ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಶಿರಾ ತಾಲೂಕಿನ ಚಿಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ದಿಢೀರ್ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಶಿರಾ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಶಿರಾ ತಾಲೂಕಿನ ಚಿಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ದಿಢೀರ್ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಈ ವೇಳೆ ಸಚಿವರು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಹಾಜರಾತಿ ಪರಿಶೀಲಿಸಿದರು. ಕರ್ತವ್ಯ ಮತ್ತು ನಿರಂತರ ಎಂಬ ಅಪ್ಲಿಕೇಶನ್ ನಲ್ಲಿ ಹಾಜರಾತಿ ದಾಖಲಿಸುವ ಪ್ರಕ್ರಿಯೆ ಹೇಗೆ ಸಾಗಿದೆ ಎಂದು ಮಾಹಿತಿ ಪಡೆದರು. ಬಳಿಕ ವಿವಿಧ ತರಗತಿ ಕೊಠಡಿಗಳಿಗೆ ತೆರಳಿ ಮಕ್ಕಳೊಂದಿಗೆ ಸಂವಾದ ನಡೆಸಿ, ಕಲಿಕೆಯ ಗುಣಮಟ್ಟ, ಶಾಲೆಯಲ್ಲಿ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ವಿದ್ಯಾರ್ಥಿಗಳೊಂದಿಗೆ ಕುಳಿತು ಮಧ್ಯಾಹ್ನದ ಬಿಸಿಯೂಟ ಸವಿದ ಸಚಿವರು, ಊಟದ ಗುಣಮಟ್ಟದ ಬಗ್ಗೆ ಮಕ್ಕಳ ಅಭಿಪ್ರಾಯ ಕೇಳಿದರು. ಅಡುಗೆ ಸಿಬ್ಬಂದಿಯ ಕಾರ್ಯವೈಖರಿಯನ್ನು ಮೆಚ್ಚಿದ ಅವರು, ಊಟದ ರುಚಿ ಮತ್ತು ಗುಣಮಟ್ಟ ಉತ್ತಮವಾಗಿದೆ ಎಂದು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಎಲ್ಲಾ ಕೆಪಿಎಸ್ ಶಾಲೆಗಳಿಗೆ ಬಸ್ ಸೌಕರ್ಯ ಒದಗಿಸಲು ನಾವು ಈಗಾಗಲೇ ತೀರ್ಮಾನಿಸಿದ್ದೇವೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದ ಜೂನ್ ತಿಂಗಳಿನಿಂದ ಬಸ್ ವ್ಯವಸ್ಥೆ ಆರಂಭಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಿಸುವಂತೆ ಮನವಿ ಸಲ್ಲಿಸಿದರು. ಈ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಕುಮಾರ್ ಸೇರಿದಂತೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.