ಗದಗ: ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆ ಸಚಿವ ಬಸವರಾಜ ರಾಯರಡ್ಡಿ ಅವರು ಸತತ 2ನೇ ದಿನವೂ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿಯನ್ನು ಅವಲೋಕಿಸಿ, ರೈತರಿಂದಲೇ ನೇರವಾಗಿ ಮಾಹಿತಿ ಪಡೆದರು.

ಶನಿವಾರ ಬೆಳಗ್ಗೆ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳ ಬರ ಪರಿಸ್ಥಿತಿ ಕುರಿತು ಶಿರಹಟ್ಟಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಎರಡೂ ತಾಲೂಕುಗಳಲ್ಲಿನ ಮಳೆ ಪ್ರಮಾಣ, ಬಿತ್ತನೆ, ಬೆಳೆಗಳ ಸ್ಥಿತಿ, ಬೆಳೆ ಹಾನಿ ಹಾಗೂ ರೈತರಿಗೆ ಎದುರಾಗಿರುವ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದರು.

ಮಧ್ಯಾಹ್ನದ ನಂತರ ಜಿಲ್ಲೆಯ ರೋಣ ಮತ್ತು ಗಜೇಂದ್ರಗಡ ತಾಲೂಕು ವ್ಯಾಪ್ತಿಯಲ್ಲಿಯೂ ಬರ ಪರಿಶೀಲನೆ ನಡೆಸಿ, ಅಲ್ಲಿಯೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ರೈತರೊಂದಿಗೆ ಸಂವಾದ ನಡೆಸಿದ ಸಚಿವರು, ಪ್ರಸಕ್ತ ಬರ ಪರಿಸ್ಥಿತಿ, ಬೆಳೆ ಹಾನಿ, ಮಳೆಯ ಪ್ರಮಾಣ ಹಾಗೂ ಕೃಷಿ ಚಟುವಟಿಕೆಗಳ ಕುರಿತು ರೈತರಿಂದ ನೇರವಾಗಿ ಮಾಹಿತಿ ಪಡೆದುಕೊಂಡರು. ರೈತರು ತಮ್ಮ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಬಸವರಾಜ ರಾಯರಡ್ಡಿ ಅವರು, ಸರ್ಕಾರ ರೈತರೊಂದಿಗೆ ಇದೆ. ಬರ ಪರಿಸ್ಥಿತಿಯಿಂದ ರೈತರಿಗೆ ತೊಂದರೆಯಾಗದಂತೆ ಸರ್ಕಾರದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಸ್ಥಳೀಯವಾಗಿ ಪರಿಶೀಲಿಸಿ ವಾಸ್ತವಿಕ ವರದಿ ಸಲ್ಲಿಸುವಂತೆ ಸೂಚಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಎಸಿ ಗಂಗಪ್ಪ ಎಂ., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಜಂಟಿ ನಿರ್ದೇಶಕ ಚಿದಾನಂದ, ಶಿರಹಟ್ಟಿ ತಹಸೀಲ್ದಾರ್ ರಾಘವೇಂದ್ರ, ಲಕ್ಷ್ಮೇಶ್ವರ ತಹಸೀಲ್ದಾರ್ ಧನಂಜಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.