ಸಾರಾಂಶ
ಚಿತ್ರದುರ್ಗ: ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಯನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕಾದ ತುರ್ತು ಅನಿವಾರ್ಯತೆ ಎದುರಾಗಿದೆ ಎಂದು ಸಚಿವ ಜಮೀರ್ ಅಹಮದ್ ಹೇಳಿದರು.
ಲೋಕಸಭೆ ಚುನಾವಣೆ ಹಿನ್ನಲೆ ಚಿತ್ರದುರ್ಗದಲ್ಲಿ ಆಯೋಜಿಸಲಾದ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಅತ್ಯಧಿಕ ಬಹುಮತಗಳಿಂದ ಕಾಂಗ್ರೆಸ್ ಗೆಲ್ಲಬೇಕಾಗಿರುವುದರಿಂದ ಮುಸ್ಲಿಂರ ಒಂದೊಂದು ಮತಕ್ಕೂ ಪ್ರಾಮುಖ್ಯತೆಯಿದೆ ಎಂದು ಹೇಳಿದರು.ಚುನಾವಣೆಯಲ್ಲಿ ಮತ ನೀಡಿದರೆ ನನಗೇನು ಲಾಭ ಎಂದು ಭಾವಿಸಿ ಮನೆಯಲ್ಲಿ ಸುಮ್ಮನೆ ಕೂರಬೇಡಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಸಲ್ಮಾನರಿಗೆ ಏನೆಲ್ಲಾ ತೊಂದರೆ ಕೊಟ್ಟಿದೆ ಎನ್ನುವುದು ಗೊತ್ತಿದೆ. ಹಿಜಾಬ್, ಜಟ್ಕ್ ಕಟ್, ಹಲಾಲ್ ಕಟ್ ಹೀಗೆ ಒಂದಲ್ಲ ಒಂದು ರೀತಿಯ ಕ್ಯಾತೆ ತೆಗೆದು ಹಿಂದು-ಮುಸಲ್ಮಾನರ ನಡುವಿನ ಭಾವೈಕ್ಯತೆಯನ್ನು ಹಾಳು ಮಾಡುವ ಕುತಂತ್ರ ನಡೆಸಿತು. 1994ರಲ್ಲಿ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದಾಗ ಮುಸಲ್ಮಾನರಿಗೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಬಿಜೆಪಿ ಸರ್ಕಾರ ರದ್ದುಪಡಿಸಿದೆ. ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್‌ಶಿಪ್ ಕಸಿದುಕೊಂಡಿದೆ ಎಂದರು.
ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೇ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಈಡೇರಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳ ಇನ್ನು ಹೆಚ್ಚಿನ ಲಾಭ ದೇಶದ ಜನರಿಗೆ ಸಿಗುತ್ತದೆ. ಎಲ್ಲಾ ಜಾತಿ ಧರ್ಮದವರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲೇಬೇಕಾಗಿರುವುದರಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರನ್ನು ಪಾರ್ಲಿಮೆಂಟ್‍ಗೆ ಕಳಿಸಿಕೊಡಿ ಎಂದು ಕೋರಿದರು.ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದ ನರೇಂದ್ರ ಮೋದಿ ಸರ್ವಾಧಿಕಾರಿತನ ನಿಲ್ಲಬೇಕಾದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ಅದಕ್ಕಾಗಿ ಅಲ್ಪಸಂಖ್ಯಾತರ ಮತದಾನ ಹೆಚ್ಚಳವಾಗಬೇಕು ಎಂದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮಾತನಾಡಿ, ದೇಶ ಗಂಡಾಂತರದಲ್ಲಿದೆ. ಅಲ್ಪಸಂಖ್ಯಾತರು ಮನೆಯಲ್ಲಿ ಕುಳಿತುಕೊಳ್ಳದೆ ಕಡ್ಡಾಯವಾಗಿ ಮತ ಚಲಾಯಿಸಿ. ಜಾತಿ ಧರ್ಮಗಳನ್ನು ಎತ್ತಿಕಟ್ಟುತ್ತಿರುವ ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ ಎಂದರು.ಎಂಎಲ್ಸಿ ಅಬ್ದುಲ್ ಜಬ್ಬಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ನ್ಯಾಯವಾದಿ ಫಾತ್ಯರಾಜನ್, ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಚೇರ್ಮನ್ ಕೆ.ಅನ್ವರ್ ಪಾಷ, ನ್ಯಾಯವಾದಿ ಎ.ಸಾಧಿಕ್ ವುಲ್ಲಾ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಕೆಡಿಪಿ ಸದಸ್ಯ ನಾಗರಾಜ್, ಜಿಲ್ಲಾ ವಕ್ಪ್ ಮಂಡಳಿ ಚೇರ್ಮನ್ ಎಂಸಿಓ ಬಾಬು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಮುನಿರಾ ಎ.ಮಕಾಂದಾರ್ ಇನ್ನು ಅನೇಕರು ವೇದಿಕೆಯಲ್ಲಿದ್ದರು.
-------- 16 ಸಿಟಿಡಿ 1-
ಚಿತ್ರದುರ್ಗದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯನ್ನು ಸಚಿವ ಜಮೀರ್ ಅಹಮದ್ ಉದ್ಘಾಟಿಸಿದರು.