ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜನರ ಆಶಯಗಳಿಗೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಸರ್ಕಾರದಿಂದ ಮಂಜೂರಾಗುವ ವಿವಿಧ ಅನುದಾನ ಹಾಗೂ ಸೌಲಭ್ಯಗಳನ್ನು ಅರ್ಹ ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ.

ಚಾಮರಾಜನಗರ: ಗ್ರಾಮೀಣ ರಸ್ತೆಗಳು ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿವೆ. ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವ ಮೂಲಕ ಈ ಭಾಗದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ತಾಲೂಕಿನ ಹರದನಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದ ನಾಯಕರ ಬಡಾವಣೆಯಲ್ಲಿ ಟಿ.ಎಸ್.ಪಿ. ಯೋಜನೆಯಡಿ 50 ಲಕ್ಷ ರು. ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ, ಬಳಿಕ ನಿಜಲಿಂಗನಪುರ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ 20 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಉಪ್ಪಾರ ಸಮುದಾಯ ಭವನದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜನರ ಆಶಯಗಳಿಗೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಸರ್ಕಾರದಿಂದ ಮಂಜೂರಾಗುವ ವಿವಿಧ ಅನುದಾನ ಹಾಗೂ ಸೌಲಭ್ಯಗಳನ್ನು ಅರ್ಹ ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕೆ.ಆರ್.ಐ.ಡಿ.ಎಲ್ ಎಂಜಿನಿಯರ್ ಅರುಣ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಚ್.ಎಂ. ಮಹದೇವಶೆಟ್ಟಿ, ಮಾಜಿ ಅಧ್ಯಕ್ಷರಾದ ವೆಂಕಟೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಂಜುನಾಥ್, ಸದಸ್ಯರಾದ ಕಲೀಂ, ಗಡಿ ಯಜಮಾನರಾದ ಜಯಸ್ವಾಮಿ, ಯಜಮಾನ್ ನಟರಾಜು, ಮುಖಂಡರಾದ ರಂಗಸ್ವಾಮಿನಾಯಕ, ರಾಮಚಂದ್ರ, ಬಸವಣ್ಣ, ಲಿಂಗರಾಜು, ಶಿವಣ್ಣ, ಪ್ರಜ್ವಲ್ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.