ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಅಶಾಂತಿ ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವೃತ್ತ ನಿರೀಕ್ಷಕ ನವೀನ್ ಹಾಗೂ ನಾರಾಯಣಿ ಅವರಿಗೆ ಶಾಸಕ ಕೆ.ಎಂ.ಉದಯ್ ಸೂಚನೆ ನೀಡಿದರು.ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ನಗರದಲ್ಲಿ ನಡೆದ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟದಿಂದ ಸಾಕಷ್ಟು ಅನಾಹುತ ಸಂಭವಿಸಿತು. ಈ ಘಟನೆಯಿಂದಾಗಿ ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ನಿಮ್ಮನ್ನು ನಿಯೋಜಿಸಲಾಗಿದೆ. ಹೀಗಾಗಿ ಮುಂದೆ ಯಾವುದೇ ಕಾರಣಕ್ಕೂ ಇಂತಹ ಘಟನೆಗಳು ಸಂಭವಿಸಬಾರದು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಈಗಾಗಲೇ ನಾಲ್ಕೈದು ಬಾರಿ ಕೆಡಿಪಿ ಸಭೆ ನಡೆಸಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಾಕಷ್ಟು ಸೂಚನೆ ನೀಡಿದ್ದರೂ ಅಧಿಕಾರಿಗಳು ತಮ್ಮ ಛಾಳಿ ಮುಂದುವರೆಸಿಕೊಂಡು ಹೋಗುತ್ತಿದ್ದಿರಿ. ಹೀಗೆ ಮುಂದುವರೆದರೆ ಕ್ರಮ ಜರುಗಿಸಬೇಕಾಗುತ್ತದೆ ಎಚ್ಚರಿಕೆ ನೀಡಿದರು.ಕೆಲ ಇಲಾಖೆಗಳಿಂದ ನಡೆಯುತ್ತಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ. ಸಂಬಂಧ ಪಟ್ಟ ಅಧಿಕಾರಿಗಳು ಆಗಾಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿದ ಮುಲಾಜಿಲ್ಲದೆ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿದರು.
ನಗರದ ಸ್ವಚ್ಛತೆ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಗರಸಭಾ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ಇದಕ್ಕೆ ಸಹಕಾರ ನೀಡಬೇಕು. ತಾಲೂಕಿನಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ ಎಂದು ಸಭೆಯಲ್ಲಿ ಅರಣ್ಯಾಧಿಕಾರಿಗಳ ವಿರುದ್ಧ ಶಾಸಕರು ಸಿಡಿಮಿಡಿಗೊಂಡರು.ವಲಯ ಅರಣ್ಯಾಧಿಕಾರಿ ಗವಿಯಪ್ಪ ಮಾತನಾಡಿ, ತಾಲೂಕಿನಲ್ಲಿ 10ಕ್ಕೂ ಚಿರತೆಗಳಿದ್ದು, ಈಗಾಗಲೇ 4 ಚಿರತೆಗಳನ್ನು ಸೆರೆ ಹಿಡಿಯಲಾಗಿದೆ. ಇನ್ನುಳಿದ ಚಿರತೆ ಸೆರಗೆ 9 ಕಡೆ ಬೋನುಗಳನ್ನು ಇಟ್ಟಿದ್ದು, ಅವುಗಳು ಸಿಗದಿದ್ದ ಪರಿಣಾಮ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಬೇಕಾದ ಅನಿವಾರ್ಯತೆ ಎದುರಾಗುತ್ತದೆ ಎಂದರು.
ಇನ್ನು ಮೂರ್ನಾಲ್ಕು ತಿಂಗಳಿಗೊಮ್ಮೆ ನಡೆಯುವ ಕೆಡಿಪಿ ಸಭೆಗೂ 10ಕ್ಕೂ ಹೆಚ್ಚು ಇಲಾಖಾ ಅಧಿಕಾರಿಗಳು ಗೈರಾಗಿದ್ದಾರೆ. ಅಂತಹ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿ ಎಂದು ತಾಪಂ ಇಓ ರಾಮಲಿಂಗಯ್ಯ ಅವರಿಗೆ ಸೂಚನೆ ನೀಡಿದರು.ವಿವೇಕಾನಂದರಿಂದ ಅಧಿಕಾರಿಗಳ ತರಾಟೆ:
ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಮಾತನಾಡಿ, ಕೊಪ್ಪ ಭಾಗದ ಕೊನೆ ಭಾಗಕ್ಕೆ ಕೃಷಿ ಚಟುವಟಿಕೆಗಳಿಗೆ ನೀರು ಹರಿಯುತ್ತಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಇಇ ನಂಜುಂಡೇಗೌಡ ಅವರನ್ನು ತರಾಟೆಗೆ ತೆಗೆದುಕೊಂಡರು.ಇಇ ನಂಜುಂಡೇಗೌಡ ಮಾತನಾಡಿ, ನಾಲೆಗಳ ಆಧುನಿಕರಣ ಕಾಮಗಾರಿಯಿಂದಾಗಿ ನೀರು ಸರಾಗವಾಗಿ ಹರಿಯಲು ತೊಂದರೆಯಾಗಿದೆ. ಇನ್ನು ಮುಂದೆ ಇಂತಹ ತೊಂದರೆ ಆಗದಂತೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ತಾಲೂಕಿನ ಕೊಪ್ಪ ಹೋಬಳಿ ಅವ್ವೇರಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮುರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರೈಸ್ ಮಿಲ್ ನಲ್ಲಿ ಸೌಲಭ್ಯ ಕಲ್ಪಿಸಿರುವ ಬಗ್ಗೆ ನಡೆದ ಕೆಡಿಪಿ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾಗರಾಜುರನ್ನು ತರಾಟೆ ತೆಗೆದುಕೊಂಡರು.ಅವ್ವೇರಹಳ್ಳಿಯ ವಸತಿ ಶಾಲೆ ಕಟ್ಟಡ ನಿರ್ಮಾಣ ಕಳೆದ ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ವ್ಯಾಸಂಗ ಮಾಡುತ್ತಿರುವ 52 ವಿದ್ಯಾರ್ಥಿಗಳಿಗೆ ಯಾವುದೇ ಮೂಲ ಸೌಲಭ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ತಾವು ವಿಧಾನ ಪರಿಷತ್ ಸಭೆಯಲ್ಲಿ ಚರ್ಚೆ ನಡೆಸಿದರು ಸಹ ಯಾವುದೇ ಪ್ರಯೋಜನವಾಗಿಲ್ಲ ಹರಿಹಾಯ್ದರು.
ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ವಿದ್ಯಾರ್ಥಿಗಳು ಬಡವರ ಮಕ್ಕಳಾಗಿದ್ದಾರೆ. ವಸತಿ ಶಾಲೆ ಕಟ್ಟಡ ಪೂರ್ಣ ಗೊಳ್ಳುವವರೆಗೆ ಕನಿಷ್ಠ ಬಾಡಿಗೆ ಕಟ್ಟಡದಲ್ಲಾದರೂ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ತಾಕೀತು ಮಾಡಿದರು.ಮಂಡ್ಯದಲ್ಲಿ ಈ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಸಮ್ಮುಖದಲ್ಲಿ ಚರ್ಚೆನಡೆಸಿದ್ದೆ. ಇದಕ್ಕೆ ಸಚಿವರು ಸೋಮನಹಳ್ಳಿ ಬಳಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಸಬೂಬು ಹೇಳಿದ್ದರು ಹೊರತು ಸಮಸ್ಯೆ ಬಗ್ಗೆ ಹರಿದಿಲ್ಲ. ಆನಂತರ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಆಡಳಿತಾಧಿಕಾರಿ ಶಿವಲಿಂಗಯ್ಯ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಇಒ ರಾಮಲಿಂಗಯ್ಯ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಸವರಾಜು, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.;Resize=(128,128))
;Resize=(128,128))