ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡದ ಮೊಟ್ಟ ಮೊದಲ ಶಾಸನ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಿದರು.ಕರ್ನಾಟಕ ಸಂಭ್ರಮ-೫೦ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿ ನವ್ಹೆಂಬರ್-೨೦೨೩ ರಿಂದ ಇಲ್ಲಿಯವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಕನ್ನಡದ ಮೊದಲ ಶಾಸನವೆಂದು ಪರಿಗಣಿಸಲ್ಪಟ್ಟಿರುವ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಲಾಗಿದೆ. ಅದರಂತೆ ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅಳವಡಿಸಲಾಗಿದೆ ಎಂದು ಅವರು ಹೇಳಿದರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಮುಂತಾದವರು ಇದ್ದರು.