ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಪೂಂಜ ಭೇಟಿ

| Published : Jul 02 2024, 01:48 AM IST

ಸಾರಾಂಶ

ಇಲ್ಲಿನ ತಾಲೂಕು ಕಚೇರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಇಲ್ಲಿನ ತಾಲೂಕು ಕಚೇರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೋಮವಾರ

ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ವೆ ಇಲಾಖೆಗೆ ಭೇಟಿ ನೀಡಿದ ಶಾಸಕರು ಸಾವಿರಾರು ಸಂಖ್ಯೆಯಲ್ಲಿ ಕಡತಗಳು ಬಾಕಿಯಾಗಿರುವ ಬಗ್ಗೆ ಪ್ರಶ್ನಿಸಿದರು. ಅಲ್ಲದೆ ಇಲಾಖೆಯಲ್ಲಿ ಏಕ ವ್ಯಕ್ತಿ ನಿವೇಶನ ಮತ್ತು 1-5 ಸರ್ವೆಯ ದಾಖಲೆಗಳನ್ನು ಪರಿಶೀಲಿಸಿದರು. 1400ಕ್ಕೂ ಹೆಚ್ಚು ಕಡತಗಳು ಬಾಕಿಯಾಗಿದ್ದು ಇದನ್ನು ಕೂಡಲೇ ವಿಲೇ ಮಾಡುವಂತೆ ಶಾಸಕರು ಸೂಚಿಸಿದರು. ಈ ಕಡತಗಳು ಯಾವ ಹಂತದಲ್ಲಿದೆ ಎಂಬ ಬಗ್ಗೆ ತನಗೆ ಕೂಡಲೇ ಮಾಹಿತಿ ನೀಡುವಂತೆಯೂ ಅವರು ಸೂಚಿಸಿದರು. ಸಾರ್ವಜನಿಕರು ನೀಡಿದ ದೂರುಗಳನ್ನು ಪರಿಶೀಲಿಸಿದ ಶಾಸಕರು ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಕಚೇರಿಯ ಸ್ವಚ್ಛತೆಯ ಕೊರತೆಯ ಬಗ್ಗೆ ಶಾಸಕರು ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಶಾಸಕರು ಯಾವರೀತಿಯಾಗಿ ಕೆಲಸ ಕಾರ್ಯ ನಡೆಯುತ್ತಿದೆ ಯಾವೆಲ್ಲ ಕಡತಗಳು ಬಾಕಿಯಿದೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡರು.

ಶಿರ್ಲಾಲಿನಲ್ಲಿ ನದಿ ಒತ್ತುವರಿ ಮಾಡಿರುವ ದೂರು ಬಂದ ಹಿನ್ನಲೆಯಲ್ಲಿ ಈ ಬಗ್ಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಶಾಸಕರು ತಹಸೀಲ್ದಾರರಿಗೆ ಸೂಚಿಸಿದರು. ಈ ಬಗ್ಗೆ ಪರಿಶೀಲಿಸಿ ಎಲ್ಲ ಅಕ್ರಮಗಳನ್ನು ತೆರವುಗೊಳಿಸುವುದಾಗಿ ತಹಸೀಲ್ದಾರ್ ತಿಳಿಸಿದರು.

ಕಣಿಯೂರಿನಲ್ಲಿ ಜಮೀನು ಅಕ್ರಮ ಮಾಡಿ ಕೃಷಿಮಾಡುವ ಪ್ರಯತ್ನ ನಡೆಸುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆಯೂ ತಹಸೀಲ್ದಾರರಿಗೆ ಸೂಚಿಸಿದರು.

ಕೊಕ್ಕಡದ ನಾಲ್ಕು ಕುಟುಂಬಗಳಿಗೆ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲ ಅವರಿಗೆ ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ದಾಖಲೆಪತ್ರಗಳು ಇಲ್ಲ ಅವರು ವಾಸಿಸುವ ಮನೆಗಳು ಯಾವುದೇ ಕ್ಷಣದಲ್ಲಿ ಕುಸಿಯುವ ಹಂತದಲ್ಲಿದೆ ಎಂದು ಕೊಕ್ಕಡದ ಗ್ರಾ.ಪಂ ಮಾಜಿ ಅಧ್ಯಕ್ಷ ಯೋಗೀಶ್ ಅವರು ಶಾಸಕರ ಹಾಗೂ ಅಧಿಕಾರಿಗಳ ಗಮನ ಸೆಳೆದರು.

ಈ ಬಗ್ಗೆ ಈಗಾಗಲೇ ಮಾಹಿತಿ ಬಂದಿದೆ ಎಂದ ತಹಸೀಲ್ದಾರರು ಸುರಕ್ಷಿತವಲ್ಲದ ಮನೆಯಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ತಾತ್ಕಾಲಿಕ ಕಾಳಜಿ ಕೇಂದ್ರಗಳಿಗೆ ಕಳುಹಿಸುವ ಕಾರ್ಯ ಮಾಡುವುದಾಗಿ ತಿಳಿಸಿದರು. ಈ ಕುಟುಂಬಗಳಿಗೆ ಅಗತ್ಯ ದಾಖಲೆಗಳನ್ನು ಮಾಡಿಕೊಡುವಂತೆಯೂ ಅವರಿಗೆ ಮನೆಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ ಹಾಗೂ ಇತರರು ಇದ್ದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪೂಂಜ, ತಾಲೂಕು ಕಚೇರಿಯಲ್ಲಿ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದೆ ಸುಲಭವಾಗಿ ಕೆಲಸ ಕಾರ್ಯಗಳು ನಡೆಯಬೇಕು. ಅನಗತ್ಯವಾಗಿ ಜನರು ಅಲೆದಾಡುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಜನರ ಅಗತ್ಯ ಕೆಲಸಗಳನ್ನು ಯಾವುದೇ ಅನಗತ್ಯ ವಿಳಂಬ ಮಾಡದೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ತಾಲೂಕಿನಲ್ಲಿ ಒಟ್ಟು 95ಸಿ ಕಡತಗಳು 1612 ಬಾಕಿಯಿದ್ದು ಅದರಲ್ಲಿ 1198 ಅರ್ಜಿಗಳು ಅರಣ್ಯ ಇಲಾಖೆಯ ಅಭಿಪ್ರಾಯಕ್ಕಾಗಿ ವರ್ಗಾವಣೆಯಾಗಿದೆ. 318 ಅರ್ಜಿಗಳು ತಾಲೂಕು ಕಚೇರಿಯಲ್ಲಿ ಬಾಕಿಯಿದೆ ಎಂಬ ಮಾಹಿತಿ ಅಧಿಕಾರಿಗಳು ನೀಡಿದ್ದು ಅರಣ್ಯ ಇಲಾಖೆಯ ಬಳಿ ಇರುವ ಅರ್ಜಿಗಳು ಯಾವ ಹಂತದಲ್ಲಿದೆ ಎಂಬ ಬಗ್ಗೆ ಅವರಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ತಾಲೂಕು ಕಚೇರಿಯಲ್ಲಿ ಸ್ವಚ್ಚತೆಯ ಕೊರತೆ ತೀವ್ರವಾಗಿ ಕಂಡು ಬರುತ್ತಿದೆ. ಕಟ್ಟಡದ ನಿರ್ವಹಣೆಗೆ ಹಾಗೂ ಸ್ವಚ್ಚತೆಗೆ ಅನುದಾನ ನೀಡುವಂತೆ ಜಿಲ್ಲಾಧಿಕಾರಿ ಅವರನ್ನು ಕೇಳಿಕೊಳ್ಳುವುದಾಗಿಯೂ ಅವರು ತಿಳಿಸಿದರು.