ಪಾಂಡವಪುರ ಪಟ್ಟಣದ ಕ್ರೀಡಾಂಗಣ, ಪ್ರಜಾಸೌಧ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಮೇಲುಕೋಟೆ ಪ್ರಾಧಿಕಾರ ಸ್ಥಾಪಿಸಿ ಕ್ಷೇತ್ರದ ಅಭಿವೃದ್ಧಿಗೆ ಬಲ ತುಂಬಬೇಕು. ಜಿಲ್ಲೆಯ ಎಲ್ಲಾ ಭಾಗಗಳಿಗೂ ವಿಸಿ ನಾಲಾ ನೀರು ಲಭ್ಯವಾಗುತ್ತಿಲ್ಲ. ಹೀಗಾಗಿ ವಿಸಿ ನಾಲಾ ಆಧುನೀಕರಣ ಕಾಮಗಾರಿ ಕೈಗೊಂಡು ನೀರಿನ ಸಮಸ್ಯೆ ನಿವಾರಿಸಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮೇಲುಕೋಟೆ ಅಭಿವೃದ್ಧಿ ಪ್ರಾಧಿಕಾರ ರಚನೆ, ಪಟ್ಟಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಿ ಬಲ ತುಂಬಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.

ಸೋಮವಾರ ಸಂಜೆ ಸಿಎಂ ಕರೆದಿದ್ದ ಜಿಲ್ಲೆ ಶಾಸಕರ ಸಭೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ಮತ್ತು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳತ್ತ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.

ಪಟ್ಟಣದ ಕ್ರೀಡಾಂಗಣ, ಪ್ರಜಾಸೌಧ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಮೇಲುಕೋಟೆ ಪ್ರಾಧಿಕಾರ ಸ್ಥಾಪಿಸಿ ಕ್ಷೇತ್ರದ ಅಭಿವೃದ್ಧಿಗೆ ಬಲ ತುಂಬಬೇಕು. ಜಿಲ್ಲೆಯ ಎಲ್ಲಾ ಭಾಗಗಳಿಗೂ ವಿಸಿ ನಾಲಾ ನೀರು ಲಭ್ಯವಾಗುತ್ತಿಲ್ಲ. ಹೀಗಾಗಿ ವಿಸಿ ನಾಲಾ ಆಧುನೀಕರಣ ಕಾಮಗಾರಿ ಕೈಗೊಂಡು ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಕೋರಿದ್ದಾರೆ.

ಬೆಂಗಳೂರು-ಮೈಸೂರು ಹೈವೆಯಿಂದ ಕೆಆರ್‌ಎಸ್‌ವರೆಗೂ ಎಕ್ಸ್‌ಪ್ರೆಸ್ ವೇ ನಿರ್ಮಾಣವಾಗಬೇಕು. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆ. ಪ್ರತಿಯೊಬ್ಬರಿಗೂ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ತಲುಪಿಸುವ ಹೊಸ ವ್ಯವಸ್ಥೆ ರೂಪಿಸಲು ರಾಜ್ಯಕ್ಕೆ ಸಿಟಿಒ (ಮುಖ್ಯ ತಂತ್ರಜ್ಞಾನ ಅಧಿಕಾರಿ) ಮಾದರಿ ಹುದ್ದೆ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಆ.16ರಂದು ಅನಧಿಕೃತ ಪಂಪ್‌ಸೆಟ್‌ಗಳ ತೆರವಿಗೆ ಸರ್ಕಾರ ಆದೇಶಿಸಿದ್ದು, ಈ ಆದೇಶವನ್ನು ಹಿಂಪಡೆಯಬೇಕು. ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಕೇವಲ ಸಾಲ ಮತ್ತು ಗೊಬ್ಬರ ವಿತರಣೆಗೆ ಸೀಮಿತಗೊಳಿಸದೆ ಸ್ಥಳೀಯವಾಗಿ ಲಭ್ಯವಿರುವ ಆಹಾರ ಪದಾರ್ಥಗಳ ಖರೀದಿಗೂ ಅವಕಾಶ ಮಾಡಿಕೊಡಬೇಕು. ಇದು ರಾಜ್ಯದ ಎಲ್ಲಾ ಸಹಕಾರ ಸಂಘಗಳಿಗೂ ಅನ್ವಯಿಸುವಂತೆ ನೀತಿ ರೂಪಿಸಬೇಕು ಎಂದು ಕೋರಿದ್ದಾರೆ.

ಸರ್ಕಾರದ ಆದೇಶದ ನಂತರವು ಕಿರುಸಾಲ ವಸೂಲಿಗೆ ಸಂಬಂಧಿಸಿದಂತೆ ನೀಡುತ್ತಿರುವ ಕಿರುಕುಳಕ್ಕೆ ಸಂಪೂರ್ಣ ಕಡಿವಾಣ ಬಿದ್ದಿಲ್ಲ. ಆದೇಶದ ಬಳಿಕವೂ ಮನೆ ಜಪ್ತಿ ಸೇರಿದಂತೆ ಇನ್ನಿತರೆ ಕ್ರಮ ಕೈಗೊಳ್ಳುವ ಮೂಲಕ ಮೈಕ್ರೋಫೈನಾನ್ಸ್ ಅಧಿಕಾರಿಗಳು ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಮತ್ತೊಮ್ಮೆ ಮೈಕ್ರೋಫೈನಾನ್ಸ್ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ವಿನಂತಿಸಿದ್ದಾರೆ.

ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ಪಿ.ರವಿಕುಮಾರ್, ರಮೇಶ್‌ ಬಂಡಿಸಿದ್ದೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ನಜೀರ್ ಅಹಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಇತರರು ಇದ್ದರು.