ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ಪ್ರತಿಯೊಂದು ಜೀವ ಅಮೂಲ್ಯವಾಗಿದ್ದು ಅತಿವೃಷ್ಟಿಯಿಂದ ಯಾವುದೇ ಪ್ರಾಣ ಹಾಗೂ ಆಸ್ತಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಾನಿಯನ್ನು ತಡೆಗಟ್ಟಲು ಅಧಿಕಾರಿಗಳು ಸಜ್ಜಾಗಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಮಳೆಯಿಂದ ಪ್ರಾಣ ಹಾಗೂ ಆಸ್ತಿ ಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಇನ್ನೂ ಹೆಚ್ಚು ಮಳೆಯಾದರೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಗುರುತಿಸಿಕೊಂಡಿರಬೇಕು ಎಂದು ಸೂಚಿಸಿದರು.
ಕಂದಾಯ ಇಲಾಖೆಯು ಮಾತೃ ಇಲಾಖೆಯಾಗಿದ್ದು, ಕಂದಾಯ ಇಲಾಖೆಯಲ್ಲಿ ಹೆಚ್ಚು ಹೆಚ್ಚು ಅರ್ಜಿಗಳು ವಿಲೇವಾರಿ ಆಗಿದ್ದರೂ ಹೆಚ್ಚು ಬಾಕಿ ಇವೆ. ಕಂದಾಯ ಇಲಾಖೆಗೆ ಕಾಲ ಕಾಲಕ್ಕೆ ಬರುವ ಹೊಸ ಹೊಸ ಯೋಜನೆಗಳ ಜಾರಿ ಜವಾಬ್ದಾರಿ ಬರುತ್ತದೆ. ಆದರೂ ಜನರು ಕಂದಾಯ ಇಲಾಖೆಯ ಮೇಲೆ ಹೆಚ್ಚು ಅವಲಂಬಿತರಾಗಿರುತ್ತಾರೆ. ಜನರಿಗೆ ಸಕಾಲದಲ್ಲಿ ಕೆಲಸ ಮಾಡಿ ಅವರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಇಲಾಖೆಯ ಪ್ರಮುಖ ಜವಾಬ್ದಾರಿ ಆಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಈ ಹಿಂದೆ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಿದ್ದರೆ, ಈಗ ಕಾರ್ಯದ ಒತ್ತಡ ಹೆಚ್ಚಾಗುತ್ತಾ ಇರಲಿಲ್ಲ ಎಂದರು.ರಾಜ್ಯದಲ್ಲಿ 24 ಲಕ್ಷ ಮಲ್ಟಿ ಓನರ್ ಆರ್ ಟಿಸಿಗಳು ಇವೆ. ಇದರಲ್ಲಿ 2 ಲಕ್ಷ ಸರ್ಕಾರದ ಸ್ವತ್ತಿನ ಮಲ್ಟಿ ಓನರ್ ಆರ್ ಟಿಸಿ ಗಳು ಇವೆ. ಇವನ್ನೂ ಈ ಹಿಂದೆಯಿಂದಲೂ ಬಗೆಹರಿಸದೆ ಹಾಗೆ ಬಿಟ್ಟುಕೊಂಡು ಬಂದಿದ್ದೇವೆ. 50 ಲಕ್ಷ ಪ್ಲಾಟ್ ಗಳು ಕೃಷಿಯಿಂದ ಬೇರೆ ಉದ್ದೇಶಕ್ಕೆ ಕನ್ವರ್ಟ್ ಆಗಿದೆ. ಆದರೆ ದಾಖಲೆಗಳಲ್ಲಿ ಈಗಲೂ ಕೃಷಿ ಭೂಮಿ ಎಂದು ಇದೆ. ಇದು ಕಾಲ ಕಾಲಕ್ಕೆ ಬದಲಾವಣೆ ಆಗಿದ್ದರೆ ಈಗ ಒತ್ತಡ ಆಗುತ್ತಿರಲಿಲ್ಲ. ಆದ್ದರಿಂದ ಇದು ನಮ್ಮ ಜವಾಬ್ದಾರಿ ಆಗಿದ್ದು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿ ಎಂದು ಅವರು ಸೂಚಿಸಿದರು.
ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತದೆ. ಈಗಾಗಲೇ ಮಳೆಯಿಂದ 20 ಸಾವು ಸಂಬಂಧಿಸಿದೆ. ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿ ಸಾವು ನೋವು ಆಗದಂತೆ ನೋಡಿಕೊಳ್ಳಬೇಕು. ಕಳೆದ ಬಾರಿ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿದ್ದೀರಿ. ಹಾಗೆಯೇ ಈಗ ಹೆಚ್ಚು ಮಳೆಯಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಇನ್ನೂ ಮುಂದೆ ವಿಪತ್ತಿನಿಂದ ಒಂದೇ ಒಂದು ಸಾವು ಆಗದಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.ಲಾಂಡ್ ಬೀಟ್ ಆ್ಯಪ್ ನಲ್ಲಿ ರಾಜ್ಯದಲ್ಲಿ ಇರುವ ಸರ್ಕಾರಿ ಆಸ್ತಿಗಳನ್ನು ಅಪ್ಲೋಡ್ ಮಾಡಬೇಕು. ಜುಲೈ ಅಂತ್ಯದ ಒಳಗೆ ಪ್ರತಿ ಗ್ರಾಮದಲ್ಲಿ ಇರುವ ಸರ್ಕಾರಿ ಆಸ್ತಿಗಳ ಮಾಹಿತಿಯನ್ನು ಪ್ರತಿ ಗ್ರಾಮ ಪಂಚಾಯತ್ ಗಳ ಬೋರ್ಡ್ ಗಳಲ್ಲಿ ಹಾಗೂ ನಮ್ಮ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು. ಸಾರ್ವಜನಿಕರು ಈ ಆಸ್ತಿಗಳ ಪಾರದರ್ಶಕವಾಗಿ ನೋಡುವಂತೆ ಆಗಬೇಕು. ಈಗಾಗಲೇ ಶೇ.65 ರಷ್ಟು ಲ್ಯಾಂಡ್ ಬೀಟ್ ತಪಾಸಣೆ ಆಗಿದೆ. ಉಳಿದ ಶೇ.35 ರಷ್ಟು ತಪಾಸಣೆ ಆಗಬೇಕು ಎಂದು ಅವರು ತಿಳಿಸಿದರು.
ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುವ ಮುನ್ಸೂಚನೆ ಇದೆ. ಜುಲೈ ಹಾಗೂ ಆಗಸ್ಟ್ ಮಾಹೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ. ಈ ಸಂದರ್ಭದಲ್ಲಿ ಕೊಡಗು ಮತ್ತು ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಹಾಗೂ ಭೂ ಕುಸಿತ ಕಂಡುಬರುವ ಸಾಧ್ಯತೆ ಇದೆ. ಈ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಅಗತ್ಯ ನಿರಾಶ್ರಿತ ಕೇಂದ್ರಗಳು ಹಾಗೂ ಗಂಜಿ ಕೇಂದ್ರಗಳನ್ನು ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ, ಮೈಸೂರು ವಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿಗಳು, ಸರ್ವೆ ಇಲಾಖೆಯ ಉಪ ನಿರ್ದೇಶಕರು ಹಾಗೂ ತಹಸೀಲ್ದಾರ್ ಗಳು ಇದ್ದರು.
----ಕೋಟ್...
ಸರ್ಕಾರದ ವಿವಿಧ ಉದ್ದೇಶಗಳಿಗೆ ಕಾಯ್ದಿರಿಸಿರುವ ಭೂಮಿಯನ್ನು ಗುರುತಿಸಿ ಸಂರಕ್ಷಣೆ ಮಾಡಬೇಕು. ಕಂದಾಯ ಇಲಾಖೆಗಳ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಜಿಲ್ಲಾಧಿಕಾರಿಗಳ ಹಾಗೂ ತಹಸೀಲ್ದಾರ್ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು. ಈ ನ್ಯಾಯಾಲಯದಲ್ಲಿ ತೀರ್ಪು ನೀಡುವಾಗ ಯಾವ ಕಾಯ್ದೆಯಡಿ ತೀರ್ಪು ನೀಡಲಾಗಿದೆ ಎಂದು ಸ್ಪಷ್ಟವಾಗಿ ನಮೂದಿಸಬೇಕು. ವಿಲೇವಾರಿ ಅದ ಪ್ರಕರಣಗಳ ಕುರಿತು ಕಂದಾಯ ಇಲಾಖೆಯ ಸಾಫ್ಟವೇರ್ ನಲ್ಲಿ ಅಪ್ಲೋಡ್ ಮಾಡಬೇಕು.- ರಾಜೇಂದ್ರಕುಮಾರ್ ಕಟಾರಿಯಾ, ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ