ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ

| Published : Oct 17 2023, 12:45 AM IST

ಸಾರಾಂಶ

ಬರ ಪರಿಸ್ಥಿತಿ ಪರಿಶೀಲನೆ ಸಭೆಯಲ್ಲಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ
ಕನ್ನಡಪ್ರಭ ವಾರ್ತೆ ವಿಜಯಪುರ ಜನರ ಆಶೋತ್ತರಗಳಿಗೆ ಹಾಗೂ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯೋನ್ಮುಖರಾಗಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ ಕುರಿತು ಸೋಮವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 12 ತಾಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ತಿಕೋಟಾ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂಬರುವ ದಿನಗಳಲ್ಲಿ ಬರ ಘೋಷಣೆಯಾಗಲಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಡಿಸೆಂಬರ್ 15ರಿಂದ ಜೂನ್ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಬಹುದಾಗಿರುವುದರಿಂದ ಈಗಿನಿಂದಲೇ ಕುಡಿಯುವ ನೀರಿಗಾಗಿ ಸೂಕ್ತ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡು, ಆದ್ಯತೆ ನೀಡಿ, ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಒಟ್ಟು ಮೂರು ಗ್ರಾಮಗಳಿಗೆ ಪ್ರತಿ ದಿನ 5 ಟ್ಯಾಂಕರ್ 6 ಟ್ರಿಪ್‌ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಖಾಸಗಿ ಬೋರವೆಲ್ ಗುರುತಿಸಬೇಕು. ಅವಶ್ಯಕತೆ ಬಿದ್ದರೆ ಬೋರ್ ವೆಲ್ ಕೊರೆಸಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದರೆ ಟಾಸ್ಕಪೋರ್ಸ್ ಮೂಲಕ ತೀರ್ಮಾನಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಡಿಸೆಂಬರ್ 10ರ ವರೆಗೆ ಯಾವುದೇ ಮೇವಿನ ಕೊರತೆ ಇಲ್ಲ. ಮೇವಿನ ಕೊರತೆಯಾಗದಂತೆ ಹಾಗೂ ಜಾನುವಾರಗಳಿಗೆ ಲಸಿಕೆ ನೀಡಲು ಸಾಕಷ್ಟು ದಾಸ್ತಾನು ಇಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕೆಲಸ ಕೇಳುವ ಪ್ರತಿಯೊಬ್ಬರಿಗೂ ಉದ್ಯೋಗ ನೀಡಬೇಕು. ಹೆಚ್ಚೆಚ್ಚು ಮಾನವ ದಿನಗಳನ್ನು ಸೃಜಿಸಬೇಕು. ನರೇಗಾದಡಿ ಉದ್ಯೋಗ ನೀಡಲು ನಿರಾಕರಿಸಬಾರದು. ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬರ ಪರಿಸ್ಥಿತಿಯ ಕುರಿತು ಪ್ರತಿ 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹೆಚ್ಚುವರಿ ಅವಧಿಗೆ ಕಾರ್ಯ ನಿರ್ವಹಿಸಬೇಕು ಆಗಾಗ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕು ಮತ್ತು ಸಮಸ್ಯೆಗೆ ಪರಿಹಾರ ಒದಗಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯವಹಿಸದೇ ಗಂಭೀರವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿಜಯಪುರ ನಗರದಲ್ಲಿ ಎಲ್ಲ ವಾರ್ಡ್‌ಗಳಲ್ಲಿಯೂ ಸಮರ್ಪಕವಾಗಿ ನೀರು ಪೂರೈಕೆಯಾಗಬೇಕು. ನಗರದಲ್ಲಿರುವ ಐತಿಹಾಸಿಕ ಬಾವಿಗಳಲ್ಲಿರುವ ನೀರನ್ನು ಬಳಸಿಕೊಳ್ಳುವುದರಿಂದ ಶೇ.80ರಷ್ಟು ನೀರಿನ ಅಭಾವ ಕಡಿಮೆಯಾಗುತ್ತದೆ. ಈ ಬಗ್ಗೆ ಪ್ರತ್ಯೇಕವಾಗಿ ಸಭೆ ನಡೆಸಲಾಗುವುದು ಎಂದು ಹೇಳಿದರು. ಬೊಮ್ಮಣಜೋಗಿ, ಪುರದಾಳ ಕೆರೆಗೆ ನೀರು ಒದಗಿಸುವ ಮೂಲಕ ಅನುಕೂಲ ಕಲ್ಪಿಸಿಕೊಡಬೆಕೆಂದು ದೇವರ ಹಿಪ್ಪರಗಿ ಶಾಸಕ ರಾಜು ಪಾಟೀಲ ಮಾತಿಗೆ ಸ್ಪಂದಿಸಿದ ಸಚಿವರು, ಕೊನೆಯ ಹಂತದ ವರೆಗೆ ನೀರು ಹರಿಸಲು ಕ್ರಮ ವಹಿಸಬೇಕು ಹಾಗೂ ಕಾಲುವೆ ನೀರು ಪೋಲಾಗದಂತೆ ನೋಡಿಕೊಳ್ಳಲು ನಿರಂತರ ನಿಗಾ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯುತ್, ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಬಿತ್ತನೆ ಹಾಗೂ ಬೆಳೆ ಹಾನಿ ವಿವರ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿರುವ ನೀರಿನ ಸಂಗ್ರಹ ಹಿಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬೇಡಿಕೆ, ನರೇಗಾ ಯೋಜನೆ, ಉದ್ಯೋಗ ನೀಡುವ ಕುರಿತಾಗಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸಭೆಯಲ್ಲಿ ನಾಗಠಾಣ ಶಾಸಕ ವಿಠಲ ಕಟಕದೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.