನು ಮತ್ತೆ ರೈತನಲ್ಲಿ ಕೇಳಿ ತಂತ್ರಾಂಶದಲ್ಲಿ ನಮೂದಿಸಬೇಕು. ಅಧಿಕಾರಿಗಳು ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ನಮೂದಿಸದಿದ್ದರೆ ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗಲಿದೆ ಎಂದರು.ಮಳೆ ಇಲ್ಲದ ಕಾರಣ ರೈತರು ಬೆಳೆ ಕೈಸೇರದೆ ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ಪರ ನಿಲ್ಲಬೇಕಾಗಿದೆ. ಹೀಗಾಗಿ ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಲು ಮುಂದಿನ ವಾರದ ಒಳಗಾಗಿ ಅಧಿಕಾರಿಗಳು ತ್ವರಿತ ಗತಿಯಲ್ಲಿ ರೈತರ ಜಮೀನಿನ ನಿಖರ ಮಾಹಿತಿಯನ್ನು ನಮೂದಿಸಿ ಎಂದರು.
ಆಧಾರ್ ಲಿಂಕ್ ಮಾಡಲು ಕರೆ:ರಾಜ್ಯದಲ್ಲಿ ಶೇ. 70ರಷ್ಟು ಸಣ್ಣ ರೈತರಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಹಳೆಯ ಅಂಕಿ- ಅಂಶಗಳ ಪ್ರಕಾರ ರಾಜ್ಯದಲ್ಲಿನ ಸಣ್ಣ ರೈತರ ಸಂಖ್ಯೆ ಶೇ. 44ರಷ್ಟು ಮಾತ್ರ. ಇದರಿಂದ ರಾಜ್ಯಕ್ಕೆ ಲಭ್ಯವಾಗುವ ಬರ ಪರಿಹಾರದಲ್ಲೂ ಅನ್ಯಾಯವಾಗುತ್ತಿದೆ. ಹೀಗಾಗಿ ಗ್ರಾಮ ಲೆಕ್ಕಿಗರು ಮುಂದಿನ ದಿನಗಳಲ್ಲಿ ರೈತರ ಪಹಣಿಗಳನ್ನು ಆಧಾರ್ ನಂಬರ್ ಜತೆಗೆ ಲಿಂಕ್ ಮಾಡಿದರೆ ರಾಜ್ಯದ ಸಣ್ಣ ರೈತರ ಅಂಕಿ- ಸಂಖ್ಯೆ ನಿಖರವಾಗಿ ತಿಳಿಯಲಿದೆ. ಇದನ್ನೇ ಕೇಂದ್ರದ ಮುಂದಿಟ್ಟು ರಾಜ್ಯದ ಹಕ್ಕನ್ನು ಮಂಡಿಸಬಹುದು. ಇದಕ್ಕೆ ಸಹಕಾರಿಯಾಗುವಂತೆ ಶೀಘ್ರದಲ್ಲೇ ಆ್ಯಪ್ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
ಕುಡಿಯುವ ನೀರು ಸಮಸ್ಯೆ:ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ, ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಈಗಲೇ ಟೆಂಡರ್ ಮಾಡಿ ಮುಂಜಾಗ್ರತೆ ವಹಿಸಬೇಕು. ಇದೇ ಕಾರಣಕ್ಕೆ ಪ್ರತಿ ತಾಲೂಕಿನಲ್ಲೂ ಶಾಸಕರ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ರಚಿಸಲಾಗುವುದು ಎಂದರು.
ಬಗರ್‌ಹುಕುಂ ಅರ್ಜಿ:ನಮೂನೆ 53ರ ಅಡಿಯಲ್ಲೇ ಸುಮಾರು 25,000 ಅರ್ಜಿಗಳು ಬಾಕಿ ಇವೆ. 1998ರಲ್ಲೇ ನಮೂನೆ 53ರ ಅರ್ಜಿ ಕರೆಯಲಾಗಿತ್ತು. 25 ವರ್ಷವಾದರೂ ಈ ಅರ್ಜಿಗಳು ಇನ್ನೂ ವಿಲೇವಾರಿ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಮೂನೆ 57ರ ಅರ್ಜಿಯೂ ಸೇರಿ ಜಿಲ್ಲೆಯಲ್ಲಿ ಒಟ್ಟಾರೆ 1 ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಮುಂದಿನ ಒಂದು ವರ್ಷದಲ್ಲಿ ಈ ಎಲ್ಲ ಅರ್ಜಿಗಳೂ ವಿಲೇವಾರಿ ಆಗಬೇಕು. ಪ್ರತಿ ವಾರದ ಪ್ರಗತಿಯು ಆ್ಯಪ್‍ನಲ್ಲಿ ಅಪ್‍ಡೇಟ್ ಆಗಬೇಕು. ಇಲ್ಲದಿದ್ದರೆ ತಹಸೀಲ್ದಾರ್‌ಗಳಿಗೆ ನೋಟಿಸ್ ನೀಡಲಾಗುತ್ತದೆ ಎಂದರು.
ಸಭೆಯಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಕಂದಾಯ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಸೇರಿದಂತೆ ಇತರರು ಇದ್ದರು.;Resize=(128,128))
;Resize=(128,128))
;Resize=(128,128))