ಸಾರಾಂಶ
ವಿಜಯಪುರ: ಜಿಲ್ಲಾದ್ಯಂತ ಸೋಮವಾರ ರಾತ್ರಿಯಿಡೀ ಸುರಿದ ಧಾರಕಾರ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ. ಎಲ್ಲ ತಾಲೂಕುಗಳ ತಹಸೀಲ್ದಾರರಿಂದ ಮಳೆಯ ಪ್ರಮಾಣ ಮತ್ತು ಅದರಿಂದ ಉಂಟಾಗಿರುವ ಆಸ್ತಿ- ಪಾಸ್ತಿ ಹಾನಿಯ ಕುರಿತು ಕೂಡಲೇ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ವಿಜಯಪುರ ನಗರ ಮತ್ತು ಜಿಲ್ಲಾದ್ಯಂತ ಮಳೆಯಿಂದ ಸಮಸ್ಯೆ ಎದುರಾಗಿರುವ ಸ್ಥಳಗಳಿಗೆ ಖುದ್ದಾಗಿ ತೆರಳಿ ಪರಿಶೀಲನೆ ನಡೆಸಬೇಕು. ಮಳೆ ನೀರಿನಿಂದ ಸಂತ್ರಸ್ತರಾದ ಜನರ ನೆರವಿಗೆ ಧಾವಿಸುವಂತೆ ಹೇಳಿದ್ದೇನೆ. ಬೆಳೆಹಾನಿ, ಆಸ್ತಿಪಾಸ್ತಿ ನಷ್ಟದ ಕುರಿತು ಕಂದಾಯ, ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೇ, ಅಗತ್ಯ ತುರ್ತು ಕ್ರಮ ಸೇರಿದಂತೆ ಸಕಲ ರೀತಿಯಿಂದ ಕ್ರಮ ಕೈಗೊಂಡು ಸ್ಪಂದಿಸುವಂತೆ ಸೂಚನೆ ನೀಡಿದ್ದೇನೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ಸಂತ್ರಸ್ತರಾದವರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಸದಾ ತಮ್ಮ ಹಿತಕಾಯಲು ಬದ್ಧವಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.