ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವುದರ ಜೊತೆಗೆ ಸಾರ್ವಜನಿಕರಿಗೆ ದೀರ್ಘಕಾಲ ಉಪಯೋಗವಾಗುವ ರೀತಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು ಎಂದು ಸಚಿವರು ಸೂಚಿಸಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುತ್ತಿದ್ದು, ಕಸಬಾ ಹೋಬಳಿಯ ಹಬ್ಬನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಲವತ್ತಹಳ್ಳಿ ಹಾಗೂ ಜಾಡಘಟ್ಟ ಪ್ರದೇಶಗಳಲ್ಲಿ ಸುಮಾರು ₹100 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಗುದ್ದಲಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಗ್ರಾಮೀಣ ಭಾಗದ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣ, ಸಿಮೆಂಟ್ ರಸ್ತೆ ಹಾಗೂ ಡಾಂಬರೀಕರಣ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಗಳು ಪೂರ್ಣಗೊಂಡ ಬಳಿಕ ಗ್ರಾಮಗಳ ನಡುವಿನ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಎಂ. ಶಿವಲಿಂಗೇಗೌಡರು, ಕ್ಷೇತ್ರದ ಜನರು ಸತತ ನಾಲ್ಕು ಬಾರಿ ತಮ್ಮನ್ನು ಶಾಸಕರಾಗಿ ಆಯ್ಕೆ ಮಾಡುವ ಮೂಲಕ ಅಪಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೀಗ ತಮ್ಮ ಆಶೀರ್ವಾದದಿಂದ ಸಚಿವ ಸ್ಥಾನ ದೊರೆತಿದ್ದು, ಕ್ಷೇತ್ರದ ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದರು.ಬೆಲವತ್ತಹಳ್ಳಿ ಗ್ರಾಮದ ಜನರು ಪ್ರತಿಯೊಂದು ಚುನಾವಣೆಯಲ್ಲಿಯೂ ಹೆಚ್ಚಿನ ಮತಗಳನ್ನು ನೀಡಿ ತಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ಜನರು ನೀಡಿರುವ ಈ ಪ್ರೀತಿ, ವಿಶ್ವಾಸ ಹಾಗೂ ಬೆಂಬಲಕ್ಕೆ ಅಭಿವೃದ್ಧಿ ಕಾರ್ಯಗಳ ಮೂಲಕ ಪ್ರತಿಫಲ ನೀಡುವುದು ತಮ್ಮ ಕರ್ತವ್ಯವಾಗಿದೆ. ಕ್ಷೇತ್ರದ ಯಾವುದೇ ಗ್ರಾಮ ಅಭಿವೃದ್ಧಿಯಿಂದ ಹಿಂದೆ ಉಳಿಯದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದರು.
ರಸ್ತೆ ಹಾಗೂ ಸೇತುವೆ ನಿರ್ಮಾಣದಂತಹ ಮೂಲಭೂತ ಸೌಕರ್ಯಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿವೆ. ಉತ್ತಮ ರಸ್ತೆ ಸಂಪರ್ಕದಿಂದ ಕೃಷಿ ಉತ್ಪನ್ನಗಳ ಸಾಗಣೆ, ವಿದ್ಯಾರ್ಥಿಗಳ ಸಂಚಾರ, ಸಾರ್ವಜನಿಕರ ದಿನನಿತ್ಯದ ಓಡಾಟ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆ ಗುಣಮಟ್ಟದ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುವುದು. ಕ್ಷೇತ್ರದ ಅಗತ್ಯತೆಗಳನ್ನು ಸರ್ಕಾರದ ಗಮನಕ್ಕೆ ತಂದು ಹೆಚ್ಚಿನ ಅನುದಾನವನ್ನು ಪಡೆದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಪ್ರಯತ್ನ ಮುಂದುವರಿಯಲಿದೆ. ಹಾಸನ ಜಿಲ್ಲೆಯನ್ನು ಅಭಿವೃದ್ಧಿಯಲ್ಲಿ ಮಾದರಿ ಜಿಲ್ಲೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ತಮ್ಮ ಶಕ್ತಿಮೀರಿ ಶ್ರಮಿಸುವುದಾಗಿ ಸಚಿವರು ಭರವಸೆ ನೀಡಿದರು.
ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವುದರ ಜೊತೆಗೆ ಸಾರ್ವಜನಿಕರಿಗೆ ದೀರ್ಘಕಾಲ ಉಪಯೋಗವಾಗುವ ರೀತಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು ಎಂದು ಸಚಿವರು ಸೂಚಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿಳಿಚೌಡಯ್ಯ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮಗಳ ಮುಖಂಡರು ಹಾಗೂ ಗ್ರಾಮಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.