ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವ್ಯಾಪ್ತಿಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ, ಕುಡಿಯುವ ನೀರು ಹಾಗೂ ಮುಂಗಾರು ಪೂರ್ವಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯೊಂದಿಗೆ ಓವರ್ ಹೆಡ್ ಟ್ಯಾಂಕ್‌ನ ನೀರಿನ್ನು ಪರೀಕ್ಷೆಗೆ ಒಳಪಡಿಸಿ ನೀರು ಪೂರೈಕೆಗೆ ವಿಶೇಷ ಗಮನ ನೀಡುವಂತೆ ಸೂಚಿಸಿದರು.
ಜಿಲ್ಲೆಯ ಜನರಿಗೆ ಬೇಸಿಗೆಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ನೀರು ಸರಬರಾಜು ನಿರ್ವಹಣೆ ಮಾಡಿದ್ದು, ವಿವಿಧ 54 ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ ಮಾಲಿಕರಿಂದ ಪಡೆದ ನೀರಿಗೆ ಸಂಬಂಧಪಟ್ಟಂತೆ ವಿಳಂಬತೋರದೆ ತಕ್ಷಣ ಬಿಲ್ ಪಾವತಿಸಿಬೇಕೆಂದು ಸಚಿವರು ತಿಳಿಸಿದರು.-ಕಳಪೆ ಬಿತ್ತನೆ ಬೀಜ, ರಸಗೊಬ್ಬರದ ಬಗ್ಗೆ ಎಚ್ಚರ:
ಮುಂಗಾರಿನಲ್ಲಿ ರೈತರಿಗೆ ಯಾವುದೆ ತೊಂದರೆ ಆಗದಂತೆ ವಿಶೇಷವಾಗಿ ಕಳಪೆ ಗುಣಮಟ್ಟದ ಬೀಜ, ರಸಗೊಬ್ಬರ ಸರಬರಾಜಿನ ಜೊತೆಗೆ ಗಡಿ ಭಾಗಗಳಲ್ಲಿ ಕಳಪೆ ಬೀಜ, ರಸಗೊಬ್ಬರ ಆಮದು ಆಗದಂತೆ ಮುನ್ನೆಚ್ಚರಿಕೆ ವಹಿಸಿಬೇಕು. ಮುಂದಿನ ದಿನಗಳಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಉಂಟಾಗದಂತೆ ದಾಸ್ತಾನು ಇಟ್ಟುಕೊಳ್ಳಬೇಕೆಂದು ತಿಳಿಸಿದ ಅವರು ಕೃಷಿ ಅಧಿಕಾರಗಳು ಕ್ಷೇತ್ರವಾರು ಭೇಟಿ ನೀಡುವುದರ ಮೂಲಕ ಕಳಪೆ ಬೀಜ, ರಸಗೊಬ್ಬರ ಪೂರೈಕೆಯಾಗದಂತೆ ನಿಗವಹಿಸಬೇಕು. ಒಂದು ವೇಳೆ ತಪ್ಪಿತಸ್ಥರು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ತಿಳಿಸಿದರು.-ಮೃತರಿಗೆ ಪರಿಹಾರ
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ನೀಡಲಾಗಿದೆ. ಜಾನುವಾರುಗಳ ಹಾನಿಗೆ ಸಂಬಂಧಪಟ್ಟಂತೆ ಪರಿಹಾರ ವಿತರಿಸಲಾಗಿದೆ. ಅಲ್ಲದೆ ಮೆ26 ರಂದು ಸುರಿದ ಮಳೆಗೆ ಗುರುಮಠಕಲ್‌ನ ಬಾಲಕಿ ಹಾಗೂ ಹುಣಸಗಿ ಯುಕೆಪಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಅವರಿಗೂ ಸಹ ಪರಿಹಾರ ವಿತರಿಸಲು ಸೂಚಿಸಲಾಗಿದೆ ಎಂದು ಸಚಿವ ದರ್ಶನಾಪುರ ತಿಳಿಸಿದರು. ಸುರಿದ ಮಳೆಗೆ ಜಿಲ್ಲೆಯಲ್ಲಿ ಹಲವು ಮನೆಗಳು ಹಾನಿಯಾಗಿದ್ದು, ಬೆಳೆ ಸಂಪೂರ್ಣವಾಗಿ ನೆಲಕಚ್ಚಿದ್ದು ಅಲ್ಲದೆ ವಿದ್ಯುತ್ ಸರಬರಾಜು ಹಾನಿ ಕುರಿತು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಲ್ಲಾ ಪಂಚಾಯತ ಸಿಇಒ ಗರೀಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾಗ್ರತೆಯಿಂದ ಕಾರ್ಯನಿರ್ವಹಿಸಿ: ದರ್ಶನಾಪುರಯಾದಗಿರಿ: ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಅನುದಾನ ಅನುಮೋದನೆ, ಖರ್ಚು ವೆಚ್ಚಗಳ ಮತ್ತು ಪ್ರಗತಿಯನ್ನು ತೀವ್ರಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಸಚಿವ ದರ್ಶನಾಪುರ, ವಿದ್ಯುತ್ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಇನ್ನೂ ಹೆಚ್ಚಿನ ಜಾಗೃಕತೆಯಿಂದ ಕಾರ್ಯನಿರ್ಹಿಸುವಂತೆ ಸೂಚಿಸಿದರು. ಜಲಜೀವನ ಮಿಷನ್, ಜಲಧಾರೆ, ವಿವಿಧ ಜಲಾಶಯಗಳ ಇನ್ ಫ್ಲೋ, ಔಟ್ ಫ್ಲೋ ಬಗ್ಗೆ ತೀವ್ರ ನಿಗಾ ಇಡುವಂತೆ ಸೂಚಿಸಿದರು. ಅಲ್ಲದೆ ಜಿಲ್ಲೆಯಲ್ಲಿನ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಶಿಕ್ಷಕರ, ಪಾಲಕರ ಆಸಕ್ತಿ ಅತ್ಯಂತ ಪ್ರಮುಖವಾಗಿದೆ ಎಂದು ಅವರು ಹೇಳಿದರು.