ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಆಪ್ತರೊಬ್ಬರು ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರ ಕಚೇರಿಗೆ ತೆರಳಿ 25 ಲಕ್ಷ ಲಂಚ ಕೇಳಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಆರೋಪಿಸಿರುವ ಹಿನ್ನೆಲೆಯಲ್ಲಿ, ಸಚಿವರ ಪಾತ್ರದ ಬಗ್ಗೆಯೂ ತನಿಖೆ ನಡೆಯಬೇಕು. ಈ ಕಾರಣಕ್ಕೆ ಮಧು ಬಂಗಾರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಆಪ್ತರೊಬ್ಬರು ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರ ಕಚೇರಿಗೆ ತೆರಳಿ 25 ಲಕ್ಷ ಲಂಚ ಕೇಳಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಆರೋಪಿಸಿರುವ ಹಿನ್ನೆಲೆಯಲ್ಲಿ, ಸಚಿವರ ಪಾತ್ರದ ಬಗ್ಗೆಯೂ ತನಿಖೆ ನಡೆಯಬೇಕು. ಈ ಕಾರಣಕ್ಕೆ ಮಧು ಬಂಗಾರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಚಿವರ ಆಪ್ತರೊಬ್ಬರು ಅಧಿಕಾರಿಗೆ ಲಂಚ ಕೇಳಿದ್ದಾರೆ ಎಂಬುದು ಆರೋಪ ಗಂಭೀರ ವಿಚಾರ. ಇದರ ಹಿಂದೆ ಸಚಿವರ ಪಾತ್ರವಿದೆಯೇ ಎಂಬುದನ್ನು ತನಿಖೆಯಿಂದ ಸ್ಪಷ್ಟಪಡಿಸಬೇಕು. ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದರು.
2022ರ ನವೆಂಬರ್ 28ರಂದು ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿ ಮಧು ಬಂಗಾರಪ್ಪ ಅವರು ಜನಾಕ್ರೋಶ ಪಾದಯಾತ್ರೆ ನಡೆಸಿದ್ದರು. ಶರಾವತಿ ಸಂತ್ರಸ್ತರ ಸಮಸ್ಯೆ, ಬಗರ್‌ಹುಕುಂ ಸಾಗುವಳಿ ಸೇರಿದಂತೆ ಹಲವು ವಿಚಾರಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಜನರು ಅವರನ್ನು ಗೆಲ್ಲಿಸಿ ಕಳುಹಿಸಿದರು. ಬಳಿಕ ಅವರು ಸಚಿವರಾದರು ಎಂದರು.ಸಚಿವರಾದ ಬಳಿಕ ಜಿಲ್ಲೆಗೆ ಆಡಳಿತ ಭವನ ನಿರ್ಮಿಸುವುದಾಗಿ ಹೇಳಿದ್ದರು. ಮೂರು ಬಜೆಟ್‌ಗಳು ಕಳೆದರೂ ಇದಕ್ಕೆ ಅನುದಾನ ಬಿಡುಗಡೆಯಾಗಿಲ್ಲ. ಜಿಲ್ಲೆಯ ಯಾವುದೇ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿಸುವಲ್ಲಿಯೂ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಅತಿವೃಷ್ಟಿಯಿಂದ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಲಕ್ಷಾಂತರ ರುಪಾಯಿ ಮೌಲ್ಯದ ಅಡಿಕೆ ಹಾಗೂ ತೆಂಗಿನ ಮರಗಳು ನೆಲಕ್ಕುರುಳಿವೆ. ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದರು.ಪ್ರಮುಖರಾದ ನರಸಿಂಹ ಗಂಧದ ಮನೆ, ದೀಪಕ್ ಸಿಂಗ್, ಮಂಜುನಾಥ, ನಾಗೇಶ್, ಸಂಗಯ್ಯ, ಸುನೀಲ್, ರಘು, ವೆಂಕಟೇಶ್ ಇದ್ದರು.
ಬಿಪಿಎಲ್ ಕಾರ್ಡ್‌ದಾರರಿಂದಲೂ 25 ರು. ಸಾವಿರ ವಸೂಲಿಶಿವಮೊಗ್ಗ: ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಆರೋಪಗಳ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಪರಿಶೀಲನೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಆಗ್ರಹಿಸಿದರು.ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಂದಲೂ ಆಂಜಿಯೋಗ್ರಾಂ ಚಿಕಿತ್ಸೆಗೆ 25 ಸಾವಿರ ರು. ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಆರೋಗ್ಯ ಇಲಾಖೆ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ಜನರು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿನ ಸಮಸ್ಯೆಗಳಿಗೂ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಹೇಳಿದರು.