ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಮೂರನೇ ಬಾರಿಗೆ ಆಯ್ಕೆ ಬಯಸಿ ಕಣಕ್ಕಿಳಿದಿದ್ದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಶಾಸಕ ಡಾ. ಚಂದ್ರು ಲಮಾಣಿ ಮತದಾರರಲ್ಲಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಶಿರಹಟ್ಟಿ

ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಮೂರನೇ ಬಾರಿಗೆ ಆಯ್ಕೆ ಬಯಸಿ ಕಣಕ್ಕಿಳಿದಿದ್ದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಶಾಸಕ ಡಾ. ಚಂದ್ರು ಲಮಾಣಿ ಮತದಾರರಲ್ಲಿ ಮನವಿ ಮಾಡಿದರು.

ಶಿರಹಟ್ಟಿ ಪಟ್ಟಣದಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ವಿಧಾನಪರಿಷತ್ ಚುನಾವಣೆಯಲ್ಲಿ ಮತದಾರರು ತಮ್ಮ ಅಮೂಲ್ಯ ಮತವನ್ನು ಸಮರ್ಥ ಅಭ್ಯರ್ಥಿಯ ಆಯ್ಕೆಗೆ ಬಳಸಬೇಕು. ಅಭ್ಯರ್ಥಿಯ ಅನುಭವ, ಸೇವಾ ಮನೋಭಾವ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಮತದಾನ ಮಾಡುವುದು ಅಗತ್ಯವಾಗಿದೆ. ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತದ ಮಹತ್ವವನ್ನು ಅರಿತು ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿದರು.

ಪದವೀಧರರು ಎದುರಿಸುತ್ತಿರುವ ಉದ್ಯೋಗದ ಸಮಸ್ಯೆಗಳು, ನಿರುದ್ಯೋಗ, ಶಿಕ್ಷಣ ಕ್ಷೇತ್ರದಲ್ಲಿನ ಸವಾಲುಗಳು ಹಾಗೂ ಶಿಕ್ಷಕರ ವಿವಿಧ ಬೇಡಿಕೆಗಳಿಗೆ ಸೂಕ್ತ ಪರಿಹಾರ ದೊರೆಯಬೇಕಿದೆ. ಈ ನಿಟ್ಟಿನಲ್ಲಿ ಪದವೀಧರರ ಸಮಸ್ಯೆಗಳನ್ನು ಸಮರ್ಥವಾಗಿ ಸದನದಲ್ಲಿ ಪ್ರಸ್ತಾಪಿಸಿ, ಸರ್ಕಾರದ ಗಮನ ಸೆಳೆಯುವ ಪ್ರತಿನಿಧಿಗಳ ಅಗತ್ಯವಿದೆ ಎಂದು ಹೇಳಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ ಮಾತನಾಡಿದರು. ಮುಖಂಡರಾದ ಜಾನು ಲಮಾಣಿ, ಫಕ್ಕೀರೇಶ ರಟ್ಟಿಹಳ್ಳಿ, ರಾಮಣ್ಣ ಕಂಬಳಿ, ಅಶೋಕ ವರವಿ, ಶಶಿ ಪೂಜಾರ, ಮಾರ್ತಂಡಪ್ಪ ಹಾದಿಮನಿ, ಶರಣಪ್ಪ ಹೂಗಾರ, ಅಪ್ಪಣ್ಣ ಕುಬೇರ, ಬಸವರಾಜ ಕಲ್ಲಪ್ಪನವರ ಇತರರಿದ್ದರು.